ಚನ್ನಪಟ್ಟಣಕ್ಕೆ ಡಿ ಕೆ ಶಿವಕುಮಾರ್ ಅಳಿಯನೇ ಅಚ್ಚರಿ ಅಭ್ಯರ್ಥಿ?
ಬೆಂಗಳೂರು,ಅಕ್ಟೋಬರ್ 21: ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರ ವಿರುದ್ಧ ಹೀನಾಯವಾಗಿ ಸೋಲು ಅನುಭವಿಸಿದ್ದು, ಡಿ ಕೆ ಬ್ರದರ್ಸ್ ಗೆ ಚನ್ನಪಟ್ಟಣ ಉಪಚುನಾವಣೆ ಅಸ್ತಿತ್ವದ ಪ್ರಶ್ನೆಯಾಗಿದೆ.
ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯಲಿದ್ದು, ಚನ್ನಪಟ್ಟಣ ಕ್ಷೇತ್ರ ಆಡಳಿತ ಪಕ್ಷ ಕಾಂಗ್ರೆಸ್ ಗೆ ಹಾಗೂ ಮೈತ್ರಿ ನಾಯಕರಿಗೆ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಚನ್ನಪಟ್ಟಣ ಕ್ಷೇತ್ರವನ್ನ ಮರಳಿ ಪಡೆಯುವ ನಿಟ್ಟಿನಲ್ಲಿ ಹೆಡ್ ಡಿ ಕುಮಾರಸ್ವಾಮಿ ಪುತ್ರನನ್ನ ಕಣಕ್ಕಿಳಿಸಲು ಸಿದ್ದತೆ ನಡೆಸಿದ್ರೆ, ಇತ್ತ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ವಿಚಾರ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ತೀವ್ರ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಸಿಪಿ ಯೋಗೇಶ್ವರ್ ಬಿಜೆಪಿಯಿಂದ ಟಿಕೆಟ್‌ಗಾಗಿ ನಾನಾ ಕಸರತ್ತು ನಡೆಸುತ್ತಿದ್ದು, ಇತ್ತ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿಯಾಗಿ ಡಿ ಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಪತಿ ಅಮರ್ತ್ಯ ಹೆಗ್ಡೆ ಕಣಕ್ಕಿಳಿಯಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಕಳೆದ ಲೋಕಸಭಾ ಚುಣಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸೋಲು ಅನುಭವಿಸಿರುವ ಮಾಜಿ ಸಂಸದ ಹಾಗೂ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಅವರಿಗೆ ಚನ್ನಪಟ್ಟಣದಿಂದ ಕಣಕ್ಕಿಳಿಸುವ ಕುರಿತು ಕಾಂಗ್ರೆಸ್ ನ ಸ್ಥಳೀಯ ನಾಯಕರು ಒತ್ತಡ ಹಾಕುತ್ತಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ ಅಚ್ಚರಿ ಅಭ್ಯರ್ಥಿಯನ್ನ ಕಣಕ್ಕಿಳಿಸುತ್ತೇವೆ ಎಂದು ಡಿ ಕೆ ಶಿವಕುಮಾರ್ ಹಾಗೂ ಡಿ ಕೆ ಸುರೇಶ್ ಹೇಳಿಕೆಯನ್ನ ನೀಡಿದ್ರೆ, ಇದೀಗ ಅಳಿಯನನ್ನ ಕಣಕ್ಕಿಳಿಸಲು ಡಿ ಕೆ ಬ್ರದರ್ಸ್ ಮುಂದಾಗಿದ್ದಾರೆ ಎನ್ನಲಾಗಿದೆ.
ಚನ್ನಪಟ್ಟಣದಿಂದ ಶೇ 80 ರಷ್ಟು ಕಾರ್ಯಕರ್ತರು ಡಿ ಕೆ ಸುರೇಶ್ ಅವರ ಸ್ಪರ್ಧೆಗೆ ಬೇಡಿಕೆ ಇಟ್ಟಿದ್ದಾರೆ. ಹೈಕಮಾಂಡ್ ಯಾರನ್ನು ಕಣಕ್ಕಿಳಿಸುತ್ತಾರೆ ಅವರ ಪರವಾಗಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಸ್ಪಷ್ಟಪಡಿಸಿದ್ದೇನೆ. ಲೋಕಸಭೆ ಚುನಾವಣೆ ಸೋಲಿನ ಆಘಾತದಿಂದ ನಾವಿನ್ನೂ ಹೊರಗೆ ಬಂದಿಲ್ಲ. ಸುರೇಶ್ ಅಷ್ಟರ ಮಟ್ಟಿಗೆ ಕೆಲಸ ಮಾಡಿದ್ದಾರೆ. ಕಡಿಮೆ ಅಂತರದಲ್ಲಿ ಸೋತಿದ್ದರೆ ಒಂದು ಪಕ್ಷ ಸುಧಾರಿಸಿಕೊಳ್ಳಬಹುದಿತ್ತು. ಹೀಗಾಗಿ ನಾವು ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋತ ಮಾತ್ರಕ್ಕೆ ಜನರ ಸೇವೆಯನ್ನು ಬಿಡಲು ಆಗುವುದಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಜನ ನಿಮ್ಮ ನಿರೀಕ್ಷೆಗೂ ಮೀರಿ ಮತ ಹಾಕಿದ್ದಾರೆ. ಡಿ ಕೆ ಸುರೇಶ್ ಹಗಲಿರುಳು ಕೆಲಸ ಮಾಡಿದ್ದರು. ಈಗ ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲಿಸುವ ವಿಶ್ವಾಸ ನಮಗಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದು, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಅವರನ್ನ ಕಣಕ್ಕಿಳಿಸುವ ಮೂಲಕ ಸುಲಭವಾಗಿ ಗೆಲ್ಲಬಹುದು ಎನ್ನುವ ಲೆಕ್ಕಾಚಾರವನ್ನ ಡಿ ಕೆ ಬ್ರದರ್ಸ್ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.












Click it and Unblock the Notifications