ಕಮಿಷನ್ ಆರೋಪದ ಬೆನ್ನಲ್ಲೇ ಬಿಬಿಎಂಪಿ ಕಚೇರಿಗೆ ಬೆಂಕಿ; ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದಿಷ್ಟು!
ಬೆಂಗಳೂರು, ಆಗಸ್ಟ್ 12: ಬಿಬಿಎಂಪಿ ಮುಖ್ಯ ಕಚೇರಿಯ ಆವರಣ ಕಟ್ಟದಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ . ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿದ್ದು, ಸ್ಥಳಕ್ಕೆ ಬಂದ ಡಿಸಿಎಂ ಡಿ ಕೆ ಶಿವಕುಮಾರ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್, ಅಗ್ನಿ ಅನಾಹುತ ನಡೆದ ಗುಣಮಟ್ಟ ಪರಿಶೀಲನೆ ಪ್ರಯೋಗಾಲಯ ಇರುವ ಜಾಗವೇ ಇದಲ್ಲ. ಮುಖ್ಯಮಂತ್ರಿಗಳು ಕೂಡ ಅದನ್ನೇ ಗಮನಿಸಿದ್ದಾರೆ. ಇಂತಹ ಪ್ರಯೋಗಾಲಯ ಸುರಕ್ಷಿತ ಜಾಗದಲ್ಲಿ ಇಡಬೇಕು. ಹೀಗಾಗಿ ಇದನ್ನು ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದ್ದಾರೆ.

ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ಅವಘಡದ ಕುರಿತು ಬಿಬಿಎಂಪಿ ಅಧಿಕಾರಿಗಳು, ಪೊಲೀಸರು ಸೇರಿದಂತೆ ಮೂರು ತಂಡಗಳು ಪ್ರತ್ಯೇಕ ತನಿಖೆ ಮಾಡಲಿವೆ. ಈ ಅವಘಡದಲ್ಲಿ ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಸಿಬ್ಬಂದಿಗೆ ಸರ್ಕಾರ ಸೂಚನೆ ನೀಡಿದೆ. ಗಾಯಾಳುಗಳನ್ನು ಐಸಿಯುನಲ್ಲಿ ಇರಿಸಿ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಅವರ ಶೀಘ್ರ ಗುಣಮುಖಕ್ಕೆ ಎಲ್ಲಾ ನೆರವು ನೀಡುತ್ತೇವೆ. ಅದೃಷ್ಟವಶಾತ್ ಯಾರಿಗೂ ದೃಷ್ಟಿಗೆ ತೊಂದರೆ ಆಗಿಲ್ಲ ಎಂದು ತಿಳಿಸಿದರು.

ಮುಖ್ಯ ಇಂಜಿನಿಯರ್ ಗಳಿಂದ ಗಾಯಗೊಂಡವರು ಯುವಕರಾಗಿದ್ದು, ಅವರಿಗೆ ಉಜ್ವಲ ಭವಿಷ್ಯವಿದೆ. ಅವರಿಗೆ ಈ ರೀತಿ ಆಗಬಾರದಿತ್ತು. ಈ ಅವಘಡಕ್ಕೆ ಸಂಬಂಧಿಸಿದಂತೆ ನಾನು ಯಾರ ಮೇಲೂ ದೂರಲು ಹೋಗುವುದಿಲ್ಲ. ಉಳಿದಂತೆ ನಾನು ತನಿಖೆ ಮುಗಿಯುವವರೆಗೂ ಯಾವುದರ ಬಗ್ಗೆ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ ಅವರು, ಇದು ಪೂರ್ವನಿಯೋಜಿತ ಎಂಬ ವಿರೋಧ ಪಕ್ಷದ ನಾಯಕರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಮಾತಾಡಬೇಕು ಮಾತನಾಡಲಿ ಬಿಡಿ ಎಂದು ಹೇಳಿದರು.
ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆ: ಸಿದ್ದರಾಮಯ್ಯ
ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ. ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ.
ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ.. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ? ಎಂದು ಹೇಳಿದರು.
ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದು ಪ್ರಶ್ನಿಸಿದರು.












Click it and Unblock the Notifications