ಸಿದ್ದರಾಮಯ್ಯ ಮುಂದಿನ ಚುನಾವಣೆವರೆಗೂ ಸಿಎಂ ಆಗಿ ಮುಂದುವರಿಯುತ್ತಾರಾ? : ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ಫೆಬ್ರವರಿ 27: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಡಿ ಕೆ ಶಿವಕುಮಾರ್ ಬಣದಲ್ಲಿ ಚರ್ಚೆಯಾಗುತ್ತಿದೆ. ಅಧಿಕಾರ ಹಂಚಿಕೆಯಿಂದಾಗಿ ಮುಖ್ಯಮಂತ್ರಿ ಸ್ಥಾನವನ್ನ ಸಿದ್ದರಾಮಯ್ಯ ಅವರು ಬಿಟ್ಟುಕೊಡಬೇಕು ಎಂದು ಪರೋಕ್ಷವಾಗಿ ಡಿ ಕೆ ಬಣ ಒತ್ತಾಯಿಸಿದೆ. ಈ ನಡುವೆ ನನ್ನ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯುತ್ತದೆ ಎಂದು ಡಿ ಕೆ ಶಿವಕುಮಾರ್ ಅವರ ಹೇಳಿಕೆ ಕೈ ಪಾಳಯದಲ್ಲಿ ಹಲವು ಅನುಮಾನಗಳು ಹುಟ್ಟುವಂತೆ ಮಾಡಿದೆ. ಇನ್ನೂ ಮುಂದಿನ ಚುನಾವಣೆವರೆಗೂ ಸಿದ್ದರಾಮಯ್ಯ ಅವು ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರಾ ಎನ್ನುವ ಪ್ರಶ್ನೆಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ನಮ್ಮ ಪಕ್ಷ ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದೆ. ನಾನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷನಾಗಿದ್ದು, ನಾನು ಪಕ್ಷದ ತೀರ್ಮಾನವನ್ನು ಗೌರವಿಸುತ್ತೇವೆ ಎಂದು ತಿಳಿಸಿದರು.

ನಾನು ಯಾರಿಗೂ ಮಾತನಾಡುವುದಿಲ್ಲ. ನನಗೆ ಕೆಲಸ ಮಾಡಬೇಕಿದ್ದು, ಗಾಂಧಿ ನಗರದಲ್ಲಿರುವ ಕಾಂಗ್ರೆಸ್ ಕಟ್ಟಡ ನೆಲಸಮ ಮಾಡಿದ್ದು, ಅಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ ಸಿದ್ಧವಾಗಿದೆ. ಇದರ ಜತೆಗೆ ನೂರು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಎಲ್ಲಾ ಕ್ಷೇತ್ರಗಳಲ್ಲಿ ತಯಾರಿ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಹೆಸರಲ್ಲಿ ಜಮೀನು ಇದ್ದರೆ ಮಾತ್ರ ಅಲ್ಲಿ ಪಕ್ಷದ ಕಚೇರಿಗೆ ಶಂಕುಸ್ಥಾಪನೆ ಮಾಡಲಾಗುವುದು. ಬೇರೆಯವರ ಹೆಸರಿನಲ್ಲಿದ್ದರೆ ಸಾಧ್ಯವಿಲ್ಲ. ಬೆಂಗಳೂರಿನಲ್ಲಿ ಶಿವಾಜಿನಗರ, ಯಶವಂತಪುರ ಸೇರಿದಂತೆ ಮೂರು ಕಡೆ ಶಂಕುಸ್ಥಾಪನೆ ನೆರವೇರಲಿದೆ. ರಾಮನಗರದ ಕಚೇರಿಗೆ ನಾನು ನನ್ನ ಸ್ವಂತ ಹಣದಲ್ಲಿ ಖರೀದಿ ಮಾಡಿ ಪಕ್ಷದ ಹೆಸರಿನಲ್ಲಿ ನೋಂದಣಿ ಮಾಡಲಾಗುವುದು. ಅಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆ ಎಂಬ ಪರಮೇಶ್ವರ್ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಾನು ಶಕ್ತಿ ಯೋಜನೆ ಬಗ್ಗೆ ಮಾತನಾಡಿದಾಗ ಮಾಧ್ಯಮಗಳು ಅದನ್ನು ಬೇರೆ ರೀತಿ ಬಿಂಬಿಸಿದವು. ಪರಮೇಶ್ವರ್ ಅವರು ನೇತೃತ್ವದ ಪ್ರಣಾಳಿಕೆ ಸಮಿತಿ ಸಲಹೆ ಮೇರೆಗೆ ಪಕ್ಷ ಪ್ರಣಾಳಿಕೆ ತಯಾರಿಸಿದೆ. ಅವರು ಏನು ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ. ಈ ವಿಚಾರವಾಗಿ ಚರ್ಚೆ ಮಾಡಿ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದರು.
ನಿಗಮ ಮಂಡಳಿ ನೇಮಕದಲ್ಲಿ ಪಟ್ಟಿ ಬಿಡುಗಡೆಯಾಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಪಟ್ಟಿ ತರಿಸಿಕೊಂಡಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದ್ಯತೆ ನೀಡಬೇಕು ಎಂಬ ಉದ್ದೇಶ ನನ್ನದು. ಬ್ಲಾಕ್ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರುಗಳಿಗೆ ಸ್ಥಾನಮಾನ ನೀಡಬೇಕು ಎಂದು ಎಲ್ಲಾ ಶಾಸಕರಿಗೆ ಹೇಳಿದ್ದೇನೆ. ಮುಖ್ಯಮಂತ್ರಿಗಳು ಬಜೆಟ್ ತಯಾರಿಯಲ್ಲಿ ನಿರತರಾಗಿದ್ದು, ನನ್ನ ಹಾಗೂ ಸಣ್ಣ ನೀರಾವರಿ ಇಲಾಖೆ ಜತೆ ಸಭೆ ಮಾತ್ರ ಬಾಕಿ ಇದೆ. ನಮ್ಮ ಅಧಿಕಾರಿಗಳು ದೆಹಲಿಯಲ್ಲಿದ್ದ ಕಾರಣ ಸಭೆ ಮಾಡಲು ಆಗಿರಲಿಲ್ಲ ಎಂದು ತಿಳಿಸಿದರು.
ವಿಧಾನಸಭೆ ಚುನಾವಣೆ ಟಿಕೆಟ್ ತೆಗೆದುಕೊಂಡಿರುವವರ ಹೊರತಾಗಿ ಬೇರೆವರಿಗೆ ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕು ಎಂಬ ರಾಜಣ್ಣ ಅವರ ಬೇಡಿಕೆ ಬಗ್ಗೆ ಕೇಳಿದಾಗ, "ಅವರು ನನ್ನ ಬಳಿ ಮಾತನಾಡಿಲ್ಲ. ಮಾಧ್ಯಮಗಳ ಮುಂದೆ ಮಾತನಾಡಿರುವ ವಿಚಾರದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಬಳಿ ಚರ್ಚೆ ಮಾಡಿದರೆ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದರು.
ಪದಾಧಿಕಾರಿಗಳ ಪಟ್ಟಿಯಲ್ಲಿ ಕೆಲಸ ಮಾಡುವವರಿಗೆ ಆದ್ಯತೆ ನೀಡಲಾಗುವುದು ಎಂಬ ಹೇಳಿಕೆ ಕುರಿತು ಮಾತನಾಡಿ, ನಮ್ಮ ಪಕ್ಷದಲ್ಲಿ ಮೂರು ಹಂತಗಳಿವೆ. ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು. ಕಾರ್ಯದರ್ಶಿಗಳ ಪಟ್ಟಿಯನ್ನು ನೀಡಿದ್ದೆ ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಹೀಗಾಗಿ ಅವರನ್ನು ಕರೆದು ಚರ್ಚೆ ಮಾಡಿದ್ದೆ. ಈಗ ಸಚಿವರ ಜತೆ ಚರ್ಚೆ ಮಾಡಿದ್ದು, ಅವರ ಜಿಲ್ಲೆಯಲ್ಲಿ ಪಕ್ಷಕ್ಕೆ ಸಮಯ ಕೊಟ್ಟು ದುಡಿಯುವವರಿದ್ದರೆ ಹೆಸರು ನೀಡಿ ಎಂದು ಹೇಳಿದ್ದೇನೆ. ನನ್ನ ಹಿಂದೆ ತಿರುಗುವವರಿಗೆ ಹುದ್ದೆ ನೀಡುವುದಲ್ಲ. ನಾವು ನೇಮಕ ಮಾಡಿದರೆ ಮುಂದಿನ ಮೂರು ವರ್ಷ ಕೆಲಸ ಮಾಡಬೇಕು. ಅಂತಹವರ ಹೆಸರು ನೀಡಿ ಎಂದು ಕೇಳಿದ್ದೇನೆ ಎಂದರು.












Click it and Unblock the Notifications