ಡಿಕೆ ಶಿವಕುಮಾರ್ ಶೀಘ್ರದಲ್ಲೇ ಮುಖ್ಯಮಂತ್ರಿಯಾಗುವುದು ಖಚಿತ: ಕಾಂಗ್ರೆಸ್ ಶಾಸಕನ ಹೇಳಿಕೆ ವೈರಲ್
ಹನಗುಂದ, ಅಕ್ಟೋಬರ್ 20: ಅತಿ ಶೀಘ್ರದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹುನಗುಂದದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗೆ ಗ್ರಾಸವಾಗಿದ್ದಾರೆ.
ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು, ಶೀಘ್ರದಲ್ಲೇ ಉಪುಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗುತ್ತಾರೆ. ಕರ್ನಾಟಕದಲ್ಲಿ ನಮ್ಮ ಪಕ್ಷದ ಯಶಸ್ವಿ ಆಡಳಿತದಲ್ಲಿ ಡಿಕೆ ಶಿವಕುಮಾರ್ ಅವರು ಅತ್ಯಂತ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಅವರು ಶೀಘ್ರದಲ್ಲೇ ಕರ್ನಾಟಕದ ಮುಖ್ಯಮಂತ್ರಿಯಾಗುತ್ತಾರೆ ಎಂದು ನನಗೆ ಖಚಿತವಾಗಿದೆ. ನಾನು ಅವರನ್ನು ಆ ಹುದ್ದೆಯಲ್ಲಿ ನೋಡಲು ಬಯಸುತ್ತೇನೆ ಎಂದರು.

ಕಾಂಗ್ರೆಸ್ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಜನರಿಗೆ ಉತ್ತಮ ಆಡಳಿತ ನೀಡುವುದು ನನ್ನ ಆದ್ಯತೆಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ ಜನರಿಗೆ ಗುಣಮಟ್ಟದ ಆಡಳಿತ ನೀಡುವುದಷ್ಟೇ ನನ್ನ ಗಮನ. ನಾನು ಬೇರೆ ಯಾವುದೇ ವಿಷಯಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.
ತಾವು ಶೀಘ್ರದಲ್ಲೇ ಮುಖ್ಯಮಂತ್ರಿಯಾಗುತ್ತಾರೆಯೇ ಎಂಬ ಪ್ರಶ್ನೆಗೆ, "ಅದನ್ನು ಪಕ್ಷ ನಿರ್ಧರಿಸಬೇಕು" ಎಂದು ಹೇಳಿದರು. ಈ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಎಂದು ಘೋಷಿಸಿದ್ದರಿಂದ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.
ಏತನ್ಮಧ್ಯೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಂದ್ರೀಯ ತನಿಖಾ ದಳದ ಎಫ್‌ಐಆರ್ ಅನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ವಿಚಾರಣೆ ಮುಗಿಸಿ ತೀರ್ಪನ್ನು ಮೊದಲೇ ಕಾಯ್ದಿರಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ತೀರ್ಪನ್ನು ಪ್ರಕಟಿಸಿ ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದರು.
ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದರು. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದರು.
ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸಿಬಿಐ ಅವರು ಶೇ 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.












Click it and Unblock the Notifications