ಮೋದಿ ಸೋಲಿನ ಭೀತಿಯಿಂದ ಡಿಲಿಮಿಟೇಶನ್‌ಗೆ ಕೈ ಹಾಕಿದ್ದಾರೆ; ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆ ಅವೈಜ್ಞಾನಿಕವಾಗಿದ್ದು, ಇದರ ಹಿಂದೆ ರಾಜಕೀಯ ಲಾಭದ ಉದ್ದೇಶವಿದೆ. ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯಕ್ಕೆ ಇದರಿಂದ ಅನ್ಯಾಯವಾಗುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರಿಗೆ ಸೋಲಿನ ಭಯವಿದೆ. ಹೀಗಾಗಿ ಕ್ಷೇತ್ರಗಳ ಪುನರ್ವಿಂಗಡಣೆ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ. ತಮಗೆ ಹೇಗೆ ಬೇಕೋ ಹಾಗೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅಧಿಕಾರದಲ್ಲಿಯೇ ಮುಂದುವರಿಯಬೇಕು ಮತ್ತು ಲೂಟಿ ಹೊಡೆಯಬೇಕು ಎಂಬ ಉದ್ದೇಶದಿಂದ ಇಂತಹ ಮಸೂದೆಗಳನ್ನು ತರುತ್ತಿದ್ದಾರೆ ಎಂದು ಟೀಕಿಸಿದರು.

Delimitation Controversy Delimitation Bill Is Unscientific May Disadvantage Southern States Priyank Kharge

ದಕ್ಷಿಣ ಭಾರತದ ರಾಜ್ಯಗಳಿಗೆ ದೊಡ್ಡ ಅನ್ಯಾಯ

ಉತ್ತರ ಭಾರತದಲ್ಲಿ ಮೊದಲಿನಿಂದಲೂ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಿದೆ. ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆ ಮಾಡಿದರೆ ದಕ್ಷಿಣ ಭಾರತದ ರಾಜ್ಯಗಳಿಗೆ ದೊಡ್ಡ ಅನ್ಯಾಯವಾಗಲಿದೆ. ದೇಶದಲ್ಲಿ ಜನಸಂಖ್ಯೆ ನಿಯಂತ್ರಣ, ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಿಗೆ ಕಡಿಮೆ ರಾಜಕೀಯ ಪ್ರಾತಿನಿಧ್ಯ ಸಿಗುವಂತಾಗಬಾರದು. ಪ್ರಸ್ತುತ 543 ಲೋಕಸಭಾ ಸ್ಥಾನಗಳಿರುವಾಗಲೇ ಜನರ ಸಮಸ್ಯೆಗಳನ್ನು ಆಲಿಸಲು ಸಾಧ್ಯವಾಗುತ್ತಿಲ್ಲ. ಅದನ್ನು 800 ಅಥವಾ 900ಕ್ಕೆ ಹೆಚ್ಚಿಸಿದರೆ ಏನು ಸಾಧನೆಯಾಗಲಿದೆ ಎಂದು ಪ್ರಶ್ನಿಸಿದರು.

ಮಸೂದೆಯ ಸಂಪೂರ್ಣ ವಿವರವನ್ನು ಇನ್ನೂ ಓದಿಲ್ಲ. ಆದರೆ ಮೇಲ್ನೋಟಕ್ಕೆ ಹಲವು ಗಂಭೀರ ಆಕ್ಷೇಪಗಳಿವೆ. ಶೇ.50ರಷ್ಟು ಸ್ಥಾನಗಳನ್ನು ಹೆಚ್ಚಿಸುವ ಪ್ರಸ್ತಾವವಿದ್ದರೆ 543 ಸ್ಥಾನಗಳು ಸುಮಾರು 850ಕ್ಕೆ ಏರಿಕೆಯಾಗಲಿವೆ. ಇದರಿಂದ ಜನರಿಗೆ ಏನು ಪ್ರಯೋಜನವಾಗಲಿದೆ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದರು.

ರಾಹುಲ್ ಗಾಂಧಿ ಮೇಲಿನ ಅಸಮಾಧಾನ, ರಾಜ್ಯದ ಹಿತಾಸಕ್ತಿ; ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ಡಿಎಂಕೆ ಹೊಸ ರಾಜಕೀಯ ಲೆಕ್ಕಾಚಾರ!
ರಾಹುಲ್ ಗಾಂಧಿ ಮೇಲಿನ ಅಸಮಾಧಾನ, ರಾಜ್ಯದ ಹಿತಾಸಕ್ತಿ; ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ಡಿಎಂಕೆ ಹೊಸ ರಾಜಕೀಯ ಲೆಕ್ಕಾಚಾರ!

ಮತದಾನದ ಹಕ್ಕುಗಳ ಕುರಿತು ಸ್ಪಷ್ಟತೆ

ಕ್ಷೇತ್ರಗಳ ಗಡಿ ನಿರ್ಧಾರದಲ್ಲಿ ಸರ್ಕಾರದ ಪ್ರಭಾವಕ್ಕೆ ಅವಕಾಶ ಇರಬಾರದು. ಭೌಗೋಳಿಕ ಸ್ಥಿತಿ, ಆಡಳಿತಾತ್ಮಕ ಅನುಕೂಲ ಹಾಗೂ ಸಾಮಾಜಿಕ ನ್ಯಾಯದ ಅಂಶಗಳನ್ನು ಪರಿಗಣಿಸಬೇಕು. ಡಿಲಿಮಿಟೇಶನ್ ಆಯೋಗದ ರಚನೆ, ಸದಸ್ಯರಿಗೆ ನೀಡಿರುವ ಅಧಿಕಾರ ಹಾಗೂ ಮತದಾನದ ಹಕ್ಕುಗಳ ಕುರಿತು ಸ್ಪಷ್ಟತೆ ಇರಬೇಕು. ಮುಖ್ಯ ಚುನಾವಣಾ ಆಯುಕ್ತರಿಗೆ ಆಯೋಗದಲ್ಲಿ ಮತದಾನದ ಹಕ್ಕು ನೀಡುವ ಪ್ರಸ್ತಾಪದ ಬಗ್ಗೆಯೂ ಪ್ರಶ್ನೆಗಳಿವೆ. ಚುನಾವಣಾ ಆಯೋಗದ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯಲ್ಲಿಯೇ ಬದಲಾವಣೆ ಮಾಡಿರುವ ಸಂದರ್ಭದಲ್ಲಿ, ಅದೇ ಸಂಸ್ಥೆಯ ಮುಖ್ಯಸ್ಥರಿಗೆ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ನಿರ್ಣಾಯಕ ಪಾತ್ರ ನೀಡುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು.

2011ರ ಜನಗಣತಿ ಆಧಾರದಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆ ಮಾಡಲು ಕೇಂದ್ರ ಸರ್ಕಾರ ಈಗ ಇಷ್ಟೊಂದು ಆತುರ ತೋರುತ್ತಿರುವುದೇಕೆ? ಮೀಸಲಾತಿ ಸೇರಿದಂತೆ ಯಾವ ಮಾನದಂಡಗಳನ್ನು ಅನುಸರಿಸಲಾಗುತ್ತದೆ ಎಂಬುದನ್ನು ತಿಳಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರ ರಾಜಕೀಯ ಪ್ರಾತಿನಿಧ್ಯವನ್ನು ಯಾವ ಆಧಾರದ ಮೇಲೆ ನಿಗದಿಪಡಿಸಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆ ಅಗತ್ಯ ಎಂದರು.

Women’s Reservation: ಮಹಿಳಾ ಮೀಸಲಾತಿ - ಕ್ಷೇತ್ರ ಮರು ವಿಂಗಡಣೆ ವಿವಾದ: ಬಿಜೆಪಿ ಟ್ವೀಟ್‌ಗಳಿಗೆ ಕನ್ನಡಿಗರಿಂದ ಕ್ಲಾಸ್‌
Women’s Reservation: ಮಹಿಳಾ ಮೀಸಲಾತಿ - ಕ್ಷೇತ್ರ ಮರು ವಿಂಗಡಣೆ ವಿವಾದ: ಬಿಜೆಪಿ ಟ್ವೀಟ್‌ಗಳಿಗೆ ಕನ್ನಡಿಗರಿಂದ ಕ್ಲಾಸ್‌

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಈಗಾಗಲೇ ಹಲವು ವಿವಾದಗಳು ಉಂಟಾಗಿವೆ. ಆಳಂದ ಮತ್ತು ಚಿತ್ತಾಪುರ ಕ್ಷೇತ್ರಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರುಗಳು ದಾಖಲಾಗಿವೆ. ಆಳಂದನಲ್ಲಿ ನಡೆದ ಮತಗಳ ಅಳಿಸುವಿಕೆ ಪ್ರಕರಣದ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತನಾಡಬೇಕು. ಅರಾಜಕತೆ ಸೃಷ್ಟಿಸಿ ಅಧಿಕಾರಕ್ಕೆ ಬರುತ್ತಾರೆ ಎಂದು ಆರೋಪಿಸುವವರು, ತಮ್ಮದೇ ಶಾಸಕರ ವ್ಯಾಪ್ತಿಯಲ್ಲಿ ನಡೆದಿರುವ ವೋಟ್ ಚೋರಿ ಬಗ್ಗೆ ಸಂಬಂಧಿಸಿದ ಗಂಭೀರ ಆರೋಪಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ದಕ್ಷಿಣ ಭಾರತದ ರಾಜ್ಯಗಳ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮದ ವಿರುದ್ಧ ಎಲ್ಲ ರಾಜ್ಯಗಳು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು. ರಾಜ್ಯದ ಹಿತಾಸಕ್ತಿಯ ಪ್ರಶ್ನೆ ಬಂದಾಗ ಪಕ್ಷಭೇದ ಮರೆತು ಒಟ್ಟಾಗಿ ನಿಲ್ಲುವ ಅಗತ್ಯವಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆಗೆ ಸರ್ಕಾರ ಸ್ಪಂದನೆ

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸದಿರುವ ಕಡೆಗಳಲ್ಲಿಯೂ ಸರ್ಕಾರ ಅಗತ್ಯ ಸಹಕಾರ ನೀಡುತ್ತಿದೆ. ಆದರೆ ಕೆಲವು ಕಡೆ ಪ್ರಕೃತಿಯೇ ನೀರಿನ ಲಭ್ಯತೆಗೆ ಅಡ್ಡಿಯಾಗಿರುವಾಗ ಸರ್ಕಾರದಿಂದಲೂ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಮಂಗಳೂರು ಮತ್ತು ಉಡುಪಿಯಂತಹ ಪ್ರದೇಶಗಳಲ್ಲಿಯೂ ಹಣ ನೀಡಿದರೂ ನೀರು ಸಿಗದ ಪರಿಸ್ಥಿತಿ ಇದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಟಾಸ್ಕ್‌ಫೋರ್ಸ್ ರಚಿಸಲಾಗಿದೆ. ಅಗತ್ಯವಿದ್ದರೆ ಹೆಚ್ಚಿನ ಅನುದಾನ ನೀಡಲು ಸರ್ಕಾರ ಸಿದ್ಧವಿದೆ. ಶಾಸಕರಿಗೆ ತಮ್ಮ ಕ್ಷೇತ್ರದ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲು ಸ್ವಾತಂತ್ರ್ಯ ನೀಡಲಾಗಿದೆ. ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಬೋರ್‌ವೆಲ್ ಕೊರೆದರೂ ನೀರು ಸಿಗದ ಉದಾಹರಣೆಗಳಿವೆ. ತಮ್ಮ ಕ್ಷೇತ್ರದ ರಾಜವಾಳ ಗ್ರಾಮದಲ್ಲಿ ಕಳೆದ ಹತ್ತು ವರ್ಷಗಳಿಂದ ಪ್ರಾಮಾಣಿಕ ಪ್ರಯತ್ನ ನಡೆಸಿದರೂ ನೀರಿನ ಸಮಸ್ಯೆ ಬಗೆಹರಿದಿಲ್ಲ. ಪ್ರಕೃತಿಯ ವಿರುದ್ಧ ಏನೂ ಮಾಡಲು ಸಾಧ್ಯವಿಲ್ಲ. ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವ ವ್ಯವಸ್ಥೆಯ ಮೇಲೆಯೂ ನಿಯಂತ್ರಣ ಅಗತ್ಯವಿದೆ ಎಂದು ಹೇಳಿದರು.

ಬಿಜೆಪಿಯ ಟೀಕೆಗಳಿಗೆ ತಿರುಗೇಟು

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಬಿಜೆಪಿ ನಾಯಕರು ಆರಂಭದಲ್ಲಿ ಟೀಕಿಸಿದ್ದರು. ಆದರೆ ಸರ್ಕಾರ ಎಲ್ಲ ಐದು ಗ್ಯಾರಂಟಿಗಳನ್ನೂ ಜಾರಿಗೊಳಿಸಿದೆ. ಎನ್‌ಡಿಎ ನಾಯಕರು ಸುಳ್ಳು ಹೇಳುವುದರಲ್ಲಿ ನಿಪುಣರು ಎಂದು ಟೀಕಿಸಿದ ಅವರು, ವಿದೇಶಕ್ಕೆ ತೆರಳಿರುವ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಅವರನ್ನು ವಾಪಸ್ ಕರೆತರುವ ವಿಚಾರ, ಬೆಲೆ ಏರಿಕೆ ಸೇರಿದಂತೆ ಹಲವು ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಉತ್ತರ ನೀಡಬೇಕು ಎಂದರು.

ಬಿಜೆಪಿಯವರು ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಸ್ಪಷ್ಟಪಡಿಸಲಿ. ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಒಪ್ಪಿಕೊಂಡಿರುವಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು. ರಾಜ್ಯ ಸರ್ಕಾರದ ಆಡಳಿತದಲ್ಲಿ 24 ಗಂಟೆಯೂ ಕೆಲಸ ನಡೆಯುತ್ತಿದೆ ಎಂದರು.

ಭೀಮಾ ನದಿ ನೀರು ಬಿಡುಗಡೆಗೆ ಕಾನೂನು ಹೋರಾಟ

ಬೆಳಗಾವಿ ಅಧಿವೇಶನದಲ್ಲಿ ಕೇವಲ ಟೀಕೆ-ಟಿಪ್ಪಣಿಗಳಿಗೆ ಸೀಮಿತವಾಗದೆ, ಜನರ ಸಮಸ್ಯೆಗಳ ಕುರಿತು ಅರ್ಥಪೂರ್ಣ ಚರ್ಚೆಗಳು ನಡೆಯಬೇಕು ಎಂದು ಆಶಿಸಿದರು. ಭೀಮಾ ನದಿಗೆ ನೀರು ಬಿಡುಗಡೆ ಮಾಡುವ ಕುರಿತು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದ್ದು, ಮುಖ್ಯ ಕಾರ್ಯದರ್ಶಿಯೂ ಮಹಾರಾಷ್ಟ್ರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಮಹಾರಾಷ್ಟ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಜ್ಯದ ಹಿತಾಸಕ್ತಿ ಕಾಪಾಡಲು ಒಗ್ಗಟ್ಟಿನಿಂದ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದರು.

ಮಹಾರಾಷ್ಟ್ರ ಸರ್ಕಾರ ಕೈಗೊಳ್ಳುತ್ತಿರುವ ಸಾವಿರಾರು ಕೋಟಿ ರೂಪಾಯಿಗಳ ನೀರಾವರಿ ಯೋಜನೆಗಳು ಕರ್ನಾಟಕಕ್ಕೆ ಮಾರಕವಾಗುವ ಆತಂಕವಿದೆ. ಇಂತಹ ಯೋಜನೆಗಳನ್ನು ವಿರೋಧಿಸಿ ರಾಜ್ಯದ ಹಿತಾಸಕ್ತಿ ರಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+