DCM DK Shivakumar: ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಜುಲೈ 24: ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರದ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್ ನಲ್ಲಿ ಸರಿಯಾದ ಪ್ರಾತಿನಿದ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಬಗ್ಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ. ನಾನು ಯಾವುದನ್ನೂ ಆತುರದಲ್ಲಿ ಮಾಡುವುದಿಲ್ಲ. ನಾನು ವಿಧೇಯಕ ಮಂಡನೆ ಮಾಡಿದ್ದೇನೆ. ಅವರು ಅದನ್ನು ಸಂಪೂರ್ಣವಾಗಿ ಪರಾಮರ್ಶಿಸಿ ಚರ್ಚೆ ಮಾಡಲಿ. ಬೆಂಗಳೂರು ಅನಿಯಂತ್ರಿತವಾಗಿ ಬೆಳೆಯುತ್ತಿದ್ದು, 1.40 ಕೋಟಿ ಜನಸಂಖ್ಯೆ ಇದೆ. ಉತ್ತಮ ಆಡಳಿತದ ಅಗತ್ಯವಿದೆ. ಇಲ್ಲಿ 7 ಸಿಎಂಸಿಗಳಿವೆ. ಮೂಲಸೌಕರ್ಯ ಹಾಗೂ ಆರ್ಥಿಕ ವ್ಯವಸ್ಥೆ ನೋಡಿಕೊಂಡು ತೀರ್ಮಾನ ಮಾಡಬೇಕು. ಈ ಬಗ್ಗೆ ವಿರೋಧ ಪಕ್ಷಗಳು ಚರ್ಚೆ ಮಾಡಲಿ. ಅದಕ್ಕೆ ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದರು.
ನೀತಿ ಆಯೋಗ ಸಭೆ ಬಹಿಷ್ಕರಿಸಲು ಸಿದ್ದರಾಮಯ್ಯ ನಿರ್ಧಾರ
ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.
ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ.
ಇಂದು ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ. ಬಜೆಟ್ ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ.
ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್ ನಲ್ಲಿ ಇಲ್ಲ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ ಮಾಡಿದಂತಿದೆ.
ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ.
ಈ ಅನ್ಯಾಯವನ್ನು ಸಹಿಸಲಾಗದು. ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ.












Click it and Unblock the Notifications