ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ? : ಡಿ ಕೆ ಶಿವಕುಮಾರ್ ರಿಯಾಕ್ಷನ್
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಪ್ರಧಾನಿಯಾಗಿ ಮಾಡೇ ಮಾಡ್ತೀವಿ, ಇಂದಿರಾಗಾಂಧಿಯಂತೆ ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಎಂಬುದನ್ನು ನೋಡ್ತಾ ಇರಿ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಹೇಳಿದ್ದಾರೆ. ಇನ್ನೂ ಪ್ರಿಯಾಂಕಾ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂಬ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ರಾಜಕೀಯವಾಗಿ ಉಜ್ವಲ ಭವಿಷ್ಯವಿದ್ದು, ಆಕೆ ಪ್ರಧಾನಮಂತ್ರಿಯಾಗಬೇಕು ಎಂಬ ಚರ್ಚೆ ಕುರಿತು ಮಾಧ್ಯಮಗಳ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ನನಗೆ ಈ ವಿಚಾರಗಳ ಬಗ್ಗೆ ಮಾಹಿತಿ ಇಲ್ಲ. ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ನಮ್ಮ ಪಕ್ಷವನ್ನು ಮುನ್ನಡೆಸುತ್ತಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಪಾಲಿಸುತ್ತೇವೆ.

ಪಕ್ಷದಲ್ಲಿ ಇಂತಹ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಪಕ್ಷದಲ್ಲಿ ಶಿಸ್ತು ಮುಖ್ಯವಾಗಿರಬೇಕು. ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿ ಇಡೀ ದೇಶಕ್ಕೆ ಶಕ್ತಿ ತುಂಬಿದ್ದಾರೆ. ಪಕ್ಷ ಸಂಕಷ್ಟದ ಪರಿಸ್ಥಿತಿಯಲ್ಲಿ ನಾಯಕತ್ವ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿ ಮಾಡಬೇಕು ಎಂಬುದು ಪ್ರಿಯಾಂಕಾ ಗಾಂಧಿ ಅವರ ಗುರಿಯಾಗಿದೆ. ಅದಕ್ಕೆ ಅವರು ಶ್ರಮಿಸುತ್ತಿದ್ದಾರೆ ಎಂದು ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಅಧಿಕಾರ, ಹುದ್ದೆಗಿಂತ ಪಕ್ಷದ ಕಾರ್ಯಕರ್ತನಾಗಿರಲು ನಾನು ಬಯಸುತ್ತೇನೆ. ನನಗೆ ಅದೇ ಶಾಶ್ವತ. 1980ರಿಂದ ನಾನು ಪಕ್ಷದ ಕಾರ್ಯಕರ್ತನಾಗಿದ್ದು, 45 ವರ್ಷಗಳಿಂದ ಇಲ್ಲಿಯವರೆಗೂ ಪಕ್ಷಕ್ಕಾಗಿ ದುಡಿಯುತ್ತಿರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಒಪ್ಪಂದ ನಡೆದಿತ್ತೇ ಎಂಬ ಬಗ್ಗೆ ಮಾತನಾಡಿ, ನಮ್ಮ ನಡುವೆ ಏನೆಲ್ಲಾ ಚರ್ಚೆಯಾಗಿತ್ತು ಎಂದು ನಾನು ಬಹಿರಂಗಪಡಿಸಲು ಸಾಧ್ಯವಿಲ್ಲ. ನಾವು ಒಟ್ಟಾಗಿ ಸೇರಿ ಕೆಲಸ ಮಾಡಿ, ಸರ್ಕಾರವನ್ನು ರಚಿಸಿದ್ದೇವೆ. ಪ್ರತಿ ಕಾರ್ಯಕರ್ತರು ಪಕ್ಷಕ್ಕಾಗಿ ತಮ್ಮ ಬೇವರು ಹರಿಸಿ ದುಡಿದಿದ್ದಾರೆ.
ನಮಗೆ ಸ್ಪಷ್ಟ ಬಹುಮತ ನೀಡಿದ ರಾಜ್ಯದ ಜನರಿಗೆ ನಾವು ಚಿರಋಣಿಯಾಗಿರುತ್ತೇವೆ. ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದ್ದು, ಇದನ್ನು ಮುಂದುವರಿಸುತ್ತೇವೆ. ಹೈಕಮಾಂಡ್ ಕೂಡ ನಮಗೆ ಸ್ವಾತಂತ್ರ್ಯ ನೀಡಿದ್ದು, ನಮ್ಮ ಸರ್ಕಾರ ಒಂದು ತಂಡವಾಗಿ ಕೆಲಸ ಮಾಡುತ್ತಿದೆ. ಇಲ್ಲಿ ಕೇವಲ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮಾತ್ರವಲ್ಲ. ಎಲ್ಲಾ ಶಾಸಕರು, ಕಾರ್ಯಕರ್ತರು ಅನೇಕ ತ್ಯಾಗ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ತಿಳಿಸಿದರು.
ಸಂಕ್ರಾಂತಿ ವೇಳೆಗೆ ರಾಜ್ಯ ಸರ್ಕಾರದಲ್ಲಿ ಬದಲಾವಣೆಯಾಗಲಿದೆ ಎಂಬ ಚರ್ಚೆ ನಡೆಯುತ್ತಿದೆ ಎಂದು ಕೇಳಿದಾಗ, ಕೇವಲ ಮಾಧ್ಯಮಗಳಲ್ಲಿ ಮಾತ್ರ ಈ ಚರ್ಚೆ ಇದೆ. ಅದರ ಹೊರತಾಗಿ ಪಕ್ಷ ಅಥವಾ ಸರ್ಕಾರದಲ್ಲಿ ಯಾವುದೇ ಚರ್ಚೆ ಇಲ್ಲ ಎಂದು ತಿಳಿಸಿದರು. ಮಹಿಳೆ ಮೇಲಿನ ಹಲ್ಲೆ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪದ ಕುರಿತು ಮಾತನಾಡಿ, ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಇಂತಹ ಪ್ರಕರಣಗಳ ಪಟ್ಟಿ ನೀಡಲೇ? ಕರ್ನಾಟಕ ದೇಶದಲ್ಲೇ ಅತ್ಯಂತ ಸುರಕ್ಷಿತ ರಾಜ್ಯ. ಈ ರಾಜ್ಯದಲ್ಲಿ ದಕ್ಷ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆ ಇದೆ ಎಂದು ತಿಳಿಸಿದರು.












Click it and Unblock the Notifications