Karnataka Rains: ಚಂಡಮಾರುತ ಪ್ರಭಾವ: ಬೆಂಗಳೂರು ಸೇರಿದಂತೆ ಕರ್ನಾಟಕದ ಈ ಜಿಲ್ಲೆಗಳಲ್ಲಿ 5 ದಿನ ಭರ್ಜರಿ ಮಳೆ!
Karnataka Rains: ಮುಂಗಾರು ಪೂರ್ವ ಮಳೆಯು ದೇಶಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದು. ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಗ್ನೇಯ ಬಂಗಾಳಕೊಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಭಾಗದಲ್ಲಿ ಟ್ರಫ್ ಸೃಷ್ಟಿಯಾಗಿದೆ. ಈಗಾಗಲೇ ರಾಜ್ಯದ ವಿವಿಧ ಭಾಗದಲ್ಲಿ ಮಳೆ ಆಗುತ್ತಿದೆ. ಇದೀಗ ಏಪ್ರಿಲ್ 11ರ ವರೆಗೆ ಕರ್ನಾಟಕದಲ್ಲಿ ಮಳೆ ಇರಲಿದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ. ಯಾವೆಲ್ಲ ಜಿಲ್ಲೆಯಲ್ಲಿ ಮಳೆಯಾಗಲಿದೆ ಎನ್ನುವ ವಿವರ ಇಲ್ಲಿದೆ.
ಚಂಡಮಾರುತ ಪ್ರಭಾವದಿಂದಾಗಿ ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ಕಡಿಮೆ ಒತ್ತಡ ರೂಪುಗೊಂಡಿದೆ. ಇದರ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಹಲವು ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭರ್ಜರಿ ಮಳೆ ಇರಲಿದೆ ಎಂದು ಐಎಂಡಿ ತಿಳಿಸಿದೆ. ಮುಂದಿನ ಐದು ದಿನಗಳ ವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ. ಮುಂದಿನ ದಿನಗಳಲ್ಲಿ ಭರ್ಜರಿ ಮಳೆ ಇರಲಿದೆ.

ಈ ಜಿಲ್ಲೆಗಳಲ್ಲಿ ಐದು ದಿನ ಭಾರೀ ಮಳೆ!
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಾಳಿಯ ವೇಗವು 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದ್ದು, ಬಿರುಗಾಳಿ ಸಹಿತ ಮಿಂಚು ಮತ್ತು ಗುಡುಗಿನೊಂದಿಗೆ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರಿಪೋರ್ಟ್ ತಿಳಿಸಿದೆ.

ಇನ್ನು ದಕ್ಷಿಣ ಕರ್ನಾಟಕದ ಭಾಗದಲ್ಲಿ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಇದರೊಂದಿಗೆ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಏಪ್ರಿಲ್ 12 ಮತ್ತು 13ಕ್ಕೆ ಈ ಭಾಗದಲ್ಲಿ ಮಳೆ: ಇನ್ನು ಏಪ್ರಿಲ್ 12 ಮತ್ತು 13ಕ್ಕೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭರ್ಜರಿ ಮಳೆಯಾಗಲಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ. ಇದರೊಂದಿಗೆ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಭರ್ಜರಿ ಮಳೆಯಾಗಲಿದೆ.
ಎರಡೂ ದಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.
ಈ ರಾಜ್ಯಗಳಲ್ಲೂ ಭರ್ಜರಿ ಮಳೆ
ಇನ್ನು ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳಾದ ತಮಿಳುನಾಡು ಹಾಗೂ ತೆಲಂಗಾಣದಲ್ಲಿ ಮಳೆಯಾರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬಿಹಾರ, ಜಾರ್ಖಂಡ್, ಛತ್ತೀಸ್ಗಢ ಸೇರಿದಂತೆ ಹಲವು ಭಾಗದಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದಲ್ಲಿ ಏಪ್ರಿಲ್ 17ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.












Click it and Unblock the Notifications