ದೆಹಲಿಯಲ್ಲಿ ಸ್ಫೋಟ: ಬೆಂಗಳೂರು ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೈಅಲರ್ಟ್ ಘೋಷಣೆ
ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ ಸಂಭವಿಸಿರುವ ಹಿನ್ನೆಲೆ ದೇಶದಾದ್ಯಂತೆ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಈ ಘಟನೆ ಬೆನ್ನಲ್ಲೇ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.
ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಭೀಕರ ಸ್ಫೋಟದಿಂದ ತೀವ್ರ ಆಘಾತಗೊಂಡಿದ್ದೇನೆ. ಅಮಾಯಕರ ಜೀವಹಾನಿ ಹೃದಯವಿದ್ರಾವಕ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಬಲಿಪಶುಗಳ ಮತ್ತು ಅವರ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ದುರಂತ ಸ್ಫೋಟದಿಂದ ತೀವ್ರ ದುಃಖಿತನಾಗಿದ್ದೇನೆ, ಇದು ಹಲವಾರು ಅಮೂಲ್ಯ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಈ ಕಷ್ಟದ ಸಮಯದಲ್ಲಿ ಮೃತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.
ಜೆಡಿಎಸ್ ಕೂಡ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದು, ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣ ಗೇಟ್ ಸಂಖ್ಯೆ-1ರ ಬಳಿ ಕಾರಿನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಹಲವು ಅಮಾಯಕರ ಜೀವಹಾನಿಯಾಗಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿರುವುದು ತೀವ್ರ ನೋವುಂಟು ಮಾಡಿದೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ. ಈ ದುರಂತ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಸರ್ಕಾರ ಮತ್ತು ದೇಶದ ತನಿಖಾ ಸಂಸ್ಥೆಗಳ ಪರ ನಿಲ್ಲೋಣ ಎಂದು ಹೇಳಿದೆ.












Click it and Unblock the Notifications