Karnataka Rains: ಸೈಕ್ಲೋನ್ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 20 ಜಿಲ್ಲೆಗಳಲ್ಲಿ 1 ವಾರ ಭಾರೀ ಮಳೆ: ಐಎಂಡಿ ರಿಪೋರ್ಟ್
Karnataka Rains: ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 9ರ ವರೆಗೆ ಧಾರಾಕಾರ ಮಳೆ ಆಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರ್ನಾಟಕದಲ್ಲಿ ಧಾರಾಕಾರ ಮಳೆ ಆಗುತ್ತಿದೆ.
ಕರ್ನಾಟಕದಲ್ಲಿ ಇನ್ನೂ ಒಂದು ವಾರದ ಅವಧಿಗೆ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಗುರುವಾರವೂ ಸಹ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಿದೆ. ದೇಶದ ವಿವಿಧ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ಚಂಡಮಾರುತದ ಪ್ರಭಾವ ತೀವ್ರವಾಗಿರುವುದರಿಂದ ಮಳೆಯೊಂದಿಗೆ ಚಳಿ ವಾತಾವರಣವೂ ಇರಲಿದೆ.

ಈ ಪ್ರದೇಶಗಳಲ್ಲಿ ಮಳೆ: ಇನ್ನು ಮುಂದಿನ ಒಂದು ವಾರದ ಅವಧಿಗೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಇರಲಿದೆ. ಅಲ್ಲದೇ ಮಲೆನಾಡಿನ ಹಾಸನ, ಕೊಡಗು,ಶಿವಮೊಗ್ಗ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಇರಲಿದೆ.
ಅಲ್ಲದೇ ಉತ್ತರ ಒಳನಾಡಿನ ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಇನ್ನೊಂದು ವಾರ ರಾಜ್ಯದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗಲಿದೆ. ಅಕ್ಟೋಬರ್ 4ರಂದು ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ. ವಾರಾಂತ್ಯ ಶನಿವಾರದಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಅಲ್ಲದೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆಗಲಿದೆ.
ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆ ಆಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹೇಗಿದೆ ವಾತಾವರಣ: ಇನ್ನು ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರಿನ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಗರಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.












Click it and Unblock the Notifications