Cauvery Dispute: ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಸೂಚನೆ: ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ಜುಲೈ 12: ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಅಡಿ ನೀರು ಬಿಡಲು ಕರ್ನಾಟಕಕ್ಕೆ ಸೂಚಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಾಧಿಕಾರದ ತೀರ್ಮಾನದ ವಿಚಾರವಾಗಿ ಮಾಧ್ಯಮಗಳು ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಬಳಿ ಶುಕ್ರವಾರ ಪ್ರಶ್ನಿಸಿದಾಗ ಉತ್ತರಿಸಿದ ಶಿವಕುಮಾರ್ ಅವರು, ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕು ಎಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡ ಜತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸುತ್ತೇವೆ" ಎಂದು ತಿಳಿಸಿದರು.

ಪ್ರತಿ ದಿನ ತಮಿಳುನಾಡಿಗೆ 1 ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ಗುರುವಾರದಂದು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಸೂಚನೆ ನೀಡಿದೆ. ಕಳೆದ ವರ್ಷ ಭೀಕರ ಬರಗಾಲದ ಪರಿಣಾಮ ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ಬೆಂಗಳೂರು ಒಂದರಲ್ಲೇ 7 ಸಾವಿರಕ್ಕೂ ಹೆಚ್ಚು ಬೋರ್ ವೆಲ್ ಗಳು ಬತ್ತಿ ಹೋಗಿದ್ದವು, ಆದರೂ ನೀರಿನ ತೊಂದರೆ ಉಂಟಾಗದಂತೆ ಪರಿಸ್ಥಿತಿ ನಿಭಾಯಿಸಲಾಯಿತು. ಈ ವರ್ಷ ಉತ್ತಮ ಮಳೆಯಾಗುತ್ತಿದ್ದು ನೀರಿನ ತೊಂದರೆಯಾಗುವುದಿಲ್ಲ ಎನ್ನುವ ನಂಬಿಕೆಯಿದೆ ಭರವಸೆ ವ್ಯಕ್ತಪಡಿಸಿದರು.
ಮೂಡಾ ಹಗರಣದ ಬಗ್ಗೆ ಬಿಜೆಪಿ ಟೀಕೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ. ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇ.ಡಿ ವಿಚಾರಣೆ ನಡೆಸುತ್ತಿರುವ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ ಕುರಿತು ಎಸ್ಐಟಿ ವಿಚಾರಣೆ ನಡೆಸುತ್ತಿದೆ. ಇ.ಡಿ ವಿಚಾರಣೆ ಅವಶ್ಯಕತೆ ಇರಲಿಲ್ಲ. ಅವರ ತನಿಖೆ ಬಗ್ಗೆ ತಿಳಿದು ನಂತರ ಮಾತನಾಡುತ್ತೇನೆ ಎಂದು ಹೇಳಿದರು.












Click it and Unblock the Notifications