ವರ್ತೂರು ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ ಕುರಿತು ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ!
ಬೆಂಗಳೂರು, ಡಿ. 08: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ಕೆಲ ದಿನಗಳ ಹಿಂದಷ್ಟೇ ಅಪಹರಣಕ್ಕೊಳಗಾಗಿದ್ದರು. ಬಳಿಕ ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದಿದ್ದಾಗಿ ಅವರು ಹೇಳಿಕೆ ನೀಡಿದ್ದರು. ಈ ಕುರಿತು ಬೆಂಗಳೂರಿನ ವೈಟ್‌ಫಿಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ತನಿಖೆಗೆ ಎರಡು ತಂಡಗಳನ್ನು ರಚಿಸಿದ್ದ ಡಿಸಿಪಿ ದೇವರಾಜ್ ಅವರು ಕೋಲಾರ ಗ್ರಾಮಾಂತರ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿತ್ತು. ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ವರ್ತೂರು ಪ್ರಕಾಶ್ ಅವರು ಕಾಂಗ್ರೆಸ್ ಪಕ್ಷ ಸೇರಿದಲ್ಲಿ ಕೋಲಾರ ಭಾಗದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಉಸ್ತುವಾರಿ ಕೊಡಲಾಗುತ್ತದೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು.
ಇದೀಗ ವರ್ತೂರು ಪ್ರಕಾಶ್ ಅವರು ಕಾಂಗ್ರೆಸ್ ಸೇರ್ಪಡೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ವರ್ತೂರು ಪ್ರಕಾಶ್ ಅವರು ಕಾಂಗ್ರೆಸ್ ಸೇರ್ಪಡೆ ಕುರಿತು ಡಿಕೆಶಿ ಏನು ಹೇಳಿದ್ದಾರೆ? ಮುಂದಿದೆ ಮಾಹಿತಿ.

ಗ್ರಾಮ ಪಂಚಾಯತ್ ಚುನಾವಣೆ
ಮದುವೆ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಬರುತ್ತಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು. ಸತತ ಮೂರು ದಿನಗಳ ಒತ್ತೆಯ ಬಳಿಕ 25 ಲಕ್ಷ ರೂಪಾಯಿಗಳನ್ನು ಹೊಂದಿಸಿ ಅಪಹರಣಕಾರರಿಗೆ ಪ್ರಕಾಶ್ ಕೊಟ್ಟಿದ್ದಾರೆ ಎನ್ನಲಾಗಿತ್ತು. ಈ ಕುರಿತು ವರ್ತೂರು ಪ್ರಕಾಶ್ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆ ಘೋಷಣೆ ಸಂದರ್ಭದಲ್ಲಿಯೇ ಅಪಹರಣವಾಗಿದ್ದು ಕೂತೂಹಲ ಮೂಡಿಸಿತ್ತು.
ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ವರ್ತೂರು ಪ್ರಕಾಶ್ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬುದರ ಕುರಿತು ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ಮಾಜಿ ಸಚಿವ ವರ್ತೂರು ಪ್ರಕಾಶ್ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ನನ್ನನ್ನು ಭೇಟಿ ಮಾಡಿಲ್ಲ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಯಾವುದೇ ಆಲೋಚನೆಯೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ನನ್ನನ್ನು ಭೇಟಿ ಮಾಡಿಲ್ಲ
ವರ್ತೂರು ಪ್ರಕಾಶ್ ಅವರು ಈ ಕ್ಷಣದವರೆಗೂ ನನ್ನನ್ನು ಭೇಟಿ ಮಾಡಿಲ್ಲ. ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ವರ್ತೂರು ಪ್ರಕಾಶ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸುಳ್ಳು ಪ್ರಚಾರ ಮಾಡುತ್ತಿದ್ದು, ನಮ್ಮ ಪಕ್ಷದ ಹಾಗೂ ಪಕ್ಷದ ನಾಯಕರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
Recommended Video

ಕಾನೂನು ಕ್ರಮದ ಎಚ್ಚರಿಕೆ
ವರ್ತೂರು ಪ್ರಕಾಶ್ ಅವರು ಮುಂದಿನ ದಿನಗಳಲ್ಲಿ ಇದೇ ರೀತಿಯ ಕುತಂತ್ರ, ಅಪಪ್ರಚಾರ ಮುಂದುವರಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಅವರು ಎಚ್ಚರಿಸಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಪ್ರತಿಕ್ರಿಯೆ ಪಡೆಯಲು 'ಒನ್‌ಇಂಡಿಯಾ ಕನ್ನಡ' ಪ್ರಯತ್ನಿಸಿತಾದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ.












Click it and Unblock the Notifications