ಪರಿಹಾರ ಘೋಷಿಸಿ ಒಂದೂವರೆ ತಿಂಗಳಾದರೂ ಬೆಳೆ ಪರಿಹಾರ ನೀಡಿಲ್ಲ: ಬಿ ವೈ ವಿಜಯೇಂದ್ರ ವಾಗ್ದಾಳಿ
ಬೆಂಗಳೂರು,ನವೆಂಬರ್ 16: ಬೆಳೆಹಾನಿಗೆ ಪರಿಹಾರ ಘೋಷಿಸಿ ಒಂದೂವರೆ ತಿಂಗಳಾದರೂ ಪರಿಹಾರ ಕೊಡುವಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿಲ್ಲ. ವೈರಲ್ ಇನ್‍ಫೆಕ್ಷನ್ ಆಗಿ ಭತ್ತದ ಬೆಳೆ ಹಾನಿಗೊಳಗಾಗಿದೆ. ಇವುಗಳನ್ನು ಚರ್ಚಿಸಿದ್ದು, ರಾಜ್ಯ ಸರಕಾರ ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಬೆಂಗಳೂರಿಗೆ ಸೀಮಿತವಾಗಿದೆ, ನಾಡಿನ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಈ ನಾಡಿನ ರೈತರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿಲ್ಲ ಎಂದು ಇಂದಿನ ಪಕ್ಷದ ನಾಯಕರ ಸಭೆ ಅಭಿಪ್ರಾಯಪಟ್ಟಿದೆ ಎಂದರು. ಬರದ ಸಂದರ್ಭದಲ್ಲಿ ರಾಜ್ಯ ಸರಕಾರ ಎಚ್ಚತ್ತುಕೊಂಡಿಲ್ಲ, ಅತಿವೃಷ್ಟಿ ಸಂದರ್ಭದಲ್ಲೂ ತಲೆ ಕೆಡಿಸಿಕೊಂಡಿಲ್ಲ. ಕಬ್ಬು ಬೆಳೆಗಾರರು ನಿರಂತರ ಹೋರಾಟ ಮಾಡಿದರೂ ಸ್ಪಂದಿಸಿಲ್ಲ. ಈಗ ಮೆಕ್ಕೆಜೋಳ ಬೆಳೆಯುವ ರೈತರೂ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರಕಾರ ಇನ್ನೂ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿಲ್ಲ ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಪಕ್ಷದ ಅಪಪ್ರಚಾರದ ನಡುವೆಯೂ ಬಿಹಾರ ರಾಜ್ಯದಲ್ಲಿ ಎನ್‍ಡಿಎ ಐತಿಹಾಸಿಕ ಗೆಲುವು ದಾಖಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಬಿಹಾರ ರಾಜ್ಯದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ- ಜೆಡಿಯು ಒಳಗೊಂಡ ಎನ್‍ಡಿಎ ಕೂಟ ಪ್ರಚಂಡ ಜಯಭೇರಿ ಬಾರಿಸಿದೆ ಎಂದು ವಿಶ್ಲೇಷಿಸಿದರು. ನರೇಂದ್ರ ಮೋದಿ ಅವರ ಜನಪ್ರಿಯತೆ, ಬಿಹಾರ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ನೋಡಿ ಬಿಹಾರ ರಾಜ್ಯದ ಮತದಾರರು ಮತ್ತೊಮ್ಮೆ ಎನ್‍ಡಿಎ ಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು.
ಚುನಾವಣಾ ಚಾಣಕ್ಯ ಅಮಿತ್ ಶಾ ಜೀ ಅವರ ಕಾರ್ಯತಂತ್ರ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೀ ಅವರ ನೇತೃತ್ವ, ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಪ್ರಯತ್ನ, ಎರಡೂ ಪಕ್ಷಗಳ ಕಾರ್ಯಕರ್ತರ ಪರಿಶ್ರಮ- ಇದೆಲ್ಲದರ ಪರಿಣಾಮವಾಗಿ ಒಂದು ಐತಿಹಾಸಿಕ ಗೆಲುವು ದಾಖಲಾಗಿದೆ. ರಾಹುಲ್ ಗಾಂಧಿಯವರು ಮತಗಳ್ಳತನದ ಕುರಿತು ಬಿಹಾರ ರಾಜ್ಯದ ಚುನಾವಣೆ ಮುಗಿಯುವವರೆಗೂ ಅಪಪ್ರಚಾರ ಮಾಡಿದ್ದರು. ಒಂದು ರೀತಿ ಅರಾಜಕತೆ ಸೃಷ್ಟಿಸುವ ಷಡ್ಯಂತ್ರ, ಕುತಂತ್ರವನ್ನು ಕಾಂಗ್ರೆಸ್ ಪಕ್ಷ ಮಾಡಿದ್ದರೂ ಅಲ್ಲಿನ ಮತದಾರರು ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಎಂದು ಅವರು ಹೇಳಿದರು.
ಉತ್ತರ ಕರ್ನಾಟಕ ಮತ್ತು ರೈತರ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ಚೆಲ್ಲಾಟ ಆಡುತ್ತಿದೆ. ಅಲ್ಲದೇ, ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ಮೆಕ್ಕೆಜೋಳ ಬೆಳೆಯುವ ರೈತರು ಸಂಕಷ್ಟದಲ್ಲಿದ್ದು, ಎಲ್ಲ ತಾಲ್ಲೂಕುಗಳಲ್ಲಿ ಬಿಜೆಪಿ ಹೋರಾಟ ಮಾಡಲಿದೆ. ರಾಜ್ಯ ಸರಕಾರವು ತಕ್ಷಣ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಒತ್ತಾಯಿಸಲಿದೆ ಎಂದು ಹೇಳಿದರು. ತುಂಗಭದ್ರಾ ಜಲಾಶಯದ ವ್ಯಾಪ್ತಿಯ 4 ಜಿಲ್ಲೆಗಳ ರೈತರನ್ನು ಸೇರಿಸಿಕೊಂಡು ಸ್ಥಳೀಯವಾಗಿ ಹೋರಾಟ ರೂಪಿಸಲಿದ್ದೇವೆ. ಎರಡನೇ ಬೆಳೆಗೂ ರಾಜ್ಯ ಸರಕಾರ ನೀರನ್ನು ಕೊಡಬೇಕು. ಒಂದು ವೇಳೆ ನೀರು ಬಿಡುಗಡೆ ಮಾಡಲು ಸಾಧ್ಯ ಆಗದೇ ಇದ್ದರೆ ರಾಜ್ಯ ಸರಕಾರವು ಆ ಭಾಗದ ರೈತರಿಗೆ ಎಕರೆಗೆ 25 ಸಾವಿರ ರೂಪಾಯಿ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದರು.












Click it and Unblock the Notifications