DK Shivakumar: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್: ಮಹತ್ವದ ಮಾಹಿತಿ ನೀಡಿದ ಡಿ ಕೆ ಶಿವಕುಮಾರ್
ಬೆಂಗಳೂರು, ಡಿಸೆಂಬರ್ 02: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಸಧ್ಯದಲ್ಲೇ ನಡೆಯಲಿರುವುದಂತೂ ನಿಜ. ಅದನ್ನು ನಿಲ್ಲಿಸಲು ಆಗುವುದಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಹತ್ವದ ಮಾಹಿತಿಯನ್ನ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲೇ ಡಿ.5ರಂದು ಹಾಸನದಲ್ಲಿ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿಯೇ ಕಾಂಗ್ರೆಸ್ ಪಕ್ಷ ವಹಿಸಿಕೊಳ್ಳಲಿದೆ. ಪಕ್ಷದ ಅನೇಕ ನಾಯಕರು, ಮುಖಂಡರು ಹಾಸನದಲ್ಲಿ ಸಮಾವೇಶ ಮಾಡಲು ತಿಳಿಸಿದ್ದಾರೆ. ನಮ್ಮ ಪಕ್ಷದ ವತಿಯಿಂದ ಸಚಿವರುಗಳು, ಜಿಲ್ಲಾ ಮಂತ್ರಿಗಳು ಸಮಾವೇಶದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಮಾವೇಶಕ್ಕೆ ಅನೇಕ ಸಂಘಟನೆಗಳು ಸಮುದಾಯಗಳು ಬೆಂಬಲ ಸೂಚಿಸಿವೆ. ಇವರ ಬೆಂಬಲವನ್ನು ನಾವು ಸ್ವೀಕರಿಸುತ್ತೇವೆ.

ನಾನು ನಾಲ್ಕು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದೆ. ಮುಖ್ಯಮಂತ್ರಿಗಳು ದೆಹಲಿ ಪ್ರವಾಸದಲ್ಲಿದ್ದರು. ದೇಶದಲ್ಲಾಗುತ್ತಿರುವ ವಿದ್ಯಮಾನ ಹಾಗೂ ಸಂವಿಧಾನ ರಕ್ಷಣೆಗೆ ಕಾರ್ಯಕ್ರಮ ರೂಪಿಸಲು ಎಐಸಿಸಿ ನಾಯಕರು ಮಾರ್ಗದರ್ಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದೇವೆ. ಸಮಾನತೆ, ಸಂವಿಧಾನದ ಬಗ್ಗೆ ಗೌರವ ಹೊಂದಿರುವವರು, ಸ್ವಾಭಿಮಾನಿಗಳಿಗೆ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಸಧ್ಯದಲ್ಲೇ ನಾನು ಹಾಗೂ ಕೆಪಿಸಿಸಿ ತಂಡ ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ತಯಾರಿಯನ್ನು ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು.
ಜನರ ಕಲ್ಯಾಣ, ಸಂವಿಧಾನ ರಕ್ಷಣೆ, ಸ್ವಾಭಿಮಾನ ರಕ್ಷಣೆ, ಸರ್ಕಾರದ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶ ಮಾಡಲಾಗುತ್ತಿದೆ. ಸರ್ಕಾರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಜನ ಈಗಾಗಲೇ ತೀರ್ಪು ಕೊಟ್ಟಿದ್ದಾರೆ. ಎಐಸಿಸಿ ನಾಯಕರ ನಿರ್ದೇಶನದಂತೆ ಮುಂದಿನ ಎರಡು ತಿಂಗಳ ಕಾಲ ಒಂದಲ್ಲಾ ಒಂದು ರೀತಿ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿನ ಯಶಸ್ಸು ಮುಂದುವರೆಸಿಕೊಂಡು ಹೋಗಲು ಪಕ್ಷ ಸಂಘಟನೆ ಮಾಡಲಾಗುವುದು. ಚುನಾವಣೆ ಬಂದಾಗ ಸಿದ್ಧತೆ ಮಾಡಿಕೊಳ್ಳುವುದಲ್ಲ. ಚುನಾವಣೆ ಮುಗಿದ ಮರು ದಿನದಿಂದಲೇ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಪ್ರತಿ ವಿಭಾಗವಾರು ತಲುಪಿಸಲು ಪಕ್ಷವು ತೀರ್ಮಾನ ಮಾಡಿದೆ.
ಎಲ್ಲಿ ಕಳೆದುಕೊಂಡಿದ್ದೇವೆಯೋ ಅಲ್ಲಿಯೇ ಅದನ್ನು ಹುಡುಕಬೇಕು ಎನ್ನುವುದು ನಮ್ಮ ತತ್ವ. ಹಾಸನದಲ್ಲಿ ಒಂದು ವಿಧಾನಸಭಾ ಕ್ಷೇತ್ರವನ್ನು ಗೆದ್ದಿದ್ದೆವು. ಆದರೆ ಲೋಕಸಭೆಯಲ್ಲಿ ಜನ ಶಕ್ತಿ ತುಂಬಿದರು. ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ಅತ್ಯಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿದ್ದೇವೆ. ಒಂದಷ್ಟು ಕಡೆ ಲೋಕಸಭೆಯಲ್ಲಿ ಸೋತಿದ್ದೇವೆ.
ಶೀಘ್ರದಲ್ಲಿಯೇ ಸಂಡೂರು, ಶಿಗ್ಗಾವಿಯಲ್ಲಿ ಮತದಾರರರಿಗೆ ಕೃತಜ್ಞತಾ ಸಮಾವೇಶವನ್ನು ಆಯೋಜಿಸುವ ಕುರಿತು ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಲಾಗಿದೆ. ವಿಧಾನಸಭಾ ಅಧಿವೇಶನ ನಡೆಯುವ ಮಧ್ಯಲ್ಲಿಯೇ ಭಾನುವಾರದಂದು ಚನ್ನಪಟ್ಟಣದಲ್ಲಿ ಅಭಿನಂದನಾ ಸಮಾವೇಶ ಆಯೋಜಿಸುವಂತೆ ಸುರೇಶ್ ಹಾಗೂ ಯೋಗೇಶ್ವರ್ ಅವರಿಗೆ ಸೂಚಿಸಿದ್ದೇವೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.












Click it and Unblock the Notifications