'ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB'
ಬೆಂಗಳೂರು, ಜೂನ್ 07: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಖಾರವಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.
ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಹೆಚ್ ಡಿ ಕುಮಾರಸ್ವಾಮಿ ಅವರು, ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ ಮಾಡುತ್ತೇವೆ, ನಮಗೆ ಅನುಮತಿ ಕೊಡಿ ಪೊಲೀಸರಿಗೆ ಆರ್ ಸಿಬಿ ಅವರು ಅರ್ಜಿ ಕೊಡುತ್ತಾರೆ! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಅರ್ಜಿ ಹಾಕಿದ್ದಾರೆ. ಇದು ಹೇಗೆ ಸಾಧ್ಯ? ಪದ್ಯ ಆರಂಭಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿಗೆ ತಮ್ಮ ತಂಡ ಗೆಲುತ್ತದೆ ಎಂದು ಹೇಗೆ ಗೊತ್ತು? ಎಂದು ಪ್ರಶ್ನಿಸಿದ್ದಾರೆ.

ನಾವು ಗೆಲ್ಲುತ್ತೇವೆ ಎಂದು ಇವರಿಗೇನು ಕನಸು ಬಿದ್ದಿತ್ತಾ? ಫೈನಲ್ ಗೆಲ್ತೀವಿ ಅಂತ ಮೊದಲೇ ಗೊತ್ತಿತ್ತಾ? ಇನ್ನು ಫೈನಲ್ ಮ್ಯಾಚ್ ಶುರುನೇ ಆಗದೇ ಇವರು ಅರ್ಜಿ ಕೊಡುತ್ತಾರೆ. ಇನ್ನೊಂದು ಅರ್ಜಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPR) ಗೆ ಕೊಟ್ಟು ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ಮಾಡೋಕೆ ಅವಕಾಶ ಕೊಡಿ ಎಂದು ಕೇಳುತ್ತಾರೆ? ಇದು ಹೇಗೆ ಸಾಧ್ಯ ಎಂದು ಅವರು ಕೇಳಿದರು. ಈ ಎಲ್ಲಾ ಪತ್ರಗಳನ್ನು ಯಾರು ಬರೆದಿದ್ದರು? ಪಂದ್ಯ ಮುಗಿದ ಮರುದಿನ ಬೆಳಗ್ಗೆ 7.30ಕ್ಕೆ ಪೊಲೀಸ್ ಕಮೀಷನರ್ ಮೇಲೆ ಒತ್ತಡ ಹಾಕಿದ್ದು ಯಾರು? ಎನ್ನುವುದು ಗೊತ್ತಿದೆ. ಅದನ್ನೇ ಹೇಳಿದ್ದೇನೆ. ನಾನು ವಾಸ್ತವಾಂಶ ತಿಳಿದು ಮಾತಾಡಿದ್ದೇನೆ. ಅಸೂಯೆಯಿಂದ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ನಾನು ಮಾತನಾಡಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.
ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದ ರಾಜು ಅವರನ್ನು ಕಿತ್ತು ಹಾಕಿರುವುದು ಒಳ್ಳೆಯ ಕ್ರಮ ಎಂದು ಹೇಳಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಈ ಅಸೂಕ್ಷ್ಮ ಸರ್ಕಾರಕ್ಕೆ ಜ್ಞಾನೋದಯವಾಗಿರೋದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ಐವರು ಪೊಲೀಸ್ ಅಧಿಕಾರಿಗಳು ಅಮಾನತು ಮಾಡಿದ್ದು ಸರಿಯಲ್ಲ. ಈ ಅಮಾನತು ಅವಶ್ಯಕತೆ ಇರಲಿಲ್ಲ. ಈ ರೀತಿ ಸರ್ಕಾರ ನಡೆದುಕೊಂಡರೆ ಅಧಿಕಾರಿಗಳು ಕೆಲಸ ಮಾಡುವುದಕ್ಕೆ ಸಾಧ್ಯವಿಲ್ಲ. ಅವರ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ ಅಧಿಕಾರಿಗಳ ತಲೆದಂಡ ಮಾಡಿರುವುದು ಸರಿಯಲ್ಲ. ಸರ್ಕಾರ ಸೂಕ್ಷ್ಮವಾಗಿ ಯೋಚನೆ ಮಾಡಬೇಕಿತ್ತು. ಈ ಘಟನೆಯ ಮೂಲ ಕಾರಣಗಳೇ ಬೇರೆ. ಆ ಕಾರಣಗಳನ್ನು ಸರ್ಕಾರ ಮರೆಮಾಚುತ್ತದೆ ಎಂದು ಟೀಕಿಸಿದರು.
ಹೆಣದ ಮೇಲೆ ಬಿಜೆಪಿ-ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಸಿಎಂ, ಡಿಸಿಎಂ ಹೇಳಿಕೆಗಳ ಬಗ್ಗೆ ಕಿಡಿಕಾರಿದ ಹೆಚ್ ಡಿ ಕುಮಾರಸ್ವಾಮಿ ಅವರು, ಹೆಣದ ಮೇಲೆ ರಾಜಕೀಯ ಮಾಡುವ ಅವಶ್ಯಕತೆ ನಮಗೆ ಇಲ್ಲ. ಇದ್ದ ವಿಷಯವನ್ನೇ ನಾನು ಹೇಳಿದ್ದೇನೆ. ನನ್ನ ಮಿತ್ರ ಪಕ್ಷವೂ ಹೇಳಿದೆ. ನಡೆದಿರುವುದನ್ನು ಹೇಳಿದ್ದೇವೆ. ಇದರಲ್ಲಿ ರಾಜಕೀಯ ಏನಿದೆ? ಕ್ರೀಡಾಂಗಣದ ಮುಂದೆ ಮೃತದೇಹಗಳು ಬಿದ್ದ ಮೇಲೆಯೂ ಕ್ರೀಡಾಂಗಣಕ್ಕೆ ಹೋಗಿ ಕಪ್ ಗೆ ಮುತ್ತಿಕ್ಕಿ ಶೋ ಮಾಡಿದ್ದು ಯಾರು? ಜನರೇ ಎಲ್ಲವನ್ನೂ ನೋಡಿದ್ದಾರೆ. ಮಾಧ್ಯಮಗಳು ಎಲ್ಲವನ್ನೂ ಪ್ರಸಾರ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications