ಮುಖ್ಯಮಂತ್ರಿ ಹೇಳಿಕೆ ಖಂಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್!
ಬೆಂಗಳೂರು, ಅ. 06: ಆರ್‌ಎಸ್ಎಸ್‌ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಶಾಲೆ ಕಾಲೇಜುಗಳಲ್ಲಿ ಎಬಿವಿಪಿಗೆ ಸಂಬಂಧಿಸಿದವರನ್ನೇ ಪ್ರಾಧ್ಯಾಪಕರು, ಪ್ರಾಂಶುಪಾಲರುಗಳನ್ನು ನೇಮಕ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಇದು ಆರೆಸ್ಸಸ್ ನವರ ಕಾರ್ಯಾಚರಣೆ ಶೈಲಿ. ಇದನ್ನೇ ನಾವು ಕೇಸರಿಕರಣ ಎಂದು ಹೇಳುತ್ತಿದ್ದೇವೆ. ಇದು ದೇಶದ ಸಾಮರಸ್ಯಕ್ಕೆ ಮಾರಕವಾಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಆರೋಪಿಸಿದ್ದಾರೆ.
ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವಾಗಿದೆ. ಸಚಿವರು, ಶಾಸಕರು ಹಾಗೂ ಇತರರು ಕೋವಿಡ್ ಸಮಯದಿಂದಲೂ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕ ಮಾತ್ರವಲ್ಲದೇ ಬಿಜೆಪಿ ಆಡಳಿತ ಇರುವ ದೇಶದ ಎಲ್ಲ ರಾಜ್ಯಗಳಲ್ಲೂ ಇದೇ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಜೊತೆಗೆ ಉತ್ತರ ಪ್ರದೇಶದ ಲಖಿಂಪುರದಲ್ಲಿ ರೈತರ ಹತ್ಯೆ ಕುರಿತು ಮುಖ್ಯಮಂತ್ರಿಗಳು ಕೊಟ್ಟಿದ್ದ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಸಿಎಂ ಹೇಳಿಕೆ ಖಂಡನೆಗೆ ಅವರು ಕಾರಣವನ್ನೂ ಕೊಟ್ಟಿದ್ದಾರೆ. ಸಂಪೂರ್ಣ ಮಾಹಿತಿ ಮುಂದಿದೆ.

ಸಿಎಂ ಹೇಳಿಕೆ ಖಂಡಿಸಿದ ಡಿಕೆಶಿ!
ರೈತರ ಪ್ರತಿಭಟನೆ ವಿಚಾರವಾಗಿ ಹರ್ಯಾಣ ಮುಖ್ಯಮಂತ್ರಿ ಖಟ್ಟರ್ ಅವರ ಹೇಳಿಕೆ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಹೇಳಿಕೆಯನ್ನೇ ನೋಡಿ. ಹೇಗೆ ತಿರುಚುತ್ತಿದ್ದಾರೆ ಎಂದು ಗೊತ್ತಾಗುತ್ತದೆ. ಉತ್ತರ ಪ್ರದೇಶ ರೈತರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಬೇಕು ಎಂದು ಶಿವಕುಮಾರ್ ಇದೇ ವೇಳೆ ಆಗ್ರಹಿಸಿದ್ದಾರೆ.
|
ರೈತರು ಕಳೆದ 10 ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ!
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ, ಪ್ರತಿಭಟನೆ ನಮ್ಮ ಹಕ್ಕು. ಅಹಿಂಸೆ ಮಾರ್ಗದಲ್ಲಿ ಹೋರಾಟ ಮಾಡುವುದು ಗಾಂಧೀಜಿ ಅವರು ನಮಗೆ ಹೇಳಿಕೊಟ್ಟ ಪಾಠ. ರೈತರು ಕಳೆದ 10 ತಿಂಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳಾಗಲಿ, ಮಂತ್ರಿಗಳಾಗಲಿ ಯಾರೂ ರೈತರನ್ನು ಭೇಟಿ ಮಾಡಿ ಮಾತನಾಡಿಲ್ಲ ಎಂದು ಡಿಕೆಶಿ ಇದೇ ವೇಳೆ ಆರೋಪಿಸಿದ್ದಾರೆ.
ಕೇಂದ್ರ ಸಚಿವರ ಮಗ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿ 4 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನ ದಾಳಿ ಮಾಡಿದ್ದಾರೆ. ಇದು ಕೂಡ ನಡೆಯಬಾರದ ಘಟನೆ. ಆದರೆ ಇದಕ್ಕೆ ಕಾರಣರಾದವರನ್ನು ಬಂಧಿಸಿಲ್ಲ, ಮಂತ್ರಿ ರಾಜೀನಾಮೆ ನೀಡಿಲ್ಲ, ಇದು ಒಂದು ಸರ್ಕಾರನಾ? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

ಸಾಂತ್ವನ ಹೇಳುವುದು ರಾಜಕೀಯ ಕರ್ತವ್ಯ
ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಮುಂದಾಗಿದ್ದ ನಮ್ಮ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಸಾಂತ್ವನ ಹೇಳುವುದು ರಾಜಕೀಯ ಕರ್ತವ್ಯ. ಅದನ್ನು ಮಾಡಲು ಹೋದರೆ ಪುರುಷ ಪೊಲೀಸ್ ಅಧಿಕಾರಿಗಳು ಎಳೆದಾಡಿ ಅವರ ಹಕ್ಕನ್ನು ಕಸಿದಿದ್ದಾರೆ. ಇದು ಇಡೀ ಭಾರತೀಯ ಸಂಸ್ಕೃತಿಗೆ ಮಾಡಿದ ಅಪಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಂಡಿಸಿದ್ದಾರೆ.
Recommended Video

ಮೊದಲ ಬಾರಿಗೆ ದೇಶದ ಅನ್ನದಾತನಲ್ಲಿ ಅನಾಥ ಪ್ರಜ್ಞೆ
ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ದೇಶದ ಅನ್ನದಾತನಲ್ಲಿ ಅನಾಥ ಪ್ರಜ್ಞೆ ಕಾಡುವಂತಾಗಿದೆ. ರೈತ ವಿರೋಧಿ ಬಿಜೆಪಿ ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತುತ್ತಿರುವ ರೈತರ ಉಸಿರನ್ನೇ ಅಡಗಿಸಿದೆ ಎಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರು ರೈತರನ್ನು ಹತ್ಯೆ ಮಾಡಿದ್ದನ್ನು ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ.












Click it and Unblock the Notifications