ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಳಗಾವಿ, ಡಿಸೆಂಬರ್ 20: ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನುಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು.
ವಿಧಾನ ಪರಿಷತ್ತಿನಲ್ಲಿ ಗುರುವಾರ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆ ಉತ್ತರಿಸಿದ ಡಿ ಕೆ ಶಿವಕುಮಾರ್, ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್, ಯಶವಂತಪುರ ಮೆಟ್ರೋ ನಿಲ್ದಾಣ, ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶಿಶು ಆಹಾರ ಕೇಂದ್ರಗಳು ಇವೆ ಎಂದು ಹೇಳಿದರು. ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಹಾಗೂ ಅಂಗವಿಕಲರಿಗೆ ಶೌಚಾಲಯಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು -ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನಾ ಪ್ರಾಧಿಕಾರದ ಶಾಖಾ ಕಚೇರಿಯನ್ನು ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಸ್ಥಾಪಿಸುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನಾ ಪ್ರಾಧಿಕಾರ (ಬಿ.ಎಂ.ಐ.ಸಿ.ಎ.ಪಿ.ಎ) ವ್ಯಾಪ್ತಿಗೆ ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಗೆ 2001ನೇ ಸಾಲಿನಲ್ಲಿ ಸೇರ್ಪಡೆಯಾಗಿದೆ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಭೀಮಾ ಮುಖ್ಯ ನದಿಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ನೀರನ್ನು ಬಳಸಿಕೊಳ್ಳಲು ನಿರ್ಭಂದವಿದ್ದು, ಮಿತಿಗೊಳಿಸಿರುವ ಪ್ರಮಾಣದಲ್ಲಿ ಯೋಜನೆಗಳನ್ನು ರೂಪಿಸಲಾಗಿರುತ್ತದೆ. ಸಾಮಾನ್ಯ ವರ್ಷಗಳಲ್ಲಿ ನೀರಿನ ಕೊರತೆ ಕಂಡುಬಂದಿರುವುದಿಲ್ಲ. ಕೊರತೆಯಾದ ಜಲ ವರ್ಷಗಳಲ್ಲಿ ಕುಡಿಯುವ ಹಾಗೂ ಇತರೆ ಅಗತ್ಯಗಳಿಗೆ ನೀರನ್ನು ಮಹಾರಾಷ್ಟ್ರ ರಾಜ್ಯದಿಂದ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು, ಸದಸ್ಯರಾದ ಡಾ.ತಳವಾರ ಸಾಬಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ್ದಾರೆ. ಬಚಾವತ್ ತೀರ್ಪಿನ ಪ್ರಕಾರ ನ್ಯಾಯಯುತವಾಗಿ ರಾಜ್ಯಕ್ಕೆ ಬರಬೇಕಾದ ನೀರನ್ನು ಪಡೆಯಲು ಸರ್ಕಾರ ಪ್ರಯತ್ನಿಸಿದೆ ಎಂದು ಡಿ ಕೆ ಶಿವಕುಮಾರ್ ಅವರು ಹೇಳಿದರು.












Click it and Unblock the Notifications