ಹೈಕಮಾಂಡ್ ಒಪ್ಪಿದರೇ ನಾನೇ 5 ವರ್ಷ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ: ಡಿ ಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್
ಬೆಂಗಳೂರು, ಅಕ್ಟೋಬರ್ 28: ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂವರ್‌ಗೆ ಕ್ರಾಂತಿಯಾಗಲಿದೆ ಎನ್ನುವ ಚರ್ಚೆ ಶುರುವಾಗಿದ್ದು, ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆ ಕುರಿತು ಗುಸುಗುಸು ಖೆಲಿ ಬರುತ್ತಿದೆ. ಈ ನಡುವೆ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಈ ವಿಚಾರದಲ್ಲಿ ಹೈ ಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಸದ್ಯ ಕೈ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಇನ್ನೂ ಈ ವೇಳೆ ದೆಹಲಿ ಭೇಟಿ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ. ನಾನು ತಿಹಾರ್ ಜೈಲಿನಲ್ಲಿದ್ದಾಗ ಅವರು ಸೋನಿಯಗಾಂಧಿ ಅವರ ಜೊತೆ ಬಂದು ನನ್ನನ್ನು ಭೇಟಿ ಮಾಡಿದ್ದರು. ನನಗೂ ಅವರಿಗೂ ಬಹಳ ಆತ್ಮೀಯತೆ. ನಮ್ಮ ಪಕ್ಷದ ನಾಯಕರು ಅವರು. ಎಸ್.ಎಂ.ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ನಮಗೆ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನನ್ನನ್ನು ತಮ್ಮನಂತೆ ಕಂಡಿದ್ದರು, ನನ್ನ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಹಾಗಾಗಿ ನಾನು ಅವರ ಮನೆಗೆ ಭೇಟಿ ನೀಡಿದ್ದೆ ಎಂದು ತಿಳಿಸಿದರು.
ನೀವು ಹೈಕಮಾಂಡ್ ಭೇಟಿಗೆ ದಿಲ್ಲಿಗೆ ಹೋಗಿದ್ದಿರಿ ಎಂದು ಚರ್ಚೆಯಾಗುತ್ತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ದಿಲ್ಲಿಗೆ ಹೋಗಿದ್ದ ವಿಷಯ, ಕೆಲಸದ ಬಗ್ಗೆ ಮಾತ್ರ ಹೇಳಬಲ್ಲೆ. ಹೈಕಮಾಂಡ್ ಭೇಟಿ ಬಗ್ಗೆ ನೀವು ಮಾಧ್ಯಮದವರು, ಸಾರ್ವಜನಿಕರು, ಇನ್ನೂ ಬೇರೆಯವರು ಏನು ಬೇಕಾದರೂ ಚರ್ಚೆ ಮಾಡಿಕೊಳ್ಳಿ. ಯಾರು ಬೇಕಾದರೂ ಮಾತಾಡಿಕೊಳ್ಳಲಿ. ನನಗದು ಸಂಬಂಧ ಪಡದ ವಿಷಯ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.












Click it and Unblock the Notifications