ಸಂಭಾಜಿ ಅನರ್ಹಗೊಳಿಸಿ ವಾಟಾಳ್ ಸವಾಲು!
ಬೆಳಗಾವಿ, ಡಿ.6 : "ಕರ್ನಾಟಕದ ಶವಯಾತ್ರ ಮಾಡುತ್ತೇನೆ" ಎಂದು ಕನ್ನಡ ವಿರೋಧಿ ಹೇಳಿಕೆ ನೀಡಿರುವ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ನಡೆದಿಲ್ಲ. ಆದ್ದರಿಂದ ಅಧಿವೇಶನ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲದ ನಡೆದ ವಿಧಾನಮಂಡಲ ಅಧಿವೇಶನದಿಂದ ಉತ್ತರ ಕರ್ನಾಟಕ್ಕೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ, ಈ ಹಿನ್ನೆಲೆಯಲ್ಲಿ ಅಧಿವೇಶನ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. (ಕರ್ನಾಟಕದ ಶವಯಾತ್ರೆ ಮಾಡುತ್ತೇನೆ)
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕನ್ನಡ ವಿರೋಧಿಗಳ ಹೋರಾಟವನ್ನು ಮಟ್ಟಹಾಕಲು ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ. ಬೆಳಗಾವಿಯಲ್ಲಿಯೇ ಕನ್ನಡ ವಿರೋಧಿ ಹೇಳಿಕೆ ನೀಡಿದ ಶಾಸಕ ಸಂಭಾಜಿ ಪಾಟೀಲ್ ಅವರ ಸದಸ್ಯತ್ವವನ್ನು ರದ್ದುಗೊಳಿಸುವ ದಿಟ್ಟಕ್ರಮವನ್ನು ಸರ್ಕಾರ ತೆಗೆದುಕೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು. (ಕರ್ನಾಟಕದ ಇತರ ಜಿಲ್ಲಾ ಸುದ್ದಿಗಳು)

ಸಂಭಾಜಿ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳಿ
ಕನ್ನಡ ವಿರೋಧಿ ಹೇಳಿಕೆ ನೀಡಿರುವ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ನಡೆದಿಲ್ಲ. ಆದ್ದರಿಂದ ಅಧಿವೇಶನ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲದ ನಡೆದ ವಿಧಾನಮಂಡಲ ಅಧಿವೇಶನದಿಂದ ಉತ್ತರ ಕರ್ನಾಟಕ್ಕೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ, ಈ ಹಿನ್ನೆಲೆಯಲ್ಲಿ ಅಧಿವೇಶನ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.

ಮೈಸೂರಿಗೆ ಮತ್ತೆ ಬಂದ ಕಾಡಾನೆಗಳು
ಮೈಸೂರು ನಗರದ ಹೊರವಲಯದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳನ್ನು ಕಾಡಿಗಟ್ಟಿದ ಬೆನ್ನಲ್ಲೆ, ಹುಣಸೂರು ತಾಲೂಕಿನ ನಾಗಾಪುರ ಬಳಿ ಮತ್ತೊಂದು ಕಾಡಾನೆಗಳ ತಂಡ ಪ್ರತ್ಯಕ್ಷವಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಬಂದಿರುವ ಕಾಡಾನೆಗಳ ಹಿಂಡು ಬುಧವಾರ ರಾತ್ರಿ ಮತ್ತು ಗುರುವಾರ ರೈತರ ಜಮೀನುಗಳ ಮೇಲೆ ದಾಳಿ ಮಾಡಿವೆ. ಸದ್ಯ ನಾಗರಹೊಳೆ ಬಳಿಯ ನಾಗಾಪುರ ಪುನರ್ವಸತಿ ಕೇಂದ್ರದಲ್ಲಿರುವ ಗಿರಿಜನರ ಸೌದೆ ಸಂಗ್ರಹ ಸ್ಥಳದಲ್ಲಿ ಆನೆಗಳು ಬೀಡು ಬಿಟ್ಟಿವೆ. ಒಟ್ಟು 13 ಆನೆಗಳ ಗುಂಪಿನಲ್ಲಿ 3 ಮರಿಯಾನೆ, 3 ಗಂಡು ಹಾಗೂ 7 ಹೆಣ್ಣಾನೆಗಳಿವೆ ಎಂದು ವೀರನಹೊಸಳ್ಳಿ ವಲಯ ಅರಣ್ಯಾಧಿಕಾರಿ ಎನ್.ಪಿ.ರಾಜಪ್ಪ ಹೇಳಿದ್ದಾರೆ.

95 ಎಕರೆ ಗೋಮಾಳ ತೆರವು
ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ಅಕ್ರಮ ಸಾಗುವಳಿ ಮಾಡಲಾಗುತ್ತಿದ್ದ ಗೋಮಾಳ ಭೂಮಿಯನ್ನು ಜಿಲ್ಲಾಡಳಿತ ಶಾಂತಿಯುತವಾಗಿ ತೆರವುಗೊಳಿಸಿದೆ. 66 ರೈತರು ಸಾಗುವಳಿ ಮಾಡುತ್ತಿದ್ದ 95 ಎಕರೆ, 18 ಗುಂಟೆ ಭೂಮಿಯನ್ನು ಗೋಮಾಳಕ್ಕಾಗಿ ತೆರವುಗೊಳಿಸಲಾಯಿತು. ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಉಪ ವಿಭಾಗಾಧಿಕಾರಿ ತಿಪ್ಪೇಸ್ವಾಮಿ, ಹೊಳಲ್ಕೆರೆ ತಹಸೀಲ್ದಾರ್ ಚನ್ನಬಸಪ್ಪ ಮುಂತಾದ ಅಧಿಕಾರಿಗಳ ತಂಡ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ, ಕಾರ್ಯಚರಣೆ ನಡೆಸಿತು.

ಸಾಹಿತ್ಯ ಸಮ್ಮೇಳನದಲ್ಲಿ ಭರ್ಜರಿ ಭೋಜನ
ಮಡಿಕೇರಿಯಲ್ಲಿ ಜನವರಿ 8,9,10 ರಂದು ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಊಟದ ಮೆನು ಸಿದ್ಧವಾಗಿದೆ. ಕೊಡಗಿನ ಅಕ್ಕಿರೊಟ್ಟಿ, ಕಡಬು, ಕೂಟುಕರಿ, ಬಿಸಿಬೇಳೆ ಬಾತ್, ಕ್ಯಾರೆಟ್ ಹಲ್ವ, ಜೋಳದ ರೊಟ್ಟಿ, ಜತೆಗೆ ಅಕ್ಕಿ ಪಾಯಸ ಮೂರು ದಿನದ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯಾಸಕ್ತರ ಹೊಟ್ಟೆ ತುಂಬಿಸಲಿವೆ. ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ನಾ.ಡಿಸೋಜಾ ಆಯ್ಕೆಯಾಗಿರುವ ಬೆನ್ನಲ್ಲೇ ಸಮ್ಮೇಳದನ ಸಿದ್ಧತೆಗಳು ಆರಂಭಗೊಂಡಿವೆ. ಸಮ್ಮೇಳನದ ಊಟದ ವ್ಯವಸ್ಥೆಯಾಗಿ ರೂ. 3.75 ಕೋಟಿ ಅಂದಾಜಿನ ಕ್ರಿಯಾಯೋಜನೆ ತಯಾರಿಸಲಾಗಿದೆ. ಸರ್ಕಾರ ಈಗಾಗಲೇ 2 ಕೋಟಿ ಅನುದಾನ ನೀಡುವುದಾಗಿ ಘೋಷಿಸಿದೆ.

20 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
ಸಾಲಬಾಧೆ ತಾಳಲಾರದೆ ಚಾಮರಾಜನಗರ ತಾಲೂಕಿನ ಸುಂಡ್ರಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ತಿಮ್ಮದಾಸ್ ಕುಟುಂಬಕ್ಕೆ ಸರ್ಕಾರದ ವತಿಯಿಂದ 20 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಪತ್ರಿಭಟನೆ ನಡೆಸಿದರು. ಸರ್ಕಾರ ರೈತರ ಹಿತ ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಶೀಘ್ರವೇ ತಿಮ್ಮದಾಸ್ ಕುಟುಂಬಕ್ಕೆ ಪರಿಹಾರ ಒದಗಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಚಿಕ್ಕನಾಯಕನಹಳ್ಳಿಯಲ್ಲಿ ಕಣ್ಣುಮುಚ್ಚಿದ ಸಿಸಿಟಿವಿ
ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ತಾಲೂಕಿನ ನೆಹರು ವೃತ್ತದಲ್ಲಿ ಎರಡು ತಿಂಗಳ ಹಿಂದೆ ಪೊಲೀಸರು ಅಳವಡಿಸಿದ್ದ ಸಿಸಿ ಕ್ಯಾಮೆರಾ ಕೆಲಸ ಮಾಡದೆ ಕಣ್ಣು ಮುಚ್ಚಿವೆ. ಈ ಭಾಗದಲ್ಲಿ ನಡೆಯುವ ಎಲ್ಲ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಲು ವಿರುದ್ಧ ದಿಕ್ಕುಗಳಲ್ಲಿ ಎರಡು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಆದರೆ, ಸದ್ಯ ಒಂದು ಕ್ಯಾಮರಾ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ನೆಹರು ವೃತ್ತದಲ್ಲಿ ವಾಹನ ದಟ್ಟಣೆ ಜಾಸ್ತಿಯಾಗಿದ್ದು, ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸುತ್ತಿಲ್ಲ. ಇವರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಜನರು ಆರೋಪಿಸಿದ್ದಾರೆ. ಸದ್ಯ ಪೊಲೀಸರು ಸಿಸಿಟಿವಿ ದುರಸ್ತಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಸೋನಿಯಾ ಹುಟ್ಟುಹಬ್ಬಕ್ಕೆ ಕರ್ನಾಟಕದ ಕಾರ್ಯಕರ್ತರು
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಕರ್ನಾಟಕದ ಕಾಂಗ್ರೆಸ್ ಕಾರ್ಯಕರ್ತರು ಸಾಂಸ್ಕೃತಿಕ ತಂಡಗಳೊಂದಿಗೆ ಶನಿವಾರ ದೆಹಲಿಗೆ ತೆರಳಲಿದ್ದಾರೆ. ರಾಜ್ಯದ ಸುಮಾರು 250 ಮಂದಿ ಕಾರ್ಯಕರ್ತರು ಡಿ.9ರಂದು ನಡೆಯಲಿರುವ ಸೋನಿಯಾಗಾಂಧಿ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ.

ತನಿಖೆಗೆ ರಾಜ್ಯಪಾಲರ ಮೆಚ್ಚುಗೆ
ನ.19ರಂದು ಕಾರ್ಪೊರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ತನಿಖೆಯನ್ನು ಪೊಲೀಸರು ತ್ವರಿತವಾಗಿ ನಡೆಸುತ್ತಿದ್ದಾರೆ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತನಿಖೆಯ ಕುರಿತು ನಗರ ಪೊಲೀಸ್ ಆಯುಕ್ತ ಮತ್ತು ರಾಜ್ಯದ ಪೊಲೀಸ್ ಮಹಾನಿರ್ದೇಶಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಆರೋಪಿಯನ್ನು ಪತ್ತೆ ಮಾಡಿ ಬಂಧಿಸುವಲ್ಲಿ ವಿಳಂಬವಾಗಿದ್ದರೂ ಪೊಲೀಸರು ಮಾತ್ರ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದಾರೆ. ಆರೋಪಿ ಹೊರರಾಜ್ಯಕ್ಕೆ ಸೇರಿದವನಾಗಿರುವ ಹಿನ್ನೆಲೆಯಲ್ಲಿ ತನಿಖೆ ವಿಳಂಬವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯಪಾಲರ ಹೇಳಿಕೆಗೆ ಸಹಮತವಿದೆ
ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಕೆಲವು ಮಂತ್ರಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ರಾಜ್ಯಪಾಲರು ಅತೃಪ್ತಿ ವ್ಯಕ್ತಪಡಿಸಿರುವುದಕ್ಕೆ ನನ್ನ ಸಹಮತವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುತ್ತದೆ. ಸಚಿವರ ಕಾರ್ಯವೈಖರಿ ಸುಧಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದರು.


Click it and Unblock the Notifications
