ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ: ಡಿಕೆ ಶಿವಕುಮಾರ್ ಮಾರ್ಮಿಕ ಪೋಸ್ಟ್‌ನ ಅರ್ಥವೇನು?
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯೂ ಬೂದಿ ಮುಚ್ಚಿದ ಕೆಂಡದಂತೆ ಇದೆ. ಇತ್ತೀಚೆಗೆ ಹೈಕಮಾಂಡ್ ಸೂಚನೆ ಮೇರೆಗೆ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸಿದ್ದ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರು ನಾವು ಒಗ್ಗಟ್ಟಾಗಿದ್ದೇವೆ ಎಂದು ಹೇಳುವ ಮೂಲಕ ಸದ್ಯಕ್ಕೆ ನಾಯಕತ್ವ ಬದಲಾವಣೆ ತಣ್ಣಗಾದಂತಿತ್ತು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಂಗಳವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಲ ಹೊತ್ತು ಪ್ರತ್ಯೇಕವಾಗಿ ರಾಹುಲ್ ಗಾಂಧಿ ಜೊತೆಗೆ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.

ಇನ್ನೂ ಅಧಿಕಾರ ಹಂಚಿಕೆ ಸೂತ್ರದಂತೆ ಎರಡೂವರೆ ವರ್ಷದ ಬಳಿಕ ಡಿ ಕೆ ಶಿವಕುಮಾರ್ ಸಿಎಂ ಪಟ್ಟಕ್ಕಾಗಿ ಹೈಕಮಾಂಡ್ ನಾಯಕರ ಭೇಟಿಗಾಗಿ ಹಲವು ಬಾರೀ ದೆಹಲಿಗೆ ಭೇಟಿ ನೀಡಿದ್ರು, ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಇದೊಂದು ರೀತಿಯಲ್ಲಿ ಹಿನ್ನಡೆ ಎಂದೇ ವಿಶ್ಲೇಷಣೆ ಮಾಡಲಾಗ್ತಿತ್ತು. ಆದರೆ ಇದೀಗ ಮೈಸೂರು ವಿಮಾನ ನಿಲ್ದಾಣದಲ್ಲಿ ಕೆಲ ಹೊತ್ತು ಡಿಕೆ ಶಿವಕುಮಾರ್ ಜತೆಗೆ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.
ಇದೀಗ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಖುದ್ದಾಗಿ ಭೇಟಿಯಾದ ಬಳಿಕ ಡಿಕೆ ಶಿವಕುಮಾರ್ ಅವರು ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ ಟ್ವೀಟ್ ಹಂಚಿಕೊಂಡಿದ್ದಾರೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾದ ನಂತರ ಡಿಕೆ ಶಿವಕುಮಾರ್ ಅವರು ಈ ಫೋಸ್ಟ್ ಯಾಕೆ ಹಂಚಿಕೊಂಡಿದ್ದಾರೆ. ಇದರ ಗೂಢಾರ್ಥವೇನು? ಎನ್ನುವ ಪ್ರಶ್ನೆ ಉದ್ಭವಿಸಿದೆ.
ರಾಹುಲ್ ಗಾಂಧಿ ಜೊತೆಗೆ ಮಾತುಕತೆಯ ಬೆನ್ನಲ್ಲೇ ಡಿಕೆ ಶಿವಕುಮಾರ್ ಅಧಿಕೃತ ಟ್ವಿಟರ್ ಪೇಜ್ ನಲ್ಲಿ ಪೋಸ್ಟ್ ಹಾಕಲಾಗಿದೆ. " ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ " ಎಂದು ಮಾಡಿರುವ ಟ್ವೀಟ್ ಕುತೂಹಲ ಕೆರಳಿಸಿದೆ. ರಾಹುಲ್ ಗಾಂಧಿ ಭೇಟಿಯ ಬೆನ್ನಲ್ಲೇ ಇಂತಹದೊಂದು ಪೋಸ್ಟ್ ಉದ್ದೇಶ ಏನು ಎಂಬುವುದು ಸದ್ಯದ ಪ್ರಶ್ನೆಯಾಗಿದೆ. ಇನ್ನೂ ಕೇವಲ ಡಿಕೆ ಶಿವಕುಮಾರ್ ಮಾತ್ರ ಅಲ್ಲ, ಮಾಜಿ ಸಂಸದ ಡಿಕೆ ಸುರೇಶ್ ಕೂಡಾ ಫೇಸ್ ಬುಕ್ ಪೋಸ್ಟರ್ ಹಂಚಿಕೊಂಡಿದ್ದಾರೆ. "ಯಶಸ್ಸಿನ ಮೊದಲ ಹೆಜ್ಜೆಯೇ ಪ್ರಯತ್ನ, ಸತತ ಪ್ರಯತ್ನದ ಫಲವೇ ಯಶಸ್ಸು" ಎಂದು ಟ್ವೀಟ್ ಮಾಡಿದ್ದಾರೆ.
ಟ್ವೀಟ್ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?
"ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ" ಎಂಬ ಟ್ವೀಟ್ ವಿಚಾರವಾಗಿ ಡಿ ಕೆ ಶಿವಕುಮಾರ್ ಮಾಧ್ಯಮಗಳ ಜೊತೆಗೆ ಮಾತನಾಡಿ, ನಾನು ಹೊಸದಾಗಿ ಈ ಮಾತನ್ನು ಹೇಳುತ್ತಿಲ್ಲ. ಒಕ್ಕಲಿಗ ಉದ್ಯಮಿ ಕಾರ್ಯಕ್ರಮಕ್ಕೆ ಹೋಗಿದ್ದಾಗ ನಾನು ಅಲ್ಲಿನ ಉದ್ಯಮಿಗಳ ಜೊತೆ ನನ್ನ ಅನುಭವದ ಮಾತುಗಳನ್ನು ಹೇಳಿಕೊಂಡಿದ್ದೇನೆ ಎಂದರು. ಇನ್ನೂ ಜನವರಿ 16 ರಂದು ದೆಹಲಿಗೆ ತೆರಳುತ್ತಿದ್ದೇನೆ ಎಂದು ತಿಳಿಸಿದರು.
ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನಾನು ಕೆಪಿಸಿಸಿ ಅಧ್ಯಕ್ಷ, ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ. ಶಿಷ್ಟಾಚಾರದ ಮೂಲಕ ಅವರನ್ನು ನಾನು ಸ್ವಾಗತಿಸಿ, ಭೇಟಿ ಮಾಡಿದ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವೇ? ನೀವುಗಳು ನಿಮಗೆ ಇಚ್ಛೆ ಬಂದಂತೆ ಗೊಂದಲ ಸೃಷ್ಟಿಸಿಕೊಳ್ಳುತ್ತಿದ್ದೀರಿ. ನಾವು ಯಾವ ಸಂದೇಶವನ್ನು ಕೊಟ್ಟಿಲ್ಲ. ನಮಗೂ ಯಾವ ಸಂದೇಶವನ್ನೂ ಕೊಟ್ಟಿಲ್ಲ. ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ, ಇದನ್ನೇ ಮುಂದುವರಿಸಿಕೊಂಡು ಹೋಗಿ ಎಂದು ನಮ್ಮ ನಾಯಕರು ಹೇಳಿದ್ದಾರೆ. ನರೇಗಾ ವಿಚಾರವಾಗಿ ನಾವು ಮಾಡುತ್ತಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿದ್ದೇನೆ. ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ರಾಜಕಾರಣ ಚರ್ಚೆ ಮಾಡಿದ್ದೇವೆ ಎಂದರು.












Click it and Unblock the Notifications