Darshan: ದರ್ಶನ್ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ
ಬೆಂಗಳೂರು, ಜುಲೈ 18: ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಮನೆಯ ಊಟ ತರಿಸಿಕೊಳ್ಳಲು ಅವಕಾಶ ನೀಡಬೇಕು ಎಂಬ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರಕ್ಕೆ ಮುಂದೂಡಿಕೆ ಮಾಡಿದೆ.
ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಗುರುವಾರ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಮುಂದೆ ಎಲ್ಲಾ 17 ಆರೋಪಿಗಳನ್ನು ಹಾಜರುಪಡಿಸಿದ್ದರು.

ಕೋರ್ಟ್ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನ (ಆಗಸ್ಟ್ 1) ತನಕ ವಿಸ್ತರಣೆ ಮಾಡಿತು. ನಟ ದರ್ಶನ್ ಸೇರಿ 13 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ, ನಾಲ್ವರು ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ.
ಮೈಸೂರಿನಲ್ಲಿ ನಟ ದರ್ಶನ್‌ರನ್ನು ಜೂನ್ 11ರಂದು ಬಂಧಿಸಲಾಗಿತ್ತು. ವಿಚಾರಣೆ ಬಳಿಕ ಜೂನ್ 22ರಂದು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. 14 ದಿನಗಳ ಬಳಿಕ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು.
ಗುರುವಾರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಪುನಃ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಈಗ ಕೋರ್ಟ್ ನಟ ದರ್ಶನ್ ಮತ್ತು ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದರು. ಆದ್ದರಿಂದ ಅವರನ್ನು ಚಿತ್ರದುರ್ಗದಿಂದ ಅಪಹರಣ ಮಾಡಿಕೊಂಡು ಬೆಂಗಳೂರಿಗೆ ಕರೆ ತರಲಾಗಿತ್ತು. ಬಳಿಕ ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿ, ಹತ್ಯೆ ಮಾಡಲಾಗಿತ್ತು. ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾಜಾ ಕಾಲುವೆಗೆ ಎಸೆಯಲಾಗಿತ್ತು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಎ-2 ಆರೋಪಿ. ಪವಿತ್ರಾ ಗೌಡ ಎ-1 ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸ್ನೇಹಿತರು, ಪರಿಚಯದವರು ಸೇರಿ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ, ಎಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಮನೆಯ ಊಟ ತರಿಸಿಕೊಳ್ಳಲು ಅವಕಾಶ ನೀಡಬೇಕು, ಮಲಗಲು ಹಾಸಿಗೆ ತರಿಸಿಕೊಳ್ಳಲು ಅವಕಾಶ ನೀಡಬೇಕು, ಓದಲು ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡಲು ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ಎಂದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಗುರುವಾರ ಈ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಲಾಗಿದೆ.
ನಟ ದರ್ಶನ್ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಿಲ್ಲ. ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಜಾಮೀನು ಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ. ಪೊಲೀಸರಿಗೆ ಚಾರ್ಜ್ ಸೀಟ್ ಸಲ್ಲಿಕೆ ಮಾಡಲು 90 ದಿನಗಳ ಅವಕಾಶವಿದೆ.












Click it and Unblock the Notifications