Dr BR Ambedkar: ಚುನಾವಣೆಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಸೋಲಿಸಿದ್ದು ಕಾಂಗ್ರೆಸ್ ಪಕ್ಷವಲ್ಲ: ಸಿದ್ದರಾಮಯ್ಯ
Dr BR Ambedkar: ಚುನಾವಣೆಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಸೋಲಿಸಿದ್ದು ಕಾಂಗ್ರೆಸ್ ಪಕ್ಷವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ. ಇದಕ್ಕಾಗಿ ಅಂಬೇಡ್ಕರರಿಗೆ ನಾನು ಋಣಿ. ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗದೆ ಇರುವುದು ನೋವಿನ ಸಂಗತಿ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು, "ಜಾತಿ ವ್ಯವಸ್ಥೆ ಇರುವವರೆಗೂ ಅಸ್ಪೃಶ್ಯತೆ ಇರುತ್ತದೆ, ಸಾಮಾಜಿಕ, ಆರ್ಥಿಕ ಅಸಮಾನತೆ ಇರುವವರೆಗೆ ಜಾತೀಯತೆ ಇರಲಿದೆ" ಎಂದು ಸ್ಪಷ್ಟವಾಗಿ ಹೇಳಿದ್ದರು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಅಂಬೇಡ್ಕರ್ ಅವರು ಎಲ್ಲಾ ದಮನಿತರ, ಪರಿಶಿಷ್ಟ ವರ್ಗಗಳ, ಶೋಷಿತರ, ಅವಕಾಶ ವಂಚಿತ ಜನರ ಪರವಾಗಿ ಹೋರಾಟವನ್ನು ತಮ್ಮ ಜೀವನದುದ್ದಕ್ಕೂ ಮಾಡಿದ್ದರು. ಕೇವಲ ದಲಿತರ ನಾಯಕರಾಗಿರದೆ ಅವಕಾಶ ವಂಚಿತರ, ದೌರ್ಜನ್ಯಕ್ಕೆ ಒಳಗಾದ ಎಲ್ಲರ ಪರವಾಗಿ ಹೋರಾಟ ಮಾಡಿದ್ದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಆದ್ದರಿಂದಲೇ ಭಾರತದ ಸಂವಿಧಾನವನ್ನು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಎಂದು ಪರಿಗಣಿಸಲಾಗುತ್ತದೆ. ಅಂಬೇಡ್ಕರ್ ವಿದ್ವಾಂಸರಾಗಿದ್ದರೂ ದಮನಿತರ ಪರವಾಗಿ ಹೋರಾಡಿದರಲ್ಲದೆ, ಹಿಂದೂ ಧರ್ಮದ ಸುಧಾರಣೆಗಾಗಿ ಬಹಳ ಪ್ರಯತ್ನ ಮಾಡಿದರು. ಆದರೆ ಕಡೆಗೂ ಅದು ಕೈಗೂಡದೆ ಹಿಂದೂ ಧರ್ಮವನ್ನು ತ್ಯಜಿಸಿದರು.
ಅಂಬೇಡ್ಕರ್ ಅವರು ವಿದ್ಯಾವಂತರಾಗದೆ ಹೋಗಿದ್ದರೆ, ಅವರಲ್ಲಿ ಹೋರಾಟದ ಮನೋಭಾವ ಇರದೇ ಹೋಗಿದ್ದರೆ ಇಂಥ ಸಂವಿಧಾನ ಸಿಗಲು ನಮಗೆ ಸಾಧ್ಯವಿರಲಿಲ್ಲ. ಅದಕ್ಕಾಗಿಯೇ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅಂಬೇಡ್ಕರ್, ರಾಮ್ ಮನೋಹರ್ ಲೋಹಿಯಾ, ಜವಾಹರ್ ಲಾಲ್ ನೆಹರೂ ಅವರು ಪಡೆದಂತಹ ಶಿಕ್ಷಣ ಪಡೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ, ಮಾನವೀಯತೆಯಿಂದ ಕೂಡಿರುವ ಶಿಕ್ಷಣ ನಮಗೆ ಸಿಗಬೇಕು.
ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದರಿಂದಲೇ ಇಂಥ ಸಂವಿಧಾನ ನೀಡಲು ಅಂಬೇಡ್ಕರ್ ಅವರಿಗೆ ಸಾಧ್ಯವಾಯಿತು. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾಜಿಕ, ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಸಮ ಸಮಾಜ ನಿರ್ಮಾಣಕ್ಕೆ ಸರ್ಕಾರ ಮಾಡುತ್ತಿರುವ ಪ್ರಾಮಾಣಿಕ ಪ್ರಯತ್ನವಾಗಿದೆ.
ಮನುವಾದಿಗಳು ಸಂವಿಧಾನ ವಿರೋಧಿಗಳಾಗಿದ್ದು, ಸುಳ್ಳು ಹೇಳಿ ಸಮಾಜದ ದಾರಿ ತಪ್ಪಿಸುತ್ತಾರೆ. ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿದರು, ದೆಹಲಿಯಲ್ಲಿ ಅಂಬೇಡ್ಕರ್ ಅವರ ಶವ ಸಂಸ್ಕಾರ ಮಾಡಲು ಅವಕಾಶ ನೀಡಲಿಲ್ಲ ಎಂದೂ ಅಪಪ್ರಚಾರ ಮಾಡುತ್ತಾರೆ. ಜನ ಇಂಥ ಸುಳ್ಳುಗಳನ್ನು ನಂಬಬಾರದು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಲ್ಲದೇ ಹೋಗಿದ್ದರೆ ದೇಶದಲ್ಲಿ ಏನು ಆಗುತ್ತಿತ್ತು ಎಂದು ಊಹಿಸುವುದೇ ಅಸಾಧ್ಯ. ಈ ದಿನ ಅಂಬೇಡ್ಕರ್ ಅವರ ಬದುಕನ್ನು, ಅವರ ಉದ್ದೇಶವನ್ನು ಮನನ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರು ಎಲ್ಲಾ ಕಾಲಕ್ಕೂ ಸಲ್ಲುತಾರೆ. ಸರ್ಕಾರ ನಡೆಸುವ ವಸತಿ ಶಾಲೆಗಳಲ್ಲಿ 97.22% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪಿಯುಸಿ ಪರೀಕ್ಷೆಯಲ್ಲಿಯೂ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರುವುದು ಸರ್ಕಾರದ ಹೆಗ್ಗಳಿಕೆ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.












Click it and Unblock the Notifications