ಜನವರಿ 22 ರಂದು ಸರ್ಕಾರಿ ರಜೆ ಕೇಳಿದವರಿಗೆ ಡಿ ಕೆ ಶಿವಕುಮಾರ್ ಹೇಳಿದ್ದಿಷ್ಟು
ಬೆಂಗಳೂರು, ಜನವರಿ 21: ನಾವು ಪೂಜೆ, ಪುನಸ್ಕಾರ ಮಾಡಿಕೊಂಡು ನಮ್ಮ ಸಂಸ್ಕೃತಿ ಪಾಲನೆ ಮಾಡಿಕೊಂಡು ಬಂದಿದ್ದೇವೆ. ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಈ ಕುರಿತು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಭಕ್ತಿ, ಧರ್ಮ, ಗೌರವವನ್ನು ನಾವು ಪ್ರಚಾರಕ್ಕೆ ಬಳಸುವುದಿಲ್ಲ. ಪ್ರಾರ್ಥನೆಗಳಿಂದ ಫಲ ಸಿಗುತ್ತದೆ ಎಂಬುದು ನಮ್ಮ ನಂಬಿಕೆ. ಹೀಗಾಗಿ ಪ್ರಾರ್ಥನೆ ಮಾಡಿಕೊಳ್ಳಲು ಹೇಳಿದ್ದೇವೆ.

ಬೇರೆಯವರು ಹೇಳುವ ಮುನ್ನವೇ ನಮ್ಮ ಸರ್ಕಾರ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸೂಚನೆ ನೀಡಿದೆ. ದೇವಾಲಯಗಳಲ್ಲಿ ಯಾವ ಪೂಜೆ, ಪುನಸ್ಕಾರ ಮಾಡಬೇಕೋ ಅದನ್ನು ಮಾಡಲಾಗುವುದು. ಬೇರೆಯವರಿಂದ ನಾವು ಹೇಳಿಸಿಕೊಳ್ಳುವ ಪ್ರಮೇಯವೇ ಇಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದ್ದಾನೆ, ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ಧರ್ಮ, ಸಂಸ್ಕೃತಿ ಪಾಲನೆ ವಿಚಾರವಾಗಿ ನಮಗೆ ಯಾರೂ ಹೇಳಿಕೊಡುವುದೂ ಬೇಡ, ಒತ್ತಡ ಹಾಕುವುದೂ ಬೇಡ. ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಮಾಡಬಾರದು ಎಂದು ತಿಳಿಸಿದರು.
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರ: ಸಿದ್ದರಾಮಯ್ಯ
ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು.
ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ.
ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ.
ದೇವರು - ಧರ್ಮ - ಪೂಜೆ - ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು - ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ.












Click it and Unblock the Notifications