ದಲಿತ ನಾಯಕರಿಗೆ ಸಿಎಂ, ಕೆಪಿಸಿಸಿ ಅಧ್ಯಕ್ಷ ಸ್ಥಾನ? ಕುತೂಹಲ ಮೂಡಿಸಿದ ಖರ್ಗೆ ನಡೆ
ಕರ್ನಾಟಕಕ್ಕೆ ದಲಿತ ನಾಯಕರು ಸಿಎಂ ಆಗಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇದೆ. ಕಾಂಗ್ರೆಸ್‌ನಲ್ಲಿ ಪ್ರತಿ ಬಾರಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆ ಬಂದಾಗಲೆಲ್ಲ ದಲಿತ ನಾಯಕರು ಸಿಎಂ ಕುರ್ಚಿ ಮೇಲೆ ಕರ್ಚೀಫ್ ಹಾಕುತ್ತಲೇ ಇದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿ ದಲಿತ ನಾಯಕರು ಸದ್ದಿಲ್ಲದೆ ಸಭೆ ನಡೆಸಿರುವುದು ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಅಧ್ಯಕ್ಷರೂ ಆದ ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಈ ಮೀಟಿಂಗ್ ನಡೆದಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ನಿನ್ನೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಭೇಟಿ ನೀಡಿ ಭಾರೀ ಹೊತ್ತು ಸುದೀರ್ಘ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ವಲಯದಲ್ಲೇ ಗುಸುಗುಸು ಶುರುವಾಗಿದೆ. ಸದ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಚರ್ಚೆಯಲ್ಲಿದೆ. ಇಬ್ಬರೂ ದಲಿಯ ನಾಯಕರು ಈ ಬಗ್ಗೆಯೇ ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಜಿ.ಪರಮೇಶ್ವರ್ ಅವರು ದಲಿತ ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಹಿಂದಿನಿಂದಲೂ ಮುಂಚೂಣಿಯಾಗಿ ಕಾಣಿಸಿಕೊಂಡಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಅವರೂ ಕೂಡ ದಲಿತ ಸಮುದಾಯದ ಪ್ರಭಾವಿ ನಾಯಕರಾಗಿ ಈಗ ಎಐಸಿಸಿ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಬೇಕಾದರೆ, ಅದರಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರ ಪಾತ್ರ ಕೂಡ ಮಹತ್ವದ್ದು. ಈ ಹಿನ್ನೆಲೆ ನಿನ್ನೆ ಇದೇ ವಿಚಾರವಾಗಿ ನಾಯಕರು ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ್ ಖರ್ಗೆ ಅವರ ನಿವಾಸದಲ್ಲಿ ರಾಜ್ಯ ರಾಜಕೀಯದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೇ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ಈ ಹಿಂದೆ ಪರಮೇಶ್ವರ್ ಅವರು ತಮ್ಮ ನಿವಾಸದಲ್ಲಿ ದಲಿತ ನಾಯಕರಿಗೆ ಔತಣಕೂಟ ಆಯೋಜಿಸಿದ್ದರು. ಆದರೆ ಹೈಕಮಾಂಡ್ ಸೂಚನೆ ಮೇರೆಗೆ ಔತಣಕೂಟ ನಡೆಯಲಿಲ್ಲ. ಕಾಂಗ್ರೆಸ್‌ನಲ್ಲಿ ನಡೆಯುತ್ತಿದ್ದ ಔತಣಕೂಟಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಹೈಕಮಾಂಡ್‌ಗೆ ದೂರು ನೀಡಿದ್ದರು. ಈ ಬೆಳವಣಿಗೆ ಬಳಿಕ ದಲಿತ ನಾಯಕರು ಒಂದೆಡೆ ಸೇರಿರಲಿಲ್ಲ. ಆದರೆ, ನಿನ್ನೆಯ ಇವರ ಭೇಟಿ ವಿಚಾರವಾಗಿ ರೆಕ್ಕೆಪುಕ್ಕ ಬಂದಿದೆ.

ಅಲ್ಲದೆ ಜಿ.ಪರಮೇಶ್ವರ್ ಅವರು ರಾಜ್ಯದ ಹಲವೆಡೆ ದಲಿತರ ಸಮಾವೇಶ ಆಯೋಜಿಸಲು ಪ್ಲ್ಯಾನ್ ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿಯೂ ಅವರು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಭಾರಿ ಚರ್ಚೆ ನಡೆಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ದಲಿತ ಸಮುದಾಯದ ನಾಯಕರು ತಮ್ಮ ಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಸಮಾವೇಶವನ್ನು ಆಯೋಜಿಸಲು ಸಚಿವ ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್ ಒಗ್ಗಟ್ಟಿನಿಂದ ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಈ ಬಗ್ಗೆಯೂ ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರೂ ಇದ್ದರು ಎನ್ನಲಾಗಿದೆ. ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರ ಮುನ್ನೆಲೆಗೆ ಬಂದಾಗಿಂದ ಸಿಎಂ ಅಭ್ಯರ್ಥಿಗಳ ಪಟ್ಟಿ ದೊಡ್ಡದಾಗಿ ಬೆಳೆಯುತ್ತಿದೆ. ಹಲವು ನಾಯಕರು ಬಹಿರಂಗವಾಗಿ ನಾನೂ ಸಿಎಂ ಅಭ್ಯರ್ಥಿ ಎಂದು ಹೇಳಿಕೆ ನೀಡಿದ್ದರು. ಬಳಿಕ ಹೈಕಮಾಂಡ್ ಈ ರೀತಿ ಹೇಳಿಕೆ ಕೊಡದಂತೆ ವಾರ್ನ್ ಮಾಡಿತ್ತು.












Click it and Unblock the Notifications