Government Employee: ತುಟ್ಟಿಭತ್ಯೆ ಎಷ್ಟು ಏರಿಕೆ?, ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಪತ್ರ
ಬೆಂಗಳೂರು, ಅಕ್ಟೋಬರ್ 23: ದೀಪಾವಳಿ ಹಬ್ಬಕ್ಕೆ ಕೆಲವು ದಿನಗಳು ಇರುವಾಗ ಕೇಂದ್ರದ ಎನ್‌ಡಿಎ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಏರಿಕೆ ಮಾಡಿ ಬಂಪರ್ ಕೊಡಗೆ ನೀಡಿದೆ. ಕೇಂದ್ರದಲ್ಲಿ ಡಿಎ ಹೆಚ್ಚಳದ ಬಳಿಕ ಕರ್ನಾಟಕ ರಾಜ್ಯ ಸರ್ಕಾರ ಡಿಎ ಏರಿಕೆ ಕುರಿತು ಆದೇಶವನ್ನು ಹೊರಡಿಸುತ್ತದೆ. 7ನೇ ವೇತನ ಆಯೋಗದ ವರದಿ ಶಿಫಾರಸಿನ ಅನ್ವಯ ರಾಜ್ಯ ಸರ್ಕಾರಿ ನೌಕರರ ಡಿಎ ಹೆಚ್ಚಳದ ಕುರಿತು ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆಯಲಾಗಿದೆ.
ಕರ್ನಾಟಕದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಇವರಿಗೆ ಪತ್ರವನ್ನು ಬರೆದಿದ್ದಾರೆ. ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಕುರಿತು ಎಂದು ವಿವರಣೆ ನೀಡಿದ್ದಾರೆ.

ಎಷ್ಟು ಡಿಎ ಏರಿಕೆ?: ಈ ಪತ್ರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ 01-07-2024ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ. ಕೇಂದ್ರ ಸರ್ಕಾರದ ಆದೇಶ ಸಂ:l/5/2024-E.II(B) ದಿನಾಂಕ 21-10-2024 ಉಲ್ಲೇಖಿಸಿದ್ದಾರೆ.
ಈ ವಿಷಯದನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿರುತ್ತದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ 01-07-2024ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ.
ಆದ್ದರಿಂದ, ಉಲ್ಲೇಖಿತ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ದಿನಾಂಕ 01-07-2024 ರಿಂದ ಅನ್ವಯವಾಗುವಂತೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ತಮ್ಮಲ್ಲಿ ಕೋರಿದೆ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ 3ರಷ್ಟು ಹೆಚ್ಚುವರಿ ಕಂತಿನ ತುಟ್ಟಿಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಅನ್ನು ನೀಡಲು ಅನುಮೋದನೆ ನೀಡಲಾಗಿತ್ತು. ಈ ಕುರಿತು ಈಗಾಗಲೇ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ಏರಿಕೆಯಾದ ತುಟ್ಟಿಭತ್ಯೆ ಕೈ ಸೇರಲಿದೆ.
ಬೆಲೆ ಏರಿಕೆಯನ್ನು ಸರಿದೂಗಿಸಲು ದಿನಾಂಕ 01/07/2024ರಿಂದ ಅನ್ವಯವಾಗುವಂತೆ ಅಸ್ತಿತ್ವದಲ್ಲಿರುವ ಮೂಲ ವೇತನ/ ಪಿಂಚಣಿಯ ಶೇಕಡ 50ಕ್ಕಿಂತ ಹೆಚ್ಚಿನ ಪ್ರಮಾಣಕ್ಕೆ ಅನುಮೋದನೆ ನೀಡಲಾಗಿದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ. ಕರ್ನಾಟಕ ಸರ್ಕಾರ ರಚನೆ ಮಾಡಿದ್ದ ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗ ಕೇಂದ್ರ ಸರ್ಕಾರ ತುಟ್ಟಿಭತ್ಯೆ ಏರಿಕೆ ಮಾಡಿದ ಬಳಿಕ ರಾಜ್ಯದಲ್ಲಿ ಏರಿಕೆ ಮಾಡಬೇಕು ಎಂದು ಶಿಫಾರಸು ಮಾಡಿದೆ.
ಕೇಂದ್ರ ಸರ್ಕಾರ ಡಿಎ ಮತ್ತು ಡಿಆರ್ ಎರಡೂ ಹೆಚ್ಚಳದಿಂದಾಗಿ ಬೊಕ್ಕಸದ ಮೇಲಿನ ಸಂಯೋಜಿತ ವಾರ್ಷಿಕ ಹೊರೆಯು ರೂ. 9,448.35 ಕೋಟಿಗಳಾಗಿರುತ್ತದೆ. ಈ ನಿರ್ಧಾರದಿಂದಾಗಿ ಸುಮಾರು 49.18 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು 64.89 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ರಾಜ್ಯ ಸರ್ಕಾರ ಯಾವಾಗ ತುಟ್ಟಿಭತ್ಯೆ ಏರಿಕೆ ಮಾಡಲಿದೆ? ಎಂದು ಕಾದು ನೋಡಬೇಕು.












Click it and Unblock the Notifications