ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಅಧಿಕೃತ ಪ್ರಕಟಣೆ
ಬೆಂಗಳೂರು, ಜುಲೈ 4: ಹಲವು ದಿನಗಳಿಂದ ಕುತೂಹಲ ಕೆರಳಿಸಿದ್ದ ರಾಜ್ಯ ರಾಜಕಾರಣದ ಪ್ರಶ್ನೆಯೊಂದಕ್ಕೆ ಉತ್ತರ ಸಿಕ್ಕಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾಗಿದ್ದಾರೆ.
ಇಂದು ಮಧ್ಯಾಹ್ನ ಎಐಸಿಸಿ ಸಂಘಟನಾ ವಿಭಾಗದ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ ಈಶ್ವರ್ ಖಂಡ್ರೆ ನೇಮಕವಾಗಿದ್ದಾರೆ. ಗೆಹ್ಲೋಟ್ ಅವರ ಪತ್ರವನ್ನು ಕೆಳಗಡೆ ಲಗತ್ತಿಸಲಾಗಿದೆ.

ಹಾಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದು ಅವರ ಜಾಗಕ್ಕೆ ಹೊಸಬರ ನೇಮಕಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿತ್ತು. ಹಾಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಹೆಸರು ಆರಂಭದಿಂದಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿತ್ತು.

ಆದರೆ ದಿನೇಶ್ ಗುಂಡೂರಾವ್ ಅವರಿಗಿಂತ ಹಿರಿಯರು ಈ ಹುದ್ದೆ ಮೇಲೆ ಕಣ್ಣಿಟ್ಟಿದ್ದರು. ಜೊತೆಗೆ ಪ್ರಬಲ ಸಮುದಾಯದವರು ತಮ್ಮ ಜಾತಿಯವರಿಗೆ ಈ ಹುದ್ದೆ ನೀಡಿ ಎಂಬ ಬೇಡಿಕೆ ಇಟ್ಟಿದ್ದರಿಂದ ಕರ್ನಾಟಕ ಕಾಂಗ್ರೆಸ್ ಗೆ ಯಾರು ಸಾರಥಿಯಾಲಿದ್ದಾರೆ ಎಂಬುದು ಕುತೂಹಲ ಹುಟ್ಟಿಸಿತ್ತು.












Click it and Unblock the Notifications