ಗ್ರೇಟರ್ ಬೆಂಗಳೂರು; ಐದು ಪಾಲಿಕೆಗೆ ಆಯುಕ್ತರ ನೇಮಕ: ಮೇಯರ್ ಅಧಿಕಾರವಧಿ ಎಷ್ಟು? ಇಲ್ಲಿದೆ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್ 02: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಂದಿನಿಂದ ಇತಿಹಾಸದ ಪುಟಗಳಲ್ಲಿ ಸೇರ್ಪಡೆಗೊಂಡು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾರಂಭಗೊಂಡಿದೆ. ರಾಜ್ಯ ಸರ್ಕಾರ ಪ್ರಕಟಿಸಿರುವ ಅಧಿಸೂಚನೆಯಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ನಗರಪಾಲಿಕೆಗಳು ಕಾರ್ಯನಿರ್ವಹಿಸಲಿದ್ದು, ಈ ಐದು ನಗರಪಾಲಿಕೆಗಳಿಗೆ ಆಯುಕ್ತರನ್ನು ಸಹ ನೇಮಕ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕುರಿತು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಮಹಾನಗರ ಪಾಲಿಕೆ ಅಂತ ವಿಂಗಡಣೆ ಮಾಡಲಾಗಿದ್ದು, ಐದು ಸಂಸ್ಥೆಗೂ ಆಡಳಿತಾಧಿಕಾರಿ, ಆಯುಕ್ತರನ್ನ ಹಾಗೂ ಐಎಎಸ್, ಕೆಎಎಸ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಯಾವುದೇ ರಾಜಕಾರಣಿಗಳ ಹೆಸರನ್ನೂ ಪಾಲಿಕೆಗೆ ಇಟ್ಟಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಇತಿಹಾಸ ಪುಟಕ್ಕೆ ಪವಿತ್ರವಾದ ಬೆಂಗಳೂರು ಸೇರಿದೆ. ಜಿಬಿಎ ಬೆಂಗಳೂರು ಹೆಸರನ್ನ ಹೊಂದಿಕೊಂಡಿದೆ. ಸಹಕಾರ ಇರಲಿ ಅಂತಾ ಐದು ಪಾಲಿಕೆಗಳನ್ನಾಗಿ ಮಾಡಿದ್ದೇವೆ. ಜುಲೈ 25ರಂದು 55 ಜನರು ಹಲವು ತಕರಾರು ಸಲ್ಲಿಸಿದ್ದರು. 5 ಮಹಾನಗರ ಪಾಲಿಕೆ ಕಡತಗಳನ್ನ ರಾಜ್ಯಪಾಲರಿಗೆ ಕಳಿಸಲಾಗಿತ್ತು. 120 ದಿನಗಳ ಕಾಲ ಪ್ರಾಧಿಕಾರ ರಚಿಸಿ ಅದೇಶಿಸಲಾಗಿದೆ. 75 ಜನರನ್ನ ಸದಸ್ಯರನ್ನಾಗಿ ಮಾಡಲಾಗುತ್ತೆ. ಐವರು ಮೇಯರ್ ಇರುತ್ತಾರೆ. ಎಲ್ಲಾ ಮೇಯರ್ ಗಳಿಗೂ ಎರಡೂವರೆ ವರ್ಷ ಅವಧಿ ಇರುತ್ತಾರೆ. ನಮಗೆ ಟೈಮ್ ಲೈನ್ ಇದೆ. ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದೇವೆ. ರಾಜ್ಯ ಚುನಾವಣಾ ಆಯೋಗಕ್ಕೆ ಚುನಾವಣೆ ಮಾಡಲು ಬರೆದಿದ್ದೇವೆ ಎಂದು ಡಿ ಕೆ ಶಿವಕುಮಾರ್ ಮಾಹಿತಿ ನೀಡಿದರು.
ಎಲ್ಲಾ ವಲಯಗಳಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಪ್ರತಿ ಪಾಲಿಕೆಯಲ್ಲಿ ಆಡಳಿತಾಧಿಕಾರಿಗಳಾಗಿ ಆಯುಕ್ತರನ್ನು ನೇಮಕ ಮಾಡಲಾಗಿದೆ. ಆಯುಕ್ತರಿಗೆ ನೆರವಾಗಲು, ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು, ಕೆಎಎಸ್ ಅಧಿಕಾರಿಗಳು ಹಾಗೂ ಮುಖ್ಯ ಇಂಜಿನಿಯರ್ ಕಡ್ಡಾಯವಾಗಿ ಇರುತ್ತಾರೆ. ಈ ಹಿಂದೆ ಇದ್ದ 27 ವಿಭಾಗಗಳನ್ನು 50 ವಿಭಾಗಗಳಾಗಿ ಮಾಡಿದ್ದೇವೆ. 75 ಉಪ ವಿಭಾಗಗಳನ್ನು 150ಕ್ಕೆ ಏರಿಸಿದ್ದೇವೆ. ಪ್ರತಿ ಪಾಲಿಕೆಯಲ್ಲಿ ಗರಿಷ್ಠ 150 ವಾರ್ಡ್ ಗಳವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಪಾಲಿಕೆಯಲ್ಲಿ ಸರಾಸರಿಯಲ್ಲಿ 100 ವಾರ್ಡ್ ಗಳಂತೆ ಬೆಂಗಳೂರಿನಲ್ಲಿ ಸುಮಾರು 500 ಹೊಸ ನಾಯಕರುಗಳನ್ನು ಆಯ್ಕೆ ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಮಹಿಳೆಯರು ಹಾಗೂ ಪುರುಷರು 50:50 ಇರುತ್ತಾರೆ ಎಂದು ತಿಳಿಸಿದರು.
ನಾಳೆಯಿಂದಲೇ ಆಯಾ ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತೆರಿಗೆ ಹಣ ಆಯಾ ಪಾಲಿಕೆಗೆ ಸೇರಲಿದೆ. ಈ ತೆರಿಗೆ ಹಣ ಜಿಬಿಎಗಾಗಲಿ ಅಥವಾ ರಾಜ್ಯ ಸರ್ಕಾರಕ್ಕಾಗಲಿ ಬರುವುದಿಲ್ಲ. ನಾವು ಯಾವುದೇ ರೀತಿಯಲ್ಲಿ ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗುವುದಿಲ್ಲ. ಪಾಲಿಕೆಗಳಿಗೆ ಸ್ವಾಯತ್ತತೆ ನೀಡಲಾಗಿದೆ. ಮುಂದೆ ಜಿಬಿಎ ಮೂಲಕ ದೊಡ್ಡ ದೊಡ್ಡ ಯೋಜನೆಗಳ ಜಾರಿ, ಉತ್ತಮ ಆಡಳಿತ, ಸೇವೆಗೆ ಮೀಸಲಾಗಿರಲಿದೆ. ಸರ್ಕಾರದಿಂದ ಬಂದ ಹಣ ಜಿಬಿಎ ಹಾಗೂ ಪಾಲಿಕೆಗಳಿಗೆ ಹೋಗಲಿದೆ. ಇನ್ನು ಮುಂದಿನ ದಿನಗಳಲ್ಲಿ ಕಾನೂನು ಚೌಕಟ್ಟಿನಲ್ಲಿ ಚುನಾವಣೆ ನಡೆಯಲಿದೆ. ಸಧ್ಯ ನಗರದ ಜನಸಂಖ್ಯೆ 1.44 ಕೋಟಿ ಎಂದು ಅಂದಾಜಿಸಲಾಗಿದೆ. 2011ರ ಜನಗಣತಿ ಪ್ರಕಾರ ವಾರ್ಡ್ ನಲ್ಲಿ 20 ಸಾವಿರ ಜನಸಂಖ್ಯೆ ಇತ್ತು. ಈಗ 35-40 ಸಾವಿರ ಸರಾಸರಿಯಲ್ಲಿ ವಾರ್ಡ್ ರಚನೆ ಮಾಡಲಾಗುವುದು ಎಂದು ವಿವರಿಸಿದರು.
ಮುಂದಿನ ದಿನಗಳಲ್ಲಿ ಪೂರ್ವ, ಪಶ್ಚಿಮ, ಉತ್ತರ ದಕ್ಷಿಣ ಪಾಲಿಕೆಗಳಿಗೆ ಹೊಸ ಪ್ರದೇಶಗಳು ಸೇರ್ಪಡೆಯಾಗಲು ಅವಕಾಶ ಕಲ್ಪಿಸಿದ್ದೇವೆ. ಕಾನೂನಿಗೆ ತೊಡಕಾಗಬಾರದು ಎಂಬ ಉದ್ದೇಶದಿಂದ ಆ ಬಗ್ಗೆ ಚರ್ಚೆ ಮಾಡುವುದಿಲ್ಲ. ಆಯಾ ಪಾಲಿಕೆಗಳು ಸರ್ಕಾರವನ್ನು ವಿಶ್ವಾಸಕ್ಕೆ ಪಡೆದು ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆಗಳನ್ನು ಮಾಡಿಕೊಳ್ಳಲಿವೆ. ಈಗ ಹಾಲಿ ಇದ್ದ ಪಾಲಿಕೆ ವ್ಯಾಪ್ತಿಗೆ ಜಿಬಿಎ ರಚಿಸಿ, ಐದು ಪಾಲಿಕೆ ಮಾಡಿದ್ದೇವೆ. ಇದನ್ನು ಜಾರಿಗೆ ತರಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಆನೇಕಲ್ ಕ್ಷೇತ್ರಕ್ಕೆ ಸೇರಿದ್ದ ಒಂದು ವಾರ್ಡ್ ಬಿಟ್ಟುಹೋಗಿತ್ತು. ಈಗ ಅದನ್ನು ಸರಿಪಡಿಸಿದ್ದೇವೆ ಎಂದು ಹೇಳಿದರು.












Click it and Unblock the Notifications