ಮಾಧ್ಯಮಗಳ ಮುಂದೆ ಮಾತನಾಡದಂತೆ ‘ಕೈ’ ಶಾಸಕರಿಗೆ ಡಿ.ಕೆ. ಶಿವಕುಮಾರ್...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬಿಜೆಪಿ ಲೀಡರ್ಸ್ ಸಾಲು ಸಾಲು ಆರೋಪ ಮಾಡುತ್ತಿದ್ದಾರೆ. ಅದರಲ್ಲೂ ಕಾಂಗ್ರೆಸ್ ಶಾಸಕರು ಮಾಧ್ಯಮಗಳ ಎದುರು ನೀಡುವ ಹೇಳಿಕೆಗಳೇ ಬಿಜೆಪಿಗೆ ಅಸ್ತ್ರವಾಗುತ್ತಿವೆ. ಹೀಗಾಗಿ ಕಾಂಗ್ರೆಸ್ ನಾಯಕರು ಇಕ್ಕಟ್ಟಿಗೆ ಸಿಲುಕುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.
ಅಂದಹಾಗೆ, ಅಧಿಕಾರ ಹಂಚಿಕೆ, ಬೆಂಬಲ & ಇತರೆ ವಿಚಾರಗಳ ಕುರಿತು ಯಾವುದೇ ಶಾಸಕರು ಮಾಧ್ಯಮಗಳ ಮುಂದೆ ಮಾತನಾಡಬಾರದು ಎನ್ನುವ ಮೂಲಕ ಕಾಂಗ್ರೆಸ್ ಎಂಎಲ್‌ಎಗಳಿಗೆ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನ ಗಾಂಧಿ ಭವನದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಈ ವಿಚಾರವನ್ನು ತಿಳಿಸಿದ್ದಾರೆ. ಹಾಗೇ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಹಲವು ಬೆಳವಣಿಗೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಸತೀಶ್ ಜಾರಕಿಹೊಳಿ ಮಾತಿಗೆ ಉತ್ತರ
ಇನ್ನು, ಶಿವಕುಮಾರ್ ಒಬ್ಬರೇ ಪಕ್ಷ ಅಧಿಕಾರಕ್ಕೆ ತಂದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. "ಪಕ್ಷ ಹಾಗೂ ಸರ್ಕಾರದ ಆಂತರಿಕ ವಿಚಾರಗಳು ಏನೇ ಇದ್ದರೂ ಶಾಸಕರು ಮುಖ್ಯಮಂತ್ರಿಗಳು ಹಾಗೂ ನನ್ನ ಬಳಿ ಚರ್ಚೆ ಮಾಡಬಹುದು. ಆದರೆ ಯಾವುದೇ ಕಾರಣಕ್ಕೂ ಮಾಧ್ಯಮಗಳ ಮುಂದೆ ಮಾತನಾಡಬಾರದು" ಎಂದು ಖಡಕ್ ಆಗಿ ಹೇಳಿದ್ದಾರೆ.
ಹಾಗೇ ಇದರ ಜೊತೆಗೆ "ಪಕ್ಷದ ಕಾರ್ಯಕರ್ತರು, ನಾವು, ನೀವು, ರಾಜ್ಯದ ಜನರು ಸೇರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿದ್ದಾನೆ ಎಂದು ಇಂದು, ನಾಳೆ, ಮುಂದೆ, ಯಾವತ್ತಿಗೂ ಹೇಳುವುದಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಸ್ಪಷ್ಟಪಡಿಸಿದ್ದಾರೆ.
ಆಂತರಿಕವಾಗಿ ಒಂದಷ್ಟು ವಿಚಾರಗಳು...
ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ ಹೇಳಿದ್ದಾರಲ್ಲ ಎಂದು ಸುದ್ದಿಗಾರರು ಪ್ರಶ್ನೆ ಕೇಳಿದಾಗ, "ಪಕ್ಷದಲ್ಲಿ ಆಂತರಿಕವಾಗಿ ಒಂದಷ್ಟು ವಿಚಾರಗಳು ಚರ್ಚೆಯಾಗಿರುತ್ತವೆ. ಅದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಅದನ್ನು ಚರ್ಚೆ ಮಾಡಲು ನಾನು ಹೋಗುವುದಿಲ್ಲ, ನನಗೆ ಇರುವ ಮಾಹಿತಿ ಪ್ರಕಾರ ಆ ರೀತಿ ಚರ್ಚೆ ನಡೆದಿಲ್ಲ" ಎಂದು ಡಿಸಿಎಂ ಹೇಳಿದರು.












Click it and Unblock the Notifications