ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮೀಕ್ಷೆ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ನವೆಂಬರ್ 03: ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮೀಕ್ಷೆ ನಡೆಯುತ್ತಿದ್ದು, ಈಗಾಗಲೇ ಮಂತ್ರಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿದ್ದೇವೆ. ಅವರು ನಮಗೆ ವರದಿ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶೆ.75ರಷ್ಟು ಮಂದಿ ನಮ್ಮ ಕಾರ್ಯಕರ್ತರು, ಶಾಸಕರು, ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದೆಹಲಿ ನಾಯಕರು ನಮಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಕೆಲವು ಮಾನದಂಡ ನಿಗದಿ ಮಾಡಿದ್ದೇವೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಇರುವ ಅಸಮಾಧಾನ ಹೇಗೆ ಪರಿಹರಿಸಿಕೊಳ್ಳುತ್ತೀರಿ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ? ಬಿಜೆಪಿಯಲ್ಲಿ ಅಸಮಾಧಾನ ಇದ್ದು, ಅದರಿಂದ ಅವರ ನಾಯಕರ ಆಯ್ಕೆ ಮಾಡಲು ಆಗುತ್ತಿಲ್ಲ. ಈ ಬಗ್ಗೆ ನೀವು ಪ್ರಶ್ನೆ ಮಾಡುತ್ತಿಲ್ಲ. ಸರ್ಕಾರ ರಚನೆ ಆಗಿ ಐದಾರು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ಆಗದ ಇತಿಹಾಸವನ್ನು ರಾಜ್ಯ ಅಥವಾ ದೇಶದಲ್ಲಿ ನೋಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಬರ ಅಧ್ಯಯನ ಪ್ರವಾಸದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಅವರು ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿ. ನಮ್ಮ ಸಚಿವರಾದ ಚೆಲುವರಾಯ ಸ್ವಾಮಿ ಹಾಗೂ ಕೃಷ್ಣಭೈರೇಗೌಡ ಅವರು ಅಧ್ಯಯನ ಮಾಡಿ ಸುಮಾರು 200 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಅವರು ಸುಮ್ಮನೆ ಘೋಷಣೆ ಮಾಡಿದ್ದಾರಾ? ಮಂಡ್ಯ, ಹಾವೇರಿ ಹಾಗೂ ಇತರ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಯುತ್ತಿದೆ ಎಂದು ತಿಳಿಸಿದರು.
ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಹೋಗಿದೆ ನಂತರ ಏನಾಯ್ತು ಎಂದು ಕೇಳಿದಾಗ, ನಾವು ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ್ದೇವೆ. ನಾವು ಸಾವಿರ ಕೋಟಿಯಷ್ಟು ಹಣವನ್ನು ಮೀಸಲು ಇಟ್ಟಿದ್ದೇವೆ ಎಂದು ತಿಳಿಸಿದರು. ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿವೆ. ರಾಜ್ಯದ ಜನ ಹಾಗೂ ಸರ್ಕಾರಕ್ಕೆ ಈ ಸುವರ್ಣ ಹಬ್ಬ ಆಚರಿಸಲು ಒಂದು ಅವಕಾಶ ಇದೆ. ಇಡೀ ವರ್ಷ ಸಂಭ್ರಮಾಚರಣೆಗೆ ಸರ್ಕಾರ ತೀರ್ಮಾನ ಮಾಡಿದೆ.
ಕನ್ನಡ ಜ್ಯೋತಿಗೆ ನಿನ್ನೆ ಚಾಲನೆ ನೀಡಲಾಗಿದೆ. ಅದರ ಮುಂದುವರಿದ ಭಾಗವಾಗಿ ಗದಗದಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈ ಸುವರ್ಣ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ಭುವನೇಶ್ವರಿ ಭವನ ನಿರ್ಮಾಣ ಘೋಷಣೆ ಮಾಡಿದ್ದಾರೆ ಎಂದು ಹೇಳಿದರು.












Click it and Unblock the Notifications