ಸುಧೀರ್ ಚೌಧರಿ ವಿರುದ್ಧ ಅ.3ರವರೆಗೆ ಬಲವಂತದ ಕ್ರಮ ಬೇಡ; ಹೈಕೋರ್ಟ್
ಬೆಂಗಳೂರು, ಸೆಪ್ಟೆಂಬರ್ 21; ಸ್ವಾವಲಂಬಿ ಸಾರಥಿ ಯೋಜನೆ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿ ಕೋಮು ಗಲಭೆ ನಡೆಸಲು ಪ್ರಚೋದನೆ ನೀಡಿದ ಆರೋಪ ಸಂಬಂಧ ದಾಖಲಾದ ಎಫ್‌ಐಆರ್ ಕುರಿತು ಆಜ್‌ತಕ್ ವಾಹಿನಿ ಪ್ರಧಾನ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಅಕ್ಟೋಬರ್ 3ರವರೆಗೆ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಬೆಂಗಳೂರು ನಗರದ ಶೇಷಾದ್ರಿಪುರಂ ಠಾಣಾ ಪೊಲೀಸರಿಗೆ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ. ಇದರಿಂದಾಗಿ ಚೌಧರಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆದರೂ ಅವರ ಬಂಧನ ಭೀತಿ ಮುಂದುವರಿದಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸುಧೀರ್ ಚೌಧರಿ ಮತ್ತು ಆಜ್‌ತಕ್ ಸಂಸ್ಥೆ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರಿದ್ದ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ದಿನದ ಕಲಾಪದ ಅವಧಿ ಮಗಿದ ಹಿನ್ನೆಲೆಯಲ್ಲಿ ಅಕ್ಟೋಬರ್ 3ರಂದು ಸಂಜೆ 4 ಗಂಟೆಗೆ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಪೀಠ ತಿಳಿಸಿತು.

ಸೆಪ್ಟೆಂಬರ್ 15ರಂದು ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಅರ್ಜಿಯ ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಮತ್ತು ದುರುದ್ದೇಶಪೂರಿತ ಕ್ರಮ ಕೈಗೊಳ್ಳಬಾರದು ಎಂದು ಪೊಲೀಸರಿಗೆ ಕೋರ್ಟ್ ನಿರ್ದೇಶಿಸಿತು.
ಪ್ರಕರಣದ ಹಿನ್ನೆಲೆ ಏನು?; ಕಳೆದ ಸೆಪ್ಟೆಂಬರ್ 11ರಂದು ರಾತ್ರಿ 9.55ರ ವೇಳೆಗೆ ರಾಷ್ಟ್ರೀಯ ಸುದ್ದಿ ವಾಹಿನಿಯಾದ ಆಜ್ ತಕ್‌ನಲ್ಲಿ ಪ್ರಸಾರವಾದ ವರದಿಯಲ್ಲಿ ಪ್ರಧಾನ ಸಂಪಾದಕ ಸುಧೀರ್ ಚೌಧರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯ ಪ್ರಯೋಜನವನ್ನು ಕೇವಲ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ಅಲ್ಪಸಂಖ್ಯಾತರಲ್ಲದ ಹಿಂದೂಗಳಿಗೆ ಈ ಯೋಜನೆ ನೀಡುತ್ತಿಲ್ಲ. ಆ ಮೂಲಕ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಅಲ್ಪಸಂಖ್ಯಾತರಲ್ಲದ ಬಡ ಹಿಂದೂಗಳಿಗೆ ಅನ್ಯಾಯವಾಗಿರುತ್ತದೆ ಎಂದು ಹೇಳಿದ್ದರು.
ಇದರಿಂದ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ಮತ್ತು ಸುಳ್ಳು ಸುದ್ದಿ ಪ್ರಕಟಿಸಿದ ಆರೋಪದ ಮೇಲೆ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ಆಡಳಿತಾಧಿಕಾರಿ ಎಸ್. ಶಿವಕುಮಾರ್ ನಗರದ ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು, ಆಜ್‌ತಕ್ ಸುದ್ದಿ ವಾಹಿನಿ ಮತ್ತು ವಾಹಿನಿಯ ಸಂಘಟಕರ ವಿರುದ್ಧ ಮೇಲೆ ಎಫ್‌ಐಆರ್ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದೂರಿನ ಸಾರಾಂಶ: ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದ ಜನರು ಬ್ಯಾಂಕ್ ಮೂಲಕ ಸಾಲ ಪಡೆದು ಟ್ಯಾಕ್ಸಿ/ ಗೂಡ್ಸ್ ವಾಹನ/ ಆಟೊರಿಕ್ಷಾ ಖರೀದಿಸಲು ಬಯಸಿದ್ದಲ್ಲಿ ನಿಗಮವು ಸಾರಥಿ ಯೋಜನಯಡಿ ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಸಹಾಯಧನ ನೀಡುತ್ತದೆ.
ಈ ಯೋಜನೆಯು ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇತರೆ ಜಾತಿಯ ನಿಗಮಗಳಲ್ಲಿ ಅನುಷ್ಠಾನದಲ್ಲಿದೆ. ಆದರೆ, ಚೌಧರಿ ಅವರು ಸುಳ್ಳು ಸುದ್ದಿ ಬಿತ್ತರಿಸಿದ್ದಾರೆ.
ಆ ಮೂಲಕ ಹಿಂದೂ ಧರ್ಮ ಮತ್ತು ಇತರ ಧರ್ಮಗಳ ನಡುವೆ ದ್ವೇಷ ಹರಡುವ, ಅಶಾಂತಿಯ ವಾತಾವರಣ ಸೃಷ್ಟಿಸುವ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವ ಪಯತ್ನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.












Click it and Unblock the Notifications