ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಔಟ್: ಸಿಟಿ ರವಿಗೆ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಬಹುತೇಕ ಪಕ್ಕಾ
ಬೆಂಗಳೂರು, ಜುಲೈ 29: ಮೇ 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಹೈಕಮಾಂಡ್ ಹೊಸ ತಂಡವನ್ನು ರಚಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ರಚಿಸಲಾದ ತಂಡಕ್ಕೆ ಹೊಸಬರು ಸೇರ್ಪಡೆಗೊಂಡಿದ್ದಾರೆ. ಆದರೆ, ಕೆಲ ನಾಯಕರನ್ನು ಕೈಬಿಡಲಾಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿಟಿ ರವಿ ಅವರನ್ನು ಕೆಳಗಿಳಿಸಲಾಗಿದೆ. ಕಾರಣ, ಅವರನ್ನು ಕರ್ನಾಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸುವುದು ಬಹುತೇಕ ಪಕ್ಕಾ ಆಗಿದೆ ಎಂದು ಮೂಲಗಳು ತಿಳಿಸಿವೆ.
ನಳೀನ್ ಕುಮಾರ್ ಜಾಗಕ್ಕೆ ಸಿಟಿ ರವಿ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಏಕೈಕ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿಟಿ ರವಿ ಅವರನ್ನು ಹುದ್ದೆಯಿಂದ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. ಈಗ ಅಧ್ಯಕ್ಷರಾಗಿರುವ ನಳೀನ್ ಕುಮಾರ್ ಕಟೀಲ್ ಸ್ಥಾನಕ್ಕೆ ಸಿಟಿ ರವಿ ಅವರನ್ನು ತಂದು ಕೂಡಿಸುವ ಬಯಕೆಯನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಹೊಸ ತಂಡದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಹೊರತುಪಡಿಸಿ, ಕರ್ನಾಟಕದ ಯಾವುದೇ ನಾಯಕರು ಸ್ಥಾನ ಪಡೆದಿಲ್ಲ ಎಂಬುದು ಇಲ್ಲಿ ಗಮನಾರ್ಹ ಸಂಗತಿಯಾಗಿದೆ.
ಇತ್ತೀಚೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಪಕ್ಷದ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೆಹಲಿಯಲ್ಲಿ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರೂ ಸಹ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಇವರಿಬ್ಬರಲ್ಲಿ ಯಾರಿಗಾದರೂ ಪಕ್ಷದಲ್ಲಿ ಪ್ರಮುಖ ಸ್ಥಾನ ಸಿಗಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಬಿಜೆಪಿ ರಾಷ್ಟ್ರೀಯ ನಾಯಕರು ಬೇರೆ ನಿರ್ಧಾರಕ್ಕೆ ಬಂದಂತೆ ಕಾಣುತ್ತಿದೆ.

ಚುನಾವಣಾ ಫಲಿತಾಂಶ ಪ್ರಕಟವಾಗಿ 75 ದಿನಗಳು ಕಳೆದರೂ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಬಿಜೆಪಿ ನೇಮಿಸಿಲ್ಲ. ಇದು ಆಡಳಿತಾರೂಢ ಕಾಂಗ್ರೆಸ್ಸಿನ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಮುಖಭಂಗ ಅನುಭವಿಸುತ್ತಿರುವುದು ಮೇಲ್ನೊಟಕ್ಕೆ ಕಾಣುತ್ತಿದೆ.
ಬಿಜೆಪಿ ಹೈಕಮಾಂಡ್ ಲೆಕ್ಕಾಚಾರವೇನು?
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲಾಗಿತ್ತು. ಈಗ ನಳೀನ್ ಕುಮಾರ್ ಕಟೀಲ್ ಅವರನ್ನು ಹುದ್ದೆಯಿಂದ ತೆಗೆದುಹಾಕಲು ಒತ್ತಡಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ಯೋಗ್ಯವಾದ ನಾಯಕನನ್ನು ಬಿಜೆಪಿ ಹೈಕಮಾಂಡ್ ಹುಡುಕುತ್ತಿದೆ.

ಈಗ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗಮನಿಸುವುದಾದರೆ, ಸಿಟಿ ರವಿ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಬಹುತೇಕ ಪಕ್ಕಾ ಆಗಿದೆ ಎಂದು ಪಕ್ಷದ ಕೆಲ ಪದಾಧಿಕಾರಿಗಳು ಖಚಿತಪಡಿಸಿದ್ದಾರೆ.
ಒಕ್ಕಲಿಗರಿಗೆ ಗಾಳ
ಹಿಂದಿನ ಚುನಾವಣೆಗೆ ಹೋಲಿಸಿದರೆ, ಈ ಬಾರಿಯ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಇದು ಒಕ್ಕಲಿಗರ ಭದ್ರಕೋಟೆಯಾಗಿದ್ದು, ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಚಿಂತನೆಯನ್ನು ಬಿಜೆಪಿ ಹೈಕಮಾಂಡ್ ನಡೆಸಿದೆ. ಈ ಹಿನ್ನೆಲೆಯಲ್ಲಿ ಸಿಟಿ ರವಿ ಅವರಿಗೆ ಮಣೆ ಹಾಕುವುದು ಖಚಿತವಾದಂತೆ ಕಾಣುತ್ತಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಒಕ್ಕಲಿಗ ನಾಯಕರೊಬ್ಬರು ರಾಜ್ಯಾಧ್ಯಕ್ಷರಾದರೆ ಲಿಂಗಾಯತ ನಾಯಕರೊಬ್ಬರನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ಪಕ್ಷದ ನಾಯಕನ ಸ್ಥಾನದ ರೇಸ್‌ನಲ್ಲಿದ್ದಾರೆ.












Click it and Unblock the Notifications