ಲೋಕಸಭಾ ಚುನಾವಣೆ : ಸರಣಿ ಸಭೆಗಳನ್ನು ಕರೆದ ಕೆಪಿಸಿಸಿ ಅಧ್ಯಕ್ಷರು
ಬೆಂಗಳೂರು, ನವೆಂಬರ್ 16 : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ಕರೆದಿದ್ದಾರೆ. ಲೋಕಸಭಾ ಚುನಾವಣೆ ಕುರಿತು ಚರ್ಚೆ ನಡೆಸಲು ಸರಣಿ ಸಭೆಗಳನ್ನು ಅವರು ನಡೆಸಲಿದ್ದಾರೆ.
ನವೆಂಬರ್ 17 ರಿಂದ 20ರ ತನಕ ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ.
ನವೆಂಬರ್ 17 ರಂದು ಬೆಂಗಳೂರು, ಬೆಳಗಾವಿ ಭಾಗದ ಮುಖಂಡರು, ನವೆಂಬರ್ 20ರಂದು ಕಲಬುರಗಿ ಭಾಗದ ಮುಖಂಡರು ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮತ್ತೊಂದು ಕಡೆ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಅವರು 2019ರ ಲೋಕಸಭಾ ಚುನಾವಣಾ ಪ್ರಣಾಳಿಕೆಗೆ ಜನರಿಂದ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದಾರೆ. ಜನವರಿಲ್ಲಿ ಎಲ್ಲಾ ಅಭಿಪ್ರಾಯಗಳನ್ನು ಚುನಾವಣಾ ಪ್ರಣಾಳಿಕೆ ಸಮಿತಿಗೆ ಸಲ್ಲಿಸಬೇಕಾಗಿದೆ.
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. 2014ರ ಚುನಾವಣೆಯಲ್ಲಿ ಕಾಂಗ್ರೆಸ್ 9, ಬಿಜೆಪಿ 17 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. ಈ ಬಾರಿಯ ಚುನಾವಣೆಯಲ್ಲಿ 20 ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಪಕ್ಷ ತಂತ್ರ ರೂಪಿಸುತ್ತಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದೆ. ಲೋಕಸಭಾ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳುವುದಾಗಿ ಪಕ್ಷಗಳು ಘೋಷಣೆ ಮಾಡಿವೆ. ಯಾವ ಕ್ಷೇತ್ರ ಯಾರಿಗೆ ಸೇರಲಿದೆ? ಎಂಬುದು ಇನ್ನೂ ಖಚಿತವಾಗಿಲ್ಲ.












Click it and Unblock the Notifications