ಎನ್‌ಆರ್‌ಐ ಸಚಿವಾಲಯ ಸ್ಥಾಪನೆ, ಹುದ್ದೆಗಳ ಭರ್ತಿ ಸೇರಿ ಹಲವು ಮಹತ್ವದ ಘೋಷಣೆ ಮಾಡಿದ ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜೂನ್ 04: ರಾಜ್ಯದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಅಗತ್ಯ ಸೌಲಭ್ಯ ಕಲ್ಪಿಸಲು ಎರಡು ಹೊಸ ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಇದರ ಜೊತೆಗೆ ಹಲವು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸಂಪೂರ್ಣ ವಿವರವನ್ನು ಇಲ್ಲಿ ತಿಳಿಯಿರಿ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸುದೀರ್ಘ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗೋಷ್ಠಿಯಲ್ಲಿ ಮಹತ್ವದ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.

DK Shivakumar Announces NRI Ministry 56 000 Job Recruitment and CSR Fund Utilisation in Karnataka

'ನಮ್ಮ ಸರ್ಕಾರದಲ್ಲಿ ಅನಿವಾಸಿ ಭಾರತೀಯರ (ಎನ್ಆರ್‌ಐ) ಸಚಿವಾಲಯ ತೆರೆಯಲು ನಮ್ಮ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಎನ್ಆರ್‌ಐಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿದ್ದರೆ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಈ ಸಚಿವಾಲಯ ನೆರವಾಗುತ್ತದೆ. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿರುವೆ,' ಎಂದು ಹೇಳಿದರು.

ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಲು ಸೂಚನೆ

'ರಾಜ್ಯದ ಅಧಿಕಾರಿಗಳನ್ನು ಕರೆಸಿ ಹೊಸ ಸರ್ಕಾರ ಯಾವ ರೀತಿ ಆಲೋಚನೆ ಮಾಡುತ್ತಿದೆ ಎಂದು ಸಂದೇಶ ನೀಡಿದ್ದೇವೆ. ಮೊದಲ ದಿನ ನಾವು ಅವರಿಂದ ಏನು ನಿರೀಕ್ಷೆ ಮಾಡಿದ್ದೇವೆ, ನಮ್ಮಿಂದ ಅವರ ನಿರೀಕ್ಷೆಗಳೇನು ಎಂದು ಚರ್ಚೆ ಮಾಡಲಾಗಿದೆ. ನಮ್ಮ ಸರ್ಕಾರ ಜಾತಿ, ಧರ್ಮ, ಪ್ರಭಾವಕ್ಕೆ ಮಣಿಯುವುದಿಲ್ಲ. ಯಾವ ಅಧಿಕಾರಿಗಳು ಇದಕ್ಕೆ ಮಣಿಯಬಾರದು. ಪಾರದರ್ಶಕ, ಮುಕ್ತ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡಬೇಕು,' ಎಂದು ಸೂಚಿಸಿದ್ದೇನೆ ಎಂದರು.

'ಪಾರದರ್ಶಕತೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ. ಜನರ ಭಾವನಗೆ ಬೆಲೆ ಕೊಟ್ಟು ಅವರ ಸಮಸ್ಯೆಗಳನ್ನು ಬಗೆಹರಿಸಬೇಕು. 15 ದಿನಗಳಲ್ಲಿ ಎಲ್ಲಾ ಇಲಾಖೆಗಳಲ್ಲಿನ ಕಾರ್ಯಯೋಜನೆ ಸಿದ್ಧಪಡಿಸಬೇಕು. ದೇಶದಲ್ಲಿ ವಿದ್ಯಾವಂತರು, ಬುದ್ಧಿವಂತರು ಇಲ್ಲದಿದ್ದರೂ ಪ್ರಜ್ಞಾವಂತರು ಇರಬೇಕು. ನಮ್ಮಲ್ಲಿ ಸಾಮಾನ್ಯ ಪ್ರಜ್ಞೆ ಇರಬೇಕು. ಎಲ್ಲಾ ಸಮಸ್ಯೆಗಳಿಗೆ ಒಂದು ಪರಿಹಾರ ಇರುತ್ತದೆ, ಸಕಾರಾತ್ಮಕ ಮನೋಭಾವ ಇರಬೇಕು ಅಷ್ಟೇ,' ಎಂದು ತಿಳಿಸಿದರು.

ಮತದಾನದ ಹಕ್ಕು ಕಳೆದುಕೊಳ್ಳದಂತೆ ಮನವಿ

'ಇತಿಹಾಸ ಓದಲು, ಬರೆಯಲು ಇಷ್ಟವಿಲ್ಲ. ಇತಿಹಾಸ ಸೃಷ್ಟಿ ಮಾಡಿ ಸಾಕ್ಷಿಗುಡ್ಡೆ ಬಿಟ್ಟುಹೋಗಬೇಕು. ನೀವು ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಿ. ಕಾನೂನು ಹೊರತಾಗಿ ಬೇರೆ ಯಾವ ಒತ್ತಡಕ್ಕೂ ಮಣಿಯಬಾರದು. ಮಂತ್ರಿಗಳು, ಶಾಸಕರು ಕಾನೂನು ವ್ಯಾಪ್ತಿಯಲ್ಲಿ ಸಕಾರಾತ್ಮಕ ಮನೋಭಾವದಲ್ಲಿ ಕೆಲಸ ಮಾಡಿ. ಸಮಸ್ಯೆಗಳಿಗೆ ವ್ಯವಸ್ಥೆ ಚೌಕಟ್ಟಿನಲ್ಲೇ ಪರಿಹಾರ ಹುಡುಕಿ ಎಂದು ಸೂಚಿಸಿದ್ದೇನೆ,' ಅಂತಾ ತಿಳಿಸಿದರು.

'ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕಡ್ಡಾಯವಾಗಿ ಆಯಾ ಜಿಲ್ಲೆಗಳಲ್ಲಿರುವ ತಾಲ್ಲೂಕುಗಳಿಗೂ ಹೋಗಿ ಪರಿಶೀಲನೆ ಮಾಡಬೇಕು. ಈಗ ಎಸ್ಐಆರ್ ನಡೆಯುತ್ತಿದ್ದು, ಯಾವುದೇ ವ್ಯಕ್ತಿ ಮತದಾನದ ಹಕ್ಕು ಕಳೆದುಕೊಳ್ಳುವಂತೆ ಆಗಬಾರದು. ಈ ಪ್ರಕ್ರಿಯೆಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳದಿದ್ದರೆ ಸವಲತ್ತುಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ಜಾಗೃತಿ ಮೂಡಿಸಬೇಕು. ಇದಕ್ಕೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಲು ನಿರ್ದೇಶನ ನೀಡಿರುವೆ,' ಎಂದು ಹೇಳಿದರು.

'ಎಲ್ಲಾ ರಾಜಕೀಯ ಪಕ್ಷಗಳಿಗೂ ಜನರ ಮತದಾನದ ಹಕ್ಕು ಉಳಿಸಿಕೊಳ್ಳುವ ಅವಕಾಶ ನೀಡಲಾಗುವುದು. ಕೇರಳಂ ರಾಜ್ಯ ಹೊರತುಪಡಿಸಿ ಬೇರೆ ರಾಜ್ಯಗಳಲ್ಲಿ 90 ಲಕ್ಷ, 60 ಲಕ್ಷ ಜನರು ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಇದು ನಮ್ಮಲ್ಲಿ ಆಗಬಾರದು. ನಮ್ಮ ಸ್ಥಳೀಯ ಸಂಸ್ಥೆಗಳಲ್ಲಿ ನಿವಾಸ ಧೃಢೀಕರಣ ಪತ್ರ ನೀಡಲು ಅವಕಾಶವಿದೆ. ಈ ಪ್ರಕ್ರಿಯೆಯಲ್ಲಿ ಅಗತ್ಯವಿರುವ ಎಲ್ಲಾ ದಾಖಲೆ ನೀಡಬೇಕು,' ಎಂದು ಹೇಳಿದರು.

'ಎಲ್ಲಾ ಜಿಲ್ಲಾ ಕಾರ್ಯದರ್ಶಿಗಳು ತಮ್ಮ ಇಲಾಖೆ ಸಂಬಂಧಿಸಿದಂತೆ ಬಾಕಿ ಇರುವ ಕೆಲಸಗಳ ಪಟ್ಟಿ ನೀಡಬೇಕು. 25 ದಿನಗಳಲ್ಲಿ ಆಯಾ ಜಿಲ್ಲೆಯಲ್ಲಿ ಯಾವ ಹೊಸ ಕೆಲಸ ಮಾಡಬಹುದು ಎಂದು ಗುರುತಿಸಬೇಕು. ಆರ್ಥಿಕ ಚೌಕಟ್ಟಿನಲ್ಲಿ ನಾವು ಏನು ಮಾಡಬಹುದು ಎಂದು ಪಟ್ಟಿ ಮಾಡಿ. ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಆಯಾ ಜಿಲ್ಲೆಯ ಸಂಪೂರ್ಣ ಮಾಹಿತಿ ನೀಡಬೇಕು. ಎಸ್ಐಆರ್ ವಿಚಾರವಾಗಿ ಅಗತ್ಯ ಪ್ರದೇಶಗಳಲ್ಲಿ ಸಹಾಯ ಕೇಂದ್ರಗಳ ಸ್ಥಾಪಿಸಲು ನಿರ್ದೇಶಿಸಲಾಗಿದೆ,' ಎಂದರು.

₹8,000 ಕೋಟಿ ಸಿಎಸ್ಆರ್ ನಿಧಿ ಬಳಕೆ, 56,000 ಹುದ್ದೆಗಳ ಭರ್ತಿ

ರಾಜ್ಯದಲ್ಲಿ ಲಭ್ಯವಿರುವ ಸುಮಾರು 8 ಸಾವಿರ ಕೋಟಿ ರೂಪಾಯಿಗಳ ಸಿಎಸ್ಆರ್ ನಿಧಿಯ ಬಳಕೆಯ ಬಗ್ಗೆ ನಿಖರ ಮಾಹಿತಿ ಕಲೆಹಾಕಲಾಗುತ್ತಿದೆ. ಈ ನಿಧಿಯನ್ನು ಪ್ರತಿ ಮೂರು ಗ್ರಾಮ ಪಂಚಾಯ್ತಿಗಳಿಗೆ ಒಂದರಂತೆ ಕರ್ನಾಟಕ ಪಬ್ಲಿಕ್ ಶಾಲೆ (KPS) ನಿರ್ಮಿಸಲು ಹಾಗೂ ಪ್ರಾಥಮಿಕ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಸುಧಾರಣೆಗೆ ಬಳಸಿಕೊಳ್ಳಲು ಕಾರ್ಪೊರೇಟ್ ಸಂಸ್ಥೆಗಳಿಗೆ ಪತ್ರ ಬರೆಯಲಾಗುವುದು ಎಂದು ಸಿಎಂ ತಿಳಿಸಿದರು.

ಜೊತೆಗೆ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿಯನ್ನು 15 ದಿನಗಳಲ್ಲಿ ನೀಡಲು ಆದೇಶಿಸಲಾಗಿದ್ದು, 56,000 ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ದಿನಾಂಕ ಸಹಿತ ಸಮಯ ನಿಗದಿಪಡಿಸಲಾಗುವುದು. ಯುವಕರಿಗಾಗಿ ಖಾಸಗಿ ಉದ್ಯೋಗ ವಿನಿಮಯ ಕೇಂದ್ರವನ್ನೂ ಸ್ಥಾಪಿಸಲಾಗುವುದು ಎಂದು ಡಿಕೆ ಶಿವಕುಮಾರ್ ಅವರು ಹೇಳಿದರು.

ರೌಡಿಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ

'ಪೊಲೀಸರು ಪ್ರತಿ ತಾಲ್ಲೂಕಿನಲ್ಲಿ ರೌಡಿಗಳ ನಿಗ್ರಹಕ್ಕೆ ಪ್ರತ್ಯೇಕ ಪಡೆ ರಚಿಸಬೇಕು. ಅವರು ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು. ಹಳೇ ರೌಡಿಗಳು ಹಾಗೂ ಹೊಸದಾಗಿ ಹುಟ್ಟಿಕೊಳ್ಳುವ ರೌಡಿಗಳ ಮೇಲೆ ನಿಗಾ ಇಡಬೇಕು ಎಂದು ಸೂಚಿಸಿರುವೆ,' ಎಂದು ಹೇಳಿದರು.

'ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಇಲ್ಲ'

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಅಥವಾ ಪರಿಷ್ಕರಿಸುವ ಯಾವುದೇ ಆಲೋಚನೆ ಸರ್ಕಾರದ ಮುಂದಿಲ್ಲ. ಕೇವಲ ಅರ್ಹ ಫಲಾನುಭವಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮೃತರ ಹೆಸರಿನಲ್ಲಿ ಗೃಹಲಕ್ಷ್ಮಿ ಹಣ ಪಡೆಯುತ್ತಿರುವುದರಿಂದ ಸುಮಾರು 120 ಕೋಟಿ ರೂಪಾಯಿ ವ್ಯತ್ಯಾಸವಾಗಿದೆ ಹಾಗೂ ಗೃಹಜ್ಯೋತಿಯನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಇದನ್ನು ತಡೆಯಲು ಮಾತ್ರ ತಪಾಸಣೆ ನಡೆಸಲಾಗುತ್ತಿದೆ ಎಂದು ವಿವರಿಸಿದರು. ಇದೇ ವೇಳೆ ಮೇಕೆದಾಟು ಯೋಜನೆ ಕುರಿತು ಪ್ರತಿಕ್ರಿಯಿಸಿದ ಅವರು ವಿಷಯ ಕೇಂದ್ರದ ಮುಂದಿದ್ದು, ಕಾನೂನಾತ್ಮಕವಾಗಿ ನಮ್ಮ ಕೆಲಸವನ್ನು ನಾವು ಮುಂದುವರಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+