ಸಂವಿಧಾನ ಹೊಗಳುವವರ ನಡೆಗಳ ಬಗ್ಗೆ ಎಚ್ಚರವಿರಲಿ! ಸಂವಿಧಾನ ದಿನಾಚರಣೆ ದೇಶವ್ಯಾಪಿ ಜಾರಿಗೆ ಪರಮೇಶ್ವರ್ ಆಗ್ರಹ
ಮೈಸೂರು: ಕರ್ನಾಟಕದಲ್ಲಿ ಆಚರಿಸುತ್ತಿರುವ ಮಾದರಿಯಲ್ಲಿಯೇ ದೇಶದಾದ್ಯಂತ ಸಂವಿಧಾನ ದಿನಾಚರಣೆ ವ್ಯಾಪಕವಾಗಿ ಆಚರಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಬೇಕು ಎಂದು ಪ್ರಧಾನಿ ಅವರನ್ನು ಡಿಸಿಎಂ ಡಾ.ಜಿ. ಪರಮೇಶ್ವರ್ ಒತ್ತಾಯಿಸಿದ್ದಾರೆ. ಜೊತೆಗೆ ಸಂವಿಧಾನವನ್ನು ಹೊಗಳುತ್ತಿರುವವರ ಮಾತುಗಳಿಗಿಂತ ಅವರ ನಡೆಗಳ ಬಗ್ಗೆ ಎಚ್ಚರಿಕೆ ಇರಲಿ. ದಲಿತರು, ಶೋಷಿತರ ಏಳಿಗೆಯಾಗದೆ ದೇಶದ ಅಭಿವೃದ್ಧಿ ಸಾರ್ಥಕವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪಠಣಕ್ಕೆ ಆದೇಶಿಸಲಾಯಿತು. ಅಲ್ಲಿಂದ ರಾಜ್ಯ ಸರ್ಕಾರ ಪ್ರತಿ ವರ್ಷ ಸಂವಿಧಾನ ದಿನಾಚರಣೆ ನಡೆಸುತ್ತಿದೆ. ಕರ್ನಾಟಕದ ಮಾದರಿಯಲ್ಲಿ ದೇಶದ ಎಲ್ಲ ರಾಜ್ಯಗಳಲ್ಲಿಯೂ ಸಂವಿಧಾನ ದಿನಾಚರಣೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂವಿಧಾನ ವಿರೋಧಿಸಿದವರೇ ಇಂದು ಹೊಗಳುತ್ತಿದ್ದಾರೆ!
ಭಾರತದ ಪ್ರತಿಯೊಂದು ಸಮಸ್ಯೆಗೂ ಪರಿಹಾರ ನೀಡಬಲ್ಲ ಸಂವಿಧಾನ ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ್ದಾರೆ. ಭಾರತದ ಸಂವಿಧಾನ ಇಡೀ ವಿಶ್ವದ ಗಮನ ಸೆಳೆದಿದ್ದು, ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಒಂದು ಕಾಲದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದವರು. ತಮ್ಮ ಕಚೇರಿಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನೂ ಇಡದಿದ್ದವರು ಇಂದು ಸಂವಿಧಾನವನ್ನು ಹೊಗಳುತ್ತಿದ್ದಾರೆ. ಅಂಬೇಡ್ಕರ್ ಅವರ ಜಯಂತಿಯನ್ನೂ ಆಚರಿಸುತ್ತಿದ್ದಾರೆ. ಇದೊಂದು ದೊಡ್ಡ ಬದಲಾವಣೆ ಎಂದು ವ್ಯಂಗ್ಯವಾಡಿದರು.
ಮತದಾನದ ಹಕ್ಕು ಕಸಿದರೆ ಚುನಾವಣೆ ಹೇಗೆ ಸಾಧ್ಯ?
ಕಳೆದ 14-15 ವರ್ಷಗಳಿಂದ ದೇಶದಲ್ಲಿ ಸಂವಿಧಾನದ ಆಶಯಗಳಿಗೆ ಧಕ್ಕೆಯಾಗುವಂತಹ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿಪೆಟ್ಟು ನೀಡುವ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಅತ್ಯಂತ ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ ಎಂದು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ನಡೆಯಬೇಕೆಂಬ ಆಶಯದೊಂದಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನಾತ್ಮಕ ವ್ಯವಸ್ಥೆಯನ್ನು ರೂಪಿಸಿದ್ದರು. ಆದರೆ ದಲಿತ ಮತದಾನ ಹಕ್ಕು ಕಿತ್ತುಕೊಂಡರೆ ಪಾರದರ್ಶಕ ಚುನಾವಣೆ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
ಮತಗಳ್ಳತನ ಹಾಗೂ ಮತದಾರರ ಪಟ್ಟಿಯಿಂದ ದಲಿತರು, ಅಲ್ಪಸಂಖ್ಯಾತರು, ಬಡವರು ಮತ್ತು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವವರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ಚುನಾವಣಾ ಆಯೋಗವೇ ಇಂತಹ ಕ್ರಮಗಳಿಗೆ ಮುಂದಾದರೆ ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಅಸಾಧ್ಯ ಎಂದರು.
ದೇಶದ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಹಸಿರು ಕ್ರಾಂತಿಯಡಿ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದರೆ, ಅದರ ಹಿಂದೆ ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಅಡಿಪಾಯವಿದೆ. ಸಂವಿಧಾನ ವಿರೋಧಿಸುತ್ತಿದ್ದವರೇ ಇಂದು ಸಂವಿಧಾನವನ್ನು ಹೊಗಳಲು ಆರಂಭಿಸಿದ್ದಾರೆ. ಅವರ ಮಾತುಗಳ ಬಗ್ಗೆ ಹಾಗೂ ಮುಂದಿನ ನಡೆಗಳ ಬಗ್ಗೆ ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕಿದೆ ಎಂದು ಹೇಳಿದರು.
ಬಡವರ ಪರ ಕಾರ್ಯಕ್ರಮ ರೂಪಿಸಲು ಸಿಎಂಗೆ ಮನವಿ
ಬೆಂಗಳೂರಿನ ಅಭಿವೃದ್ಧಿಗೆ ಎಷ್ಟೇ ಕಾರ್ಯಕ್ರಮಗಳನ್ನು ರೂಪಿಸಿ, ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಜಾರಿಗೊಳಿಸಿ. ಆದರೆ, ಬಡವರ ಪರವಾದ ಕಾರ್ಯಕ್ರಮಗಳಲ್ಲಿ ಮಾತ್ರ ದಯಮಾಡಿ ಯಾವುದೇ ರಾಜಿ ಮಾಡಿಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಲ್ಲಿ ಡಿಸಿಎಂ ಮನವಿ ಮಾಡಿದರು.
ಸಮಾಜದ ದಲಿತರು, ಶೋಷಿತರು ಮತ್ತು ದುರ್ಬಲ ವರ್ಗದ ಜನರ ಏಳಿಗೆಯಾಗದೆ ಹೋದರೆ ದೇಶದಲ್ಲಿ ಎಷ್ಟೇ ಅಭಿವೃದ್ಧಿ ಸಾಧಿಸಿದರೂ ಅದಕ್ಕೆ ಸಾರ್ಥಕತೆ ಇರುವುದಿಲ್ಲ. ಸಮಾಜದ ಎಲ್ಲ ವರ್ಗಗಳ ಜನರ ಅಭಿವೃದ್ಧಿಯನ್ನು ಖಾತರಿ ಪಡಿಸುವ ಮೂಲಕ ಸಂವಿಧಾನದ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯ ಸಾಕಾರಗೊಳಿಸಬೇಕಿದೆ ಎಂದು ಅವರು ಹೇಳಿದರು.




Click it and Unblock the Notifications
