ಡಿಕೆಶಿ ಮತ್ತು ಸಿದ್ದರಾಮಯ್ಯ ತಮಿಳುನಾಡು, ಡಿಎಂಕೆ ಪಕ್ಷದ ಏಜೆಂಟ್‌ಗಳು: ಬಿಜೆಪಿ ಪ್ರತಿಭಟನೆ
ಬೆಂಗಳೂರು, ಸೆಪ್ಟೆಂಬರ್ 27: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಬುಧವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ದ ಘೋಷಣೆ ಕೂಗಿದ ಬಿಜೆಪಿ ಮುಖಂಡರು ಅವರನ್ನು ತಮಿಳುನಾಡು ಹಾಗೂ ಡಿಎಂಕೆ ಪಕ್ಷದ ಏಜೆಂಟ್ ಎಂದು ಟೀಕಿಸಿದರು.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ತಮಿಳುನಾಡು ಹಾಗೂ ಡಿಎಂಕೆ ಸರ್ಕಾರದ ಏಜೆಂಟ್‌ರಂತೆ ವರ್ತಿಸಬಾರದು. ರಾಜ್ಯದ ವಾಸ್ತವ ಸಂಗತಿಯನ್ನು ಅರಿತುಕೊಳ್ಳಬೇಕು. ನಮ್ಮ ಬಹುತೇಕ ಜಲಾಶಯಗಳಲ್ಲಿ ನೀರು ಬರಿದಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯ ಮತ್ತು ನೀರಾವರಿ ಸಚಿವ ಡಿಕೆ ಶಿವಕುಮಾರ್ ತಮಿಳುನಾಡು ಏಜೆಂಟರಂತೆ ವರ್ತಿಸುತ್ತಿರುವುದರಿಂದ ಕರ್ನಾಟಕ ಬಿಕ್ಕಟ್ಟು ಎದುರಿಸುತ್ತಿದೆ. ನಮಗೆ ನೀರು ಸಾಲುತ್ತಿಲ್ಲ. ಎಲ್ಲದಕ್ಕೂ ಪ್ರಧಾನಿ ಮೋದಿ ಮಧ್ಯಪ್ರವೇಶಿಸಲು ಆಗುವುದಿಲ್ಲ. ಸದ್ಯ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದು, ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಬೆಂಗಳೂರು ದಕ್ಷಿಣದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ಕರ್ನಾಟಕ ನಿಲ್ಲಿಸಬೇಕು. ಕಾವೇರಿ ನೀರು ನಿಯಂತ್ರಣ ಸಮಿತಿಗೆ ಸರಿಯಾದ ವಿವರಗಳನ್ನು ನೀಡುವಲ್ಲಿ ಕರ್ನಾಟಕ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ೀಗ ಕೇಂದ್ರ ಸರ್ಕಾರದ ಕಡೆಗೆ ಬೆರಳು ತೊರಿಸುವುದು ಕೆಲಸ ಮಾಡುವುದಿಲ್ಲ, ಕೇಂದ್ರ ಸರ್ಕಾರ ಅದರ ಕೆಲಸ ಮಾಡುತ್ತಿದೆ. ಈಗ ಜವಾಬ್ದಾರಿ ಸುಪ್ರೀಂ ಕೋರ್ಟಿನ ಮೇಲಿದೆ ಎಂದು ಹೇಳಿದರು.
ಬಿಎಸ್ ಯಡಿಯೂರಪ್ಪ ಅವರ ಮಗ, ಶಾಸಕರೂ ಆದ ಬಿವೈ ವಿಜಯೇಂದ್ರ ಯಡಿಯೂರಪ್ಪ ಅವರು ಮಾತನಾಡಿ, ಈಗಿನ ಕಾಂಗ್ರೆಸ್ ಸರ್ಕಾರ ಕಾವೇರಿ ವಿಚಾರವನ್ನು ಗಂಭೀರವಾಗಿ ಪರಿಗಣನೆ ಮಾಡಿಲ್ಲ. ರೈತರು ಅಕ್ಷರಶಃ ಬೀದಿ ಪಾಲಾಗಿದ್ದಾರೆ. ಆದರೂ ದಿನಲೂ ಕಾವೇರಿ ನೀರು ತಮಿಳುನಾಡಿಗೆ ಹರಿಯುತ್ತಿದೆ. ಸರ್ಕಾರ ತನ್ನ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಹಿಂದೆ ಬಿದ್ದಿದೆ. ಈ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಇಲ್ಲಿ ಬರುವುದಿಲ್ಲ ಎಂದು ಹೇಳಿದರು.
ಬಿಜೆಪಿ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರು ರಾಜ್ಯ ಸರ್ಕಾರವು ಕಾವೇರಿ ವಿಚಾರವನ್ನು ನಿಭಾಯಿಸುವಲ್ಲಿ ಸಮರ್ಥವಾಗಿದೆ. ಸರ್ಕಾರಕ್ಕೆ ತನ್ನದೆ ಆದ ಜವಾಬ್ದಾರಿಗಳಿವೆ, ಕಾವೇರಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಲಿ, ಸರ್ಕಾರ ನಮ್ಮ ರೈತರ ಹಿತಾಸಕ್ತಿ ಕಾಪಾಡಲು ಬದ್ದವಾಗಿದೆ ಎಂದು ತಿಳಿಸಿದರು.
ಕಾವೇರಿ ನೀರು ನಿಯಂತ್ರಣ ಸಮಿತಿ ಪ್ರತಿದಿನ 3,000 ಕ್ಯೂಸೆಕ್ಸ್ ಹರಿಸುವಂತೆ ಸೂಚಿಸಿದೆ. ಈ ಬಗ್ಗೆ ನಮ್ಮ ಕಾನೂನು ತಜ್ಞರೊಂದಿಗೆ ಈಗಾಗಲೇ ಸಮಾಲೋಚನೆ ಮಾಡಿದ್ದೇವೆ. ಬಳಿಕ ಅವರು ಸಿಡಬ್ಲ್ಯುಆರ್‌ಸಿ ಆದೇಶವನ್ನು ಮತ್ತೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ತಮಿಳುನಾಡಿಗೆ ನೀರು ಬಿಡಲು ನೀರಿಲ್ಲ. ಈ ಆದೇಶವನ್ನು ನಾವು ಸುಪ್ರಿಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.












Click it and Unblock the Notifications