ಡಿ.ಕೆ ಸುರೇಶ್ಗೆ ಮಹತ್ವದ ಹುದ್ದೆ?
ಬೆಂಗಳೂರು, ಜನವರಿ 28: ರಾಜ್ಯ ರಾಜಕೀಯದಲ್ಲಿ ಮಾರ್ಚ್ ಬಳಿಕ ಮಹತ್ವದ ಬದಲಾವಣೆಗಳಾಗಲಿದೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ರಚನೆ ಕುರಿತು ಗುಸು ಗುಸು ಕೇಳಿ ಬರುತ್ತಿದ್ದು, ಬಜೆಟ್ ಅಧಿವೇಶನ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳಾಗಲಿದೆ ಎನ್ನುವ ಚರ್ಚೆ ನಡೆಯುತ್ತಿದೆ.
2024 ರ ಲೋಕಸಭಾ ಚುಣಾವಣೆಯ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ನಡೆಸಿದ್ದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಅವರು ಹೀನಾಯವಾಗಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಅವರ ವಿರುದ್ಧ ಸೋಲು ಅನುಭವಿಸಿದ್ರು. ಇದೀಗ ಬೆಂಗಳೂರು ಗ್ರಾಮಾಂತರದ ಮಾಜಿ ಸಂಸದ ಡಿ.ಕೆ ಸುರೇಶ್ ಅವರಿಗೆ ಮಹತ್ವದ ಸ್ಥಾನ ನೀಡಲು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಸರತ್ತು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರ ಅಳಿಯ ಡಾ.ಸಿ.ಎನ್ ಮಂಜುನಾಥ್ ವಿರುದ್ಧ ಸೋತ ಮೇಲೆ ಅವರಿಗೆ ರಾಜಕೀಯದಲ್ಲಿ ಯಾವುದೇ ಸ್ಥಾನ ಇಲ್ಲ. ಹೀಗಾಗಿ ಬೆಂಗಳೂರು ಗ್ರಾಮಾಂತರದ ಮಾಜಿ ಸಂಸದ ಡಿ.ಕೆ ಸುರೇಶ್ ಅವರಿಗೆ ವಿಧಾನ ಪರಿಷತ್ ಸದಸ್ಯತ್ವದ ಸ್ಥಾನ ನೀಡಲು ತೆರೆಮರೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮ್ಮ ಸಹೋದರಿನಿಗೆ ಪರಿಷತ್ ಸದಸ್ಯತ್ವದ ಸ್ಥಾನ ಕೊಡಿಸಲು ಯೋಜಿಸುತ್ತಿದ್ದಾರೆ. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಜೊತೆಗೂ ಡಿ.ಕೆ ಶಿವಕುಮಾರ್ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯನ್ನು ಕಳೆದ ವಾರ ನಡೆಸಲಾಗಿತ್ತು. ಸಭೆಯಲ್ಲಿ ಪರಿಷತ್ ಸದಸ್ಯತ್ವ ನಾಮಕರಣ ಕುರಿತು ಚರ್ಚಿಸುವಾಗ ಡಿ.ಕೆ ಸುರೇಶ್ ಹೆಸರು ಮುನ್ನಲೆಗೆ ಬಂದಿದೆ.
ಈಗಾಗಲೇ ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆಗೆ ಒಂದು ಬಣ ತೀವ್ರ ಒತ್ತಡ ಹಾಕಿದೆ. ಈ ನಡುವೆ ಸೋತವರ ಕೆಲಸಗಳು ಸರ್ಕಾರದ ಮಟ್ಟದಲ್ಲಿ ಆಗಬೇಕು ಇದರ ಜೊತೆ ಸೋತ ಅಭ್ಯರ್ಥಿಗಳಲ್ಲಿ ಒಬ್ಬರಿಗೆ ಪರಿಷತ್ ಸ್ಥಾನ ನೀಡಬೇಕು ಎನ್ನುವ ಚರ್ಚೆ ಕೈ ಪಾಳಯದಲ್ಲಿ ಕೇಳಿಬರುತ್ತಿದೆ. ಈ ಪೈಕಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಾಜಿ ಸಂಸದ ಡಿ ಕೆ ಸುರೇಶ್ ಅವರ ಹೆಸರು ಮುಂಚೂಣಿಯಲ್ಲಿದ್ದು, ನಾಮನಿರ್ದೇಶನ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕಾಂಗ್ರೆಸ್ ಹೈಕಮಾಂಡ್ ಅಭಿಪ್ರಾಯ ಕೇಳಿದೆ.
ಹಾಲಿ ಎಂಎಲ್‌ಸಿಗಳಾದ ಯುಬಿ ವೆಂಕಟೇಶ್ ಮತ್ತು ಪ್ರಕಾಶ್ ರಾಥೋಡ್ ಅವರು ಅಕ್ಟೋಬರ್ 29, 2024 ರಂದು ನಿವೃತ್ತರಾಗುತ್ತಿದ್ದಾರೆ. ಹೀಗಾಗಿ ಈ ಸ್ಥಾನಗಳಿಗೆ ಪ್ರತಿಷ್ಠಿತ ವ್ಯಕ್ತಿಗಳನ್ನು ಆಯ್ಕೆ ಮಾಡುವ ಸವಾಲು ಸರಕಾರದ ಮುಂದಿದೆ. ರಾಜ್ಯ ರಾಜಕೀಯದಲ್ಲಿನ ಚರ್ಚೆಗಳ ನಡುವೆ ಡಿ ಕೆ ಶಿವಕುಮಾರ್ ಅವರು ತಮ್ಮ ಸಹೋದರನಿಗೆ ವಿಧಾನ ಪರಿಷತ್ ಸ್ಥಾನವನ್ನ ಕೊಡಿಸುವ ಸಲುವಾಗಿ ಕಸರತ್ತು ನಡೆಸುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಪ್ರಯತ್ನಕ್ಕೆ ಹೈಕಮಾಂಡ್ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರಿಂದ ಬೆಂಬಲ ಸಿಕ್ಕಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಮಗ ಡಾ.ಯತೀಂದ್ರಗೆ ಈಗಾಗಲೇ ವಿಧಾನ ಪರಿಷತ್ನಲ್ಲಿ ಸ್ಥಾನ ನೀಡಲಾಗಿದೆ. ಇದೇ ಮಾದರಿಯಲ್ಲಿ ಸಹೋದರನಿಗೆ ಪರಿಷತ್ ಸ್ಥಾನ ಕೊಡಿಸಲು ಡಿ.ಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆ.












Click it and Unblock the Notifications