'ಕುಮಾರಸ್ವಾಮಿ ನಿನಗೆ ಅಧಿಕಾರ ಇದ್ದಾಗ ನೀನು ಏನು ಮಾಡಿದೆ ಹೇಳಪ್ಪಾ?ʼ: ಏಕವಚನದಲ್ಲೇ ವಾಗ್ದಾಳಿ
ರಾಮನಗರ, ಫೆಬ್ರವರಿ 16: ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸತ್ತುಹೋಗಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ನಿನಗೆ ಅಧಿಕಾರ ಇದ್ದಾಗ ನೀನು ಏನು ಮಾಡಿದೆ ಹೇಳಪ್ಪಾ? ಮಂಡ್ಯದಲ್ಲಿ ಗೆದ್ದು ಕೇಂದ್ರದಲ್ಲಿ ದೊಡ್ಡ ಮಂತ್ರಿಯಾಗಿದ್ದೀಯಲ್ಲಾ ಈಗ ನೀನು ಏನು ಮಾಡುತ್ತೀಯಾ ಎಂದು ಮೊದಲ ಹೇಳು. ನೀವು ಏನು ಮಾಡುತ್ತೀರೋ ಮಾಡಿ, ಅದಕ್ಕೆ ಅಗತ್ಯ ಸಹಕಾರ ನಾವು ನೀಡುತ್ತೇವೆ. ನೀವು ಬರೀ ದ್ವೇಷ ರಾಜಕಾರಣ ಮಾಡುತ್ತಿದ್ದೀರಿ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಬಾರದು ಎಂದು ಆಕ್ಷೇಪ ಮಾಡಿದ್ದೀರಿ. ನಿಮ್ಮಂತೆ ನಾವು ದ್ವೇಷ ರಾಜಕಾರಣ ಮಾಡುವುದಿಲ್ಲ. ನಿಮಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ರಾಜ್ಯಕ್ಕೆ ಬಂದು ಏನು ಹೇಳಿದ್ದಾರೆ ಎಂಬುದನ್ನು ತಲೆಯಲ್ಲಿ ಇಟ್ಟುಕೊಳ್ಳಿ ಎಂದು ಹೆಚ್ ಡಿ ಕುಮಾರಸ್ವಾಮಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.

ಅಭಿವೃದ್ಧಿ ವಿಚಾರವಾಗಿ ಯಾರೂ ನನ್ನನ್ನು ಭೇಟಿ ಮಾಡುತ್ತಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಕುರಿತು ಮಾತನಾಡಿ, ಒಂದೇ ದಿನದಲ್ಲಿ ಮೇಕೆದಾಟು ಯೋಜನೆಗೆ ಮೋದಿ ಅವರಿಂದ ಸಹಿ ಹಾಕಿಸುವುದಾಗಿ ಹೇಳಿದ್ದೆಯಲ್ಲಾ, ಯಾಕೆ ಮಾಡಿಸಿಲ್ಲಾ? ನಮ್ಮ ಸಚಿವ ಎಂ.ಬಿ ಪಾಟೀಲ್ ಅವರ ಬಳಿ ಹೋಗಿ ಬಂಡವಾಳ ಹೂಡಿಕೆದಾರರ ಸಮಾವೇಶದ ಬಗ್ಗೆ ಚರ್ಚೆ ಮಾಡಿಲ್ಲವೇ? ಅವರಿಗೆ ದ್ವೇಷದ ರಾಜಕಾರಣವೇ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಲ್ಲ. ದ್ವೇಷದಿಂದ ಯಾರೂ ಯಾವುದೇ ಸಾಧನೆ ಮಾಡಿಲ್ಲ. ದೊಡ್ಡ ದೊಡ್ಡ ಚಕ್ರವರ್ತಿಗಳೇ ಕೆಳಗೆ ಬಿದ್ದಿದ್ದಾರೆ. ರಾಜಕಾರಣದಲ್ಲಿ ಯಾರೂ ಶಾಶ್ವತವಲ್ಲ ಎಂದು ಕಿಡಿಕಾರಿದರು.
ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ, ರಾಮನಗರಕ್ಕೆ ಯಾವ ನೀರಾವರಿ ಯೋಜನೆ ಮಾಡಬೇಕು ಎಂದು ಗೊತ್ತಿದೆ. ಎಷ್ಟೇ ಕಷ್ಟ ಆದರೂ ನಮ್ಮ ಅವಧಿಯಲ್ಲಿ ಜಿಲ್ಲೆಯ ಕೆರೆಗಳನ್ನು ತುಂಬಿಸಿ ನಮ್ಮ ಜನ ಇಲ್ಲೇ ಬದುಕು ಕಟ್ಟಿಕೊಳ್ಳಲು ಕಾರ್ಯಕ್ರಮ ರೂಪಿಸಿದ್ದೇವೆ. ಅತ್ಯಾಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ನೀವು ವ್ಯವಸಾಯ ಮಾಡಿ ಬದುಕು ಕಟ್ಟಿಕೊಳ್ಳಬಹುದು. ಹುಬ್ಬಳ್ಳಿ, ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ ಹೆಚ್ಚು ರೇಷ್ಮೆ ಬೆಳೆಯುತ್ತಿದ್ದಾರೆ. ಕನಕಪುರದಲ್ಲಿ ಮಾಡಿರುವ ಹಾಲಿನ ಡೈರಿ ಅಮೂಲ್ ಡೈರಿ ಮಾದರಿಯಲ್ಲಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಕೆಲಸ ಮಾಡಿ ನಾವು ವಿರೋಧ ಪಕ್ಷದವರಿಗೆ ತೋರಿಸುವುದಕ್ಕಿಂತ ನಮ್ಮ ಆತ್ಮಸಾಕ್ಷಿಗೆ ತೃಪ್ತಿಪಡಿಸುವಂತೆ ಮಾಡಬೇಕು. ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸರಾಸರಿ ವರ್ಷಕ್ಕೆ 250 ಕೋಟಿ ಹಣ ಹೋಗುತ್ತಿದೆ.
ಈ ಜಿಲ್ಲೆಯಲ್ಲಿ ಆಗಬೇಕಿರುವ ಕಾರ್ಯಗಳ ಬಗ್ಗೆ ಚರ್ಚೆ ಮಾಡಲು ಬಜೆಟ್ ಮಂಡನೆಯಾಗುವುದರೊಳಗೆ ಅಧಿಕಾರಿಗಳು ಹಾಗೂ ರಾಮಲಿಂಗಾ ರೆಡ್ಡಿ ಅವರು ಚರ್ಚೆ ಮಾಡುತ್ತೇನೆ. ಮುಂದಿನ ಚುನಾವಣೆ ವೇಳೆಗೆ ನಮ್ಮ ಜನ ನಮ್ಮ ಕೆಲಸಗಳನ್ನು ಗುರುತಿಸಬೇಕು. ಈ ಭಾಗದ ಲೋಕಸಭಾ ಕ್ಷೇತ್ರದಲ್ಲಿ ಆರ್ ಆರ್ ನಗರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದ್ದು, ಅಲ್ಲಿ ಸಂಘಟನೆಗೆ ಏನು ಮಾಡಬೇಕೋ ಮಾಡುತ್ತಿದ್ದೇವೆ. ನಮಗೆ ಯಾರ ಮೇಲೂ ದ್ವೇಷ ಸಾಧಿಸುವ ಅಗತ್ಯವಿಲ್ಲ. ಕೆಲಸ ಮಾಡಿ ಜನರ ಹೃದಯ ಗೆಲ್ಲಬೇಕು ಎಂದರು.
ನಾನು ಹಾಗೂ ಯೋಗೇಶ್ವರ್ ಅವರ ಮಧ್ಯೆ ಎಷ್ಟೇ ಜಗಳವಿದ್ದರೂ ಪಕ್ಷ ಮುಖ್ಯ ಎಂದು ನಾವು ಎಲ್ಲವನ್ನು ಮರೆತು ಪಕ್ಷದ ಟಿಕೆಟ್ ನೀಡಿ ಚುನಾವಣೆ ಮಾಡಿದ್ದೇವೆ. ಚುನಾವಣೆಯಲ್ಲಿ ಸೋತ ಬಳಿಕ ನಾನು ಚನ್ನಪಟ್ಟಣವನ್ನು ಬಿಡಲಿಲ್ಲ. ನಮ್ಮ ನಾಯಕರನ್ನು ಹಗಲು ರಾತ್ರಿ ಬಿಡದೇ ಚನ್ನಪಟ್ಟಣದಲ್ಲಿ ಸಂಘಟನೆ ಮಾಡಲಾಯಿತು. ಆಗ ಯೋಗೇಶ್ವರ್ ಅವರಿಗೆ ಈ ಹಸ್ತವೇ ಗ್ಯಾರಂಟಿ ಎಂದು ಅರಿವಾಯಿತು. ಆಗ ಬೇಷರತ್ತಾಗಿ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜನರಿಗೆ ಸುರೇಶ್ ಮೇಲೆ ಬೇಸರವಾಗಿ ಸೋಲಾಗಿಲ್ಲ. ನಿಮ್ಮ ನಿಮ್ಮಲ್ಲಿರುವ ಕೋಪ, ಭಿನ್ನಾಭಿಪ್ರಾಯದಿಂದ ಸೋಲಾಗಿದೆ ಎಂದು ಹೇಳಿದರು.












Click it and Unblock the Notifications