ದೀಪಾವಳಿ; ನಿಷೇಧಿತ ಪಟಾಕಿ ಸಂಗ್ರಹ ಮಾಡಿದರೆ ಗೋಡಾನ್ ಮುಟ್ಟುಗೋಲು
ಬೆಂಗಳೂರು, ನವೆಂಬರ್ 03: ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಪಟಾಕಿಗಳ ಮಾರಾಟ ಮತ್ತು ಬಳಕೆ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಪೌರಾಡಳಿತ ನಿರ್ದೇಶನಾಲಯ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಈ ಕುರಿತು ನಿರ್ದೇಶನಗಳನ್ನು ನೀಡಿದೆ.
ನಿರ್ದೇಶಕರು ಪೌರಾಡಳಿತ ನಿರ್ದೇಶನಾಲಯ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಜಾರಿಗೊಳಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ. ಸದಸ್ಯ ಕಾರ್ಯದರ್ಶಿಗಳು, ಕನಾರ್ಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಪತ್ರವನ್ನು ಉಲ್ಲೇಖ ಮಾಡಲಾಗಿದೆ.

ಸುತ್ತೋಲೆಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವು ಪರಿಣಾಮ ಉಂಟಾಗುವುದನ್ನು ತಡೆಗಟ್ಟಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಮಾರ್ಗಸೂಚಿಗಳನ್ನು ಹೊರಡಿಸಿರುತ್ತದೆ ಎಂದು ಹೇಳಿದೆ.
ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಶಬ್ದ ಮತ್ತು ವಾಯು ಮಾಲಿನ್ಯ ನಿಯಂತ್ರಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ: 728/1998 ರ ಆದೇಶದನ್ವಯ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳು ಈ ಮುನ್ನೆಚ್ಚರಿಕೆ ಕ್ರಮವಹಿಸಬೇಕಿರುತ್ತದೆ ಎಂದು ತಿಳಿಸಿದೆ.
ಕೈಗೊಳ್ಳಬೇಕಾದ ಕ್ರಮಗಳು
* ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಅಧೀನ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಆದೇಶ ಪಾಲನೆಗೆ ಸೂಕ್ತ ಕ್ರಮ ಜರುಗಿಸುವುದು.
* ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ಪಡೆ ಅಧಿಕಾರಿ, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರುಗಳು, ಆರೋಗ್ಯಧಿಕಾರಿಗಳು, ತಹಶೀಲ್ದಾರ್, ಜಿಲ್ಲಾ ಪರಿಸರ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆಸಕ್ತ ನಾಗರೀಕರು ಹಾಗೂ ಸ್ಥಳೀಯ ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆಗಳನ್ನು ರಚಿಸಿ, ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗು ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಬೇಕು.
* ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿನ್ಹೆಯಿರುತ್ತದೆ ಹಾಗು ಕ್ಯೂಆರ್ ಕೋಡ್ ಸಹಾ ಇರುತ್ತದೆ, ಸದರಿ ಚಿಹ್ನೆಯ ಬಗ್ಗೆ ಸಂಬಂಧಪಟ್ಟ, ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳುವುದು, ಸದರಿ ಚಿನ್ಹೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.
* ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್ಟುಗಳನ್ನು Random ಆಗಿ ಸಂಗ್ರಹಿಸಿ, ನಿಗದಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು ಮತ್ತು ನಿಗದಿತ ಗುಣಮಾಪನಗಳಿಗೆ ಸರಿಹೊಂದಿದ್ದಲ್ಲಿ, ಅವುಗಳನ್ನು ಸಹಾ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು.
* ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗು ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.
* ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳ ಕುರಿತಂತೆ ಸಾರ್ವಜನಿಕರಿಗೆ ಮತ್ತು ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಾಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳುವುದು.
* ಯಾವುದೇ ಸ್ಥಳೀಯ ಆಸ್ಪತ್ರೆ ಹಾಗು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗು ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಫೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ. ಇದನ್ನು ಎಲ್ಲಾ ಸ್ಥಳೀಯ ಸಂಸ್ಥೆ ಹಾಗು ಪೊಲೀಸ್ ಇಲಾಖೆಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು.
* ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾಲ್‌ಗಳಲ್ಲಿ ಕರಪತ್ರ ಭಿತ್ತಿಪತ್ರಗಳನ್ನು ಹಂಚುವ ಮೂಲಕ, ವಿಡಿಯೋ ಮತ್ತು ಆಡಿಯೋ ಮುಖಾಂತರ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸುವುದು.
* ಸ್ಥಳೀಯ ಟಿ.ವಿ. ಹಾಗೂ ರೇಡಿಯೋ ಮುಖಾಂತರ ಸಾರ್ವಜನಿಕರಿಗೆ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸುವ ಬಗ್ಗೆ ಜಾಗೃತಿ ಮೂಡಿಸುವುದು.
* ದೀಪಾವಳಿಯ ಸಮಯದಲ್ಲಿ ಉತ್ಪಾದನೆಯಾಗುವಂತಹ ತ್ಯಾಜ್ಯ ವಸ್ತುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮವಹಿಸುವುದು.
* ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಣೆ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ವತಿಯಿಂದ ರಾಜ್ಯದ ಗಡಿಗಳಲ್ಲಿರುವ ತಮ್ಮ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಹಾಗೂ ಸಾಗಾಣೆ ಮಾಡುವ ವಾಹನಗಳನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳುವುದು. ಇದಕ್ಕೆ ಅವಶ್ಯಕತೆಯಿದ್ದಲ್ಲಿ ಸಂಬಂಧಪಟ್ಟ ಇಲಾಖೆಗಳ ಸಹಯೋಗವನ್ನು ಪಡೆದುಕೊಳ್ಳಬಹುದು.
ಈ ಮೇಲೆ ತಿಳಿಸಿರುವ ಎಲ್ಲಾ ಸೂಚನೆಗಳನ್ನು ಹಾಗೂ ಕ.ರಾ.ಮಾ.ನಿ.ಮಂ ಜಾರಿಗೊಳಿಸಿರುವ ವಿವರವಾದ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಅನುಸರಿಸುವಂತೆ ಸೂಚನೆ ನೀಡಲಾಗಿದೆ.












Click it and Unblock the Notifications