DK Shivakumar: ಬಾಕಿ ಅನುದಾನ ವಿಚಾರದಲ್ಲಿ ರಾಜ್ಯಕ್ಕೆ ಗುಡ್‌ನ್ಯೂಸ್; ಡಿಕೆ ಶಿವಕುಮಾರ್ ಮಹತ್ವದ ಮಾಹಿತಿ
ನವದೆಹಲಿ: ನಮ್ಮ ರಾಜ್ಯದ ಹಳೆಯ ಬಾಕಿ ವಿಚಾರವಾಗಿ ನಾನು ವಿತ್ತ ಸಚಿವರೊಂದಿಗೆ ಚರ್ಚೆ ಮಾಡಿದ್ದು, ಕೆಲವು ಸಿಹಿ ಸುದ್ದಿ ಕೊಟ್ಟಿದ್ದಾರೆ. ನಾನು ಈಗ ಆ ಬಗ್ಗೆ ಹೇಳುವುದಿಲ್ಲ. ನಂತರ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಜಿಎಸ್ ಟಿ ಸಭೆ ಬಳಿಕ ಶಿವಕುಮಾರ್ ಅವರು ಕರ್ನಾಟಕ ಭವನದಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಜಿಎಸ್ ಟಿ ಕೌನ್ಸಿಲ್ ಸಭೆ ಅತ್ಯುತ್ತಮವಾಗಿ ನಡೆಯಿತು. ಕರ್ನಾಟಕದ ಅಂಶಗಳನ್ನು ಎಲ್ಲರೂ ಒಪ್ಪಿದ್ದಾರೆ. ಜಿಎಸ್ ಟಿ ಪಾವತಿಸದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸುವ ವಿಚಾರ ಪ್ರಸ್ತಾಪವಾಯಿತು. ಆದಾಯ ತೆರಿಗೆ ನಿಯಮ, ನಿಬಂಧನೆಗಳಂತೆ ಮಾಡಬೇಕು, ಅನಗತ್ಯವಾಗಿ ಅಧಿಕಾರಿಗಳು ವ್ಯಾಪಾರಸ್ಥರನ್ನು ಬಂಧಿಸುವುದು ಸರಿಯಲ್ಲ. ಅವರಿಂದ ಎಷ್ಟು ಕಟ್ಟಿಸಿಕೊಳ್ಳಬೇಕೋ ಅಷ್ಟು ಹಣ ಕಟ್ಟಿಸಿಕೊಳ್ಳೋಣ. ಬಂಧಿಸುವುದು ಸರಿಯಲ್ಲ ಎಂದು ಚರ್ಚೆಯಾಯಿತು. ಒಂದು ರಾಜ್ಯ ಬಿಟ್ಟರೆ ಉಳಿದ ರಾಜ್ಯಗಳು ಒಪ್ಪಿವೆ ಎಂದು ಹೇಳಿದರು.

ಸ್ಟಿಂಗ್ ಆಪರೇಷನ್ 'ಪಿತಾಮಹ' ಯಾರೆಂಬುದು ಗೊತ್ತು
ಮುಖ್ಯಮಂತ್ರಿ ಆದ ಬಳಿಕ ನನ್ನ ಹಾಗೂ ಇತರೆ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಯತ್ನ ನಡೆದಿದ್ದು, ಇದರ ಪಿತಾಮಹ ಯಾರು? ಇದಕ್ಕೆ ಹಣಕಾಸಿನ ನೆರವು ಯಾರು ನೀಡುತ್ತಿದ್ದಾರೆ ಹಾಗೂ ಹೇಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಮಾರುವೇಷದ ಕಾರ್ಯಾಚರಣೆಗಳನ್ನು ನನ್ನ ಮೇಲಿಂದಲೇ ಶುರು ಮಾಡಲು ಪ್ರಯತ್ನ ಮಾಡಿದ್ದಾರೆ. ನನ್ನ ಬಳಿ ಈ ಬಗ್ಗೆ ಎಲ್ಲ ಸಾಕ್ಷ್ಯಗಳೂ ಇವೆ. ನಾನು ಜವಾಬ್ದಾರಿ ಸ್ಥಾನದಲ್ಲಿದ್ದೇನೆ. ನಾನು ಏನೇ ಮಾತನಾಡಬೇಕಾದರೂ ಸುಮ್ಮನೆ ಮಾತನಾಡುವುದಿಲ್ಲ ಎಂದರು.
DK Shivakumar: ನನ್ನ ವಿರುದ್ದವೂ ಸ್ಟಿಂಗ್ ಆಪರೇಷನ್
ಮುಖ್ಯಮಂತ್ರಿಯಾದ ಬಳಿಕ ನಡೆದಿರುವ ಪ್ರಯತ್ನಗಳ ಬಗ್ಗೆ ಹೇಳುತ್ತಿದ್ದೇನೆ. ನನ್ನನ್ನು ಸೇರಿಸಿ ಬೇರೆ ಯಾವ, ಯಾವ ನಾಯಕರ ವಿರುದ್ಧ ಕಾರ್ಯಾಚರಣೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದೂ ತಿಳಿದಿದೆ. ಆದರೆ, ಈ ಎಲ್ಲ ವಿಚಾರಗಳನ್ನು ಈಗ ಬಹಿರಂಗವಾಗಿ ಮಾತನಾಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ತಮ್ಮ ವಿರುದ್ಧದ ಪ್ರಯತ್ನಗಳ ಹಿಂದೆ ಕರ್ನಾಟಕದವರೇ ಇದ್ದಾರೆಯೇ ಅಥವಾ ಬೇರೆ ರಾಜ್ಯದವರೂ ಇದ್ದಾರೆಯೇ ಎಂಬ ಬಗ್ಗೆ ಕೇಳಲಾಗಿ, "ನಾನು ನಿಮ್ಮ ಬಳಿ ಎಲ್ಲವನ್ನೂ ಬಹಿರಂಗಪಡಿಸಲು ಹೋಗುವುದಿಲ್ಲ. ಕಾಲ ಬಂದಾಗ ಉತ್ತರ ಕೊಡುತ್ತೇನೆ ಎಂದು ಹೇಳಿದರು.
ಅಧಿಕಾರಿಗಳು, ಸಚಿವರಿಗೆ ಎಚ್ಚರಿಕೆಯಿಂದಿರಲು ಸೂಚನೆ
ಸಚಿವರನ್ನು ಸಿಕ್ಕಿ ಹಾಕಿಸಲು ಏಜೆಂಟರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಬಹಳ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, "ಕೆಲವರು ನನ್ನ ಬಳಿ ಬಂದಿದ್ದರು, ನಾನು ಫೋಟೋಗಳನ್ನು ಬಿಡುಗಡೆ ಮಾಡಲು ಸಿದ್ಧ. ಸದ್ಯಕ್ಕೆ ಅದರ ಅವಶ್ಯಕತೆ ಇಲ್ಲ. ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತು. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ನನ್ನ ಬಳಿ ಯಾರು ಬಂದಿದ್ದರೋ ಅವರ ಮೇಲೆ ಅನುಮಾನ ಬಂದು ಪೊಲೀಸರಿಗೆ ತಿಳಿಸಿ, ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದೇನೆ.
ಅದನ್ನು ಈಗಲೇ ಬಹಿರಂಗ ಮಾಡಲು ಸಾಧ್ಯವಿಲ್ಲ. ಇದಕ್ಕೆ ಪಿತಾಮಹರು ಯಾರು ಎಂದು ತಿಳಿದಿದೆ. ಅದಕ್ಕೆಲ್ಲಾ ಉತ್ತರಿಸಲು ಹೋಗುವುದಿಲ್ಲ. ಅಧಿಕಾರಿಗಳನ್ನು ಸುಮ್ಮನೆ ಸಿಕ್ಕಿಹಾಕಿಸಲು ಪ್ರಯತ್ನ ಮಾಡುತ್ತಿದ್ದು, ಅವರು ಹುಷಾರಾಗಿರಬೇಕು ಎಂದು ಎಚ್ಚರಿಕೆ ನೀಡಿದೆ. ಹಿಂದೆ ಮಾಧ್ಯಮದಿಂದ ಸ್ಟಿಂಗ್ ಆಪರೇಷನ್ ಮಾಡಲು ಬಂದಿದ್ದರು. ಹಾಗಾಗಿ ಈಗಲೇ ಎಚ್ಚರಿಕೆ ನೀಡಲಾಗಿದೆ. ಕೆಲವು ನಾಯಕರು ಈ ಕಾರ್ಯಾಚರಣೆಗೆ ಖಾಸಗಿ ಏಜೆಂಟರನ್ನು ನೇಮಕ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಪಕ್ಕಾ ಮಾಹಿತಿ ಇದೆ" ಎಂದರು.
ರಕ್ಷಣೆ ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯ
ಎಸ್ ಐ ಆರ್ ಬಗ್ಗೆ ಕಳೆದ ಎರಡು ದಿನಗಳಿಂದ ಹೋರಾಟ ನಡೆದಿದೆ. ಬಾಂಗ್ಲಾದೇಶ ಹಾಗೂ ಬೇರೆಡೆಗಳಿಂದ ಬಂದು ಜನರು ಇಲ್ಲಿದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಹಾಗಿದ್ದರೆ ದೇಶದ ಗಡಿಯಲ್ಲಿ ಬಾಂಗ್ಲಾದೇಶದಿಂದ ನುಸುಳಿಕೋರರನ್ನು ತಡೆಗಟ್ಟುವುದು ಕೇಂದ್ರ ಸರ್ಕಾರದ ಕರ್ತವ್ಯವಲ್ಲವೇ? ಬಿಜೆಪಿಯ ಸಂಸದರೂ ಹಾಗೂ ಶಾಸಕರು, ನಾವು ಬಾಂಗ್ಲಾದೇಶದವರನ್ನು ಮತಪಟ್ಟಿಯಿಂದ ತೆಗೆಯಲು ಅರ್ಜಿ ಸಲ್ಲಿಸಿದ್ದೇವೆ ಎಂದಿದ್ದಾರೆ. ಭಾರತೀಯರ ಮತಗಳ ರಕ್ಷಣೆ ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯ. ನಮ್ಮಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದರೆ ಅವರ ಮತದಾನದ ಹಕ್ಕು ಕಸಿಯುವುದು ಮಾತ್ರವಲ್ಲ, ಅವರನ್ನೇ ದೇಶದಿಂದ ಹೊರಗೆ ಹಾಕಲಿ. ಆ ಕೆಲಸ ಯಾಕೆ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದರು.
ಕೇಂದ್ರದಲ್ಲಿ ಪ್ರತಿಪಕ್ಷಗಳ ಹೋರಾಟದ ಬಗ್ಗೆ ಪೊಲೀಸರ ಕ್ರಮದ ಕುರಿತು ಮಾತನಾಡಿ, ಹೋರಾಟಗಾರರ ವಿರುದ್ಧ ಪೊಲೀಸರೂ ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರು ದೇಶದ ಪ್ರಜಾಪ್ರಭುತ್ವ ಹಾಗೂ ಜನರ ರಕ್ಷಣೆಗಾಗಿ ಹೋರಾಡುತ್ತಿದ್ದಾರೆ ಎಂದು ಹೇಳಿದರು.


Click it and Unblock the Notifications
