DKS VS HDK: ಕುಮಾರಸ್ವಾಮಿ ಮರ್ಯಾದೆಯಾಗಿ ಇದ್ದರೆ ಕ್ಷೇಮ : ಡಿ ಕೆ ಶಿವಕುಮಾರ್ ವಾರ್ನಿಂಗ್ ಕೊಟ್ಟಿದ್ಯಾಕೆ?
ಬೆಂಗಳೂರು, ಮಾರ್ಚ್ 20: ನನ್ನ ವಿರುದ್ಧ ಮೈಸೂರಿನಲ್ಲಿ ಅವರು (ಕುಮಾರಸ್ವಾಮಿ) ಏನೆಲ್ಲಾ ಮಾತನಾಡಿದರು, ಅವರ ತಂದೆ ನನ್ನ ವಿರುದ್ಧ ಏನೆಲ್ಲಾ ಮಾತನಾಡಿದ್ದಾರೆ. ನನ್ನ ಮೇಲೆ, ನನ್ನ ಪತ್ನಿ, ನನ್ನ ತಂಗಿ ಹಾಗೂ ಸಹೋದರನ ಮೇಲೆ ಏನೆಲ್ಲಾ ಕೇಸ್ ಹಾಕಿದ್ದರು. ನನಗೂ ಬಳ್ಳಾರಿಗೂ ಸಂಬಂಧವಿಲ್ಲ ಆದರೂ ಅದಿರು ಕಳ್ಳತನ ಮಾಡಿದ್ದೇನೆ ಎಂದು ಆರೋಪ ಮಾಡಿರಲಿಲ್ಲವೇ. ನನ್ನ ಮೇಲೆ ತನಿಖೆ ಮಾಡಿಸಿಲ್ಲವೇ? ಅವರ ಜತೆ ಸರ್ಕಾರ ಮಾಡಿದ್ದೇವೆ ಎಂದು ನಾವು ಸುಮ್ಮನೆ ಇದ್ದೇವೆ. ಅವರು ಮರ್ಯಾದೆಯಾಗಿ ಇದ್ದರೆ ಕ್ಷೇಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹರಿಹಾಯ್ದರು.
ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಮನಗರ ಜಿಲ್ಲೆ ಮರುನಾಮಕರಣ ಮಾಡಬಾರದು ಎಂದು ಕೇಂದ್ರಕ್ಕೆ ಒತ್ತಡ ಹಾಕಿದ್ದಾರೆ. ನಮಗೂ ಕಾನೂನು ಗೊತ್ತಿದೆ. ಸಂವಿಧಾನದಲ್ಲಿ ನಾವು ಯಾರನ್ನೂ ಕೇಳುವ ಅಗತ್ಯವಿಲ್ಲ. ನಾವು ಮಾಹಿತಿ ನೀಡಬೇಕು ಎಂದು ಹೇಳಿ ಪ್ರಸ್ತಾವನೆ ಕಳುಹಿಸಿದ್ದೇವೆ. ದೆಹಲಿಯಲ್ಲಿರುವ ಕೆಲ ಮಂತ್ರಿಗಳು ಈ ವಿಚಾರದಲ್ಲಿ ಷಡ್ಯಂತ್ರ ನಡೆಸಿದ್ದಾರೆ. ನಾವು ಅದಕ್ಕೆಲ್ಲ ಜಗ್ಗುವುದಿಲ್ಲ. ಜಿಲ್ಲೆ ಮರುನಾಮಕರಣ ಮಾಡುವುದು ಹೇಗೆ, ಜಿಲ್ಲೆಯನ್ನು ಹೇಗೆ ಬದಲಾಯಿಸಬೇಕು ಎಂದು ಗೊತ್ತಿದೆ, ನಾವು ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮಾಡುತ್ತೇವೆ ಎಂದು ತಿಳಿಸಿದರು.

ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಈ ಮರುನಾಮಕರಣ ಮಾಡಲಾಗುತ್ತಿದೆ ಎಂಬ ಟೀಕೆ ಬಗ್ಗೆ ಕೇಳಿದಾಗ, "ಹೌದೌದು, ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಮಾಡುತ್ತಿದ್ದೇವೆ. ನಮ್ಮ ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಜನರಿಗೆ ಅನುಕೂಲ ಆಗಬಾರದೆ? ನೀವು ಅಲ್ಲಿಂದ ಇಲ್ಲಿಗೆ ಯಾಕೆ ಬಂದಿರಿ? ನಮ್ಮ ಜನ ಬೆಂಗಳೂರು ಜಿಲ್ಲೆಯವರು. ಅವರು ಬದುಕಬೇಕು. ನಮ್ಮ ಜಿಲ್ಲೆಯ ಜನರ ಆಸ್ತಿ ಹೋಗಿದೆ. ಅವರಿಗೆ ಒಳ್ಳೆಯದಾಗಲಿ ಎಂಬ ಆಸೆ ನಮ್ಮದು. ಅದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.
ಕೇಂದ್ರ ಜಲ ಸಚಿವರ ಭೇಟಿ ಬಗ್ಗೆ ಮಾಹಿತಿ ನೀಡಿದ ಶಿವಕುಮಾರ್ ಅವರು, "ಪೆನ್ನಾರ್ ನದಿ ನೀರಿನ ವಿಚಾರವಾಗಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರವು ಕರ್ನಾಟಕ ಹಾಗೂ ತಮಿಳುನಾಡು ನಡುವೆ ಸಂಧಾನ ಸೂತ್ರ ಸಭೆ ನಡೆಸಲು 2-3 ದಿನಾಂಕ ನೀಡಿತ್ತು. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ನಾವು ದಿನಾಂಕ ಮರುನಿಗದಿಗೆ ಮನವಿ ಮಾಡಿದ್ದೆ. ಈಗ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ವರದಿ ನೀಡಬೇಕಿರುವ ಕಾರಣ ಮಾ. 18ರಂದು ಸಭೆ ಮಾಡಲು ಆಹ್ವಾನ ನೀಡಿದ್ದರು. ಕೊನೆ ಗಳಿಗೆಯಲ್ಲಿ ನಾವು ಪ್ರತ್ಯೇಕವಾಗಿ ನಮ್ಮ ಪ್ರಸ್ತಾವನೆ ಮುಂದಿಡುತ್ತೇವೆ.
ಕರ್ನಾಟಕದ ಮುಂದೆ ಕೂತು ಚರ್ಚೆ ಮಾಡುವುದಿಲ್ಲ ಎಂದು ಹೇಳಿತು ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಸಭೆಯನ್ನು ಮುಂದೂಡಿದ್ದೇವೆ ಎಂದು ಸಚಿವರು ಕರೆ ಮಾಡಿ ಅಧಿಕೃತವಾಗಿ ತಿಳಿಸಿದ್ದಾರೆ. ತಮಿಳುನಾಡಿನ ಜೊತೆ ಪ್ರತ್ಯೇಕವಾಗಿ ಕೇಂದ್ರ ಸಚಿವರು ಮಾತನಾಡಲಿದ್ದಾರೆ. ಅವರು ತಮ್ಮ ರಾಜಕೀಯ ಉದ್ದೇಶದಿಂದ ಈ ನಿರ್ಧಾರಕ್ಕೆ ಬಂದಿರಬಹುದು. ನಾನು ಈ ಸಭೆಗೆ ಹೋಗುವ ಮುನ್ನ ಸಚಿವ ಸಂಪುಟದಲ್ಲಿ ಈ ವಿಚಾರವನ್ನು ಚರ್ಚೆ ಮಾಡಿ ಸರ್ಕಾರದ ನಿಲುವು ತಿಳಿಸಿದ್ದೆ" ಎಂದರು.

ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಕೇಳಿದಾಗ, ಮಹಾತ್ಮಾ ಗಾಂಧೀಜಿಯವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ನೂರು ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 100 ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಮುಂದಾಗಿದ್ದು, ಇದರ ಶಂಕುಸ್ಥಾಪನೆಗಾಗಿ ದಿನಾಂಕ ನೀಡುವಂತೆ ನಮ್ಮ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದೇನೆ. ರೇಸ್ ಕೋರ್ಸ್ ರಸ್ತೆಯಲ್ಲಿನ ಕಚೇರಿ ಸೇರಿದಂತೆ ಬೆಂಗಳೂರಿನಲ್ಲಿ ಒಟ್ಟು 3 ಕಡೆ ಶಂಕುಸ್ಥಾಪನೆ ನೆರವೇರಲಿದೆ. ಬೆಂಗಳೂರಿನ ಕಚೇರಿಗಳನ್ನು ಖುದ್ದಾಗಿ ಶಂಕುಸ್ಥಾಪನೆ ಮಾಡಲಾಗುವುದು, ಉಳಿದ ಕಡೆಗಳ ಕಚೇರಿಯನ್ನು ವರ್ಚುವಲ್ ಮೂಲಕ ಶಂಕುಸ್ಥಾಪನೆ ಮಾಡಲಾಗುವುದು. ಸಂಸತ್ ಅಧಿವೇಶನ ಮುಕ್ತಾಯದ ನಂತರ ದಿನಾಂಕ ನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.












Click it and Unblock the Notifications