ಡಾ.ಎ.ಬಿ.ಮಾಲಕರಡ್ಡಿ ಬಿಜೆಪಿಗೆ, ಕಾಂಗ್ರೆಸ್‌ಗೆ ಹಿನ್ನಡೆ
Recommended Video

ಬೆಂಗಳೂರು, ಮಾರ್ಚ್ 21 : ಕಾಂಗ್ರೆಸ್ ಹಿರಿಯ ನಾಯಕ ಡಾ.ಎ.ಬಿ.ಮಾಲಕರಡ್ಡಿ ಅವರು ಬಿಜೆಪಿ ಸೇರಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಯಾದಗಿರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಲಿದೆ.
ಮಾ.22ರಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಾ.ಎ.ಬಿ.ಮಾಲಕರಡ್ಡಿ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.
ಡಾ.ಎ.ಬಿ.ಮಾಲಕರಡ್ಡಿ ಅವರು ಬಿಜೆಪಿ ಸೇರಿದರೆ 2019ರ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿನ್ನಡೆಯಾಗಲಿದೆ. ಈಗಾಗಲೇ ಖರ್ಗೆ ಬೆಂಬಲಿಗರಾಗಿದ್ದ ಮೂವರು ನಾಯಕರು ಬಿಜೆಪಿ ಸೇರಿದ್ದಾರೆ. ಡಾ.ಉಮೇಶ್ ಜಾಧವ್ ಅವರು ಖರ್ಗೆ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಯಾದಗಿರಿ ಕ್ಷೇತ್ರದ ಶಾಸಕ ಡಾ.ಎ.ಬಿ.ಮಾಲಕರಡ್ಡಿ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆಗ ಸಚಿವ ಸ್ಥಾನ ಸಿಗಲಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಅವರು ಅಸಮಾಧಾನಗೊಂಡಿದ್ದರು.

ಸಚಿವ ಸ್ಥಾನ ಕೈ ತಪ್ಪಿತ್ತು
2013ರ ಚುನಾವಣೆಯಲ್ಲಿ ಡಾ.ಎ.ಬಿ.ಮಾಲಕರಡ್ಡಿ ಅವರು ಯಾದಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ಹಲವು ಬಾರಿ ಪ್ರಯತ್ನ ನಡೆಸಿದರೂ ಸಚಿವ ಸ್ಥಾನ ಸಿಕ್ಕಿರಲಿಲ್ಲ.

ಖರ್ಗೆ ಕುಟುಂಬದ ವಿರುದ್ಧ ಅಸಮಾಧಾನ
ಸಿದ್ದರಾಮಯ್ಯ ಅವರು ಪ್ರಿಯಾಂಕ್ ಖರ್ಗೆ ಅವರನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಿದ ಬಳಿಕ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಅಸಮಾಧಾನಗೊಂಡಿದ್ದರು. ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು.

ಸಿದ್ದರಾಮಯ್ಯ ಸಂಧಾನ
2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಅವರು ಪಕ್ಷ ಬಿಡುವ ಮಾತನ್ನು ಆಡಿದ್ದರು. ಆದರೆ, ಸಿದ್ದರಾಮಯ್ಯ ಅವರು ಸಂಧಾನ ನಡೆಸಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವೊಲಿಸಿದ್ದರು. ಈಗ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ.

2018ರ ಚುನಾವಣೆ ಸೋಲು
ಡಾ.ಎ.ಬಿ.ಮಾಲಕರಡ್ಡಿ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಯಾದಗಿರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. 49,346 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಎಂದು ಸೋಲು ಅನುಭವಿಸಿದ್ದರು.

ಮಲ್ಲಿಕಾರ್ಜುನ ಖರ್ಗೆಗೆ ಹಿನ್ನಡೆ
ಡಾ.ಎ.ಬಿ.ಮಾಲಕರಡ್ಡಿ ಅವರು ಬಿಜೆಪಿ ಸೇರಿದರೆ ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿನ್ನಡೆಯಾಗಲಿದೆ. 2014ರ ಚುನಾವಣೆಯಲ್ಲಿ ಖರ್ಗೆ ಬೆಂಬಲಕ್ಕೆ ನಿಂತಿದ್ದ ಡಾ.ಉಮೇಶ್ ಜಾಧವ್, ಬಾಬೂರಾವ್ ಚಿಂಚನಸೂರು, ಮಾಲೀಕಯ್ಯ ಗುತ್ತೇದಾರ್ ಅವರು ಈಗಾಗಲೇ ಬಿಜೆಪಿ ಸೇರಿದ್ದಾರೆ.












Click it and Unblock the Notifications