ಕಾಂಗ್ರೆಸ್ ಸರ್ಕಾರ ರಚನೆ ಬಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಪರಮೇಶ್ವರ್
ಬೆಂಗಳೂರು, ಮೇ 18: ಸುದೀರ್ಘ ಚರ್ಚೆ, ಸಭೆಗಳ ನಂತರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದು, ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿದ್ದಾರೆ. ಈಗ ನೂತನ ಸರ್ಕಾರ ರಚನೆಯಾಗಬೇಕಿದ್ದು, ಈ ಬಗ್ಗೆ ಕಾಂಗ್ರೆಸ್ ಪಕ್ಷದ ವಕ್ತಾರರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.
ಕರ್ನಾಟಕ ಮಾಜಿ ಡಿಸಿಎಂ ಮತ್ತು ಶಾಸಕ ಡಾ.ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾಗಿ ರಾಜಭವನಕ್ಕೆ ತೆರಳಿ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸುವ ಕುರಿತು ಮಾಹಿತಿ ನೀಡಿದರು.

ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ನಿರ್ಧಾರದ ಪ್ರಹಸನ ಮುಗಿದಿದೆ. ಈಗ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ ಆಗಬೇಕಿದ್ದು, ಇದೇ 20ರಂದು ಶನಿವಾರ ಪ್ರಮಾಣ ವಚನ ಸಮಾರಂಭ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಕ್ಕಾಗಿ ಭರದ ಸಿದ್ಧತೆಗಳು ನಡೆದಿವೆ.
ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಕ್ಷದ ಪ್ರಬಲ ನಾಯಕರನ್ನು ಆಹ್ವಾನಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಯ್ ಬರೇಲಿ ಸಂಸದೆ ಸೋನಿಯಾ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಮುಖ್ಯಮಂತ್ರಿ ಸ್ಥಾನ ಆಯ್ಕೆ ಕಗ್ಗಂಟನ್ನು ಸರಿಪಡಿಸಿರುವ ಕಾಂಗ್ರೆಸ್ ಹೈಕಮಾಂಡ್ ನಾಯಕರು, ಅಧಿಕಾರ ಹಂಚಿಕೆ ಕುರಿತು ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಈ ಮೊದಲು ಸಿಎಂ ಅವಧಿಯ ಐದು ವರ್ಷವನ್ನು 2.5ವರ್ಷದಂತೆ ಉಭಯ ನಾಯಕರಿಗೆ ಹಂಚುತ್ತಾರೆ ಎಂಬ ಮಾತು ಕೇಳಿ ಬಂದಿತ್ತು. ಅದಕ್ಕೆ ಇಬ್ಬರು ನಾಯಕರು ಒಪ್ಪಿಗೆ ಸೂಚಿಸಿದ್ದರು. ಆದರೆ ಈ ಬಗ್ಗೆ ಸರಣಿ ಸಭೆ ಬಳಿಕೆ ಯಾವ ಮಾಹಿತಿಯನ್ನು ಎಐಸಿಸಿ ಅಧ್ಯಕ್ಷರಾಗಲಿ, ಉಸ್ತುವಾರಿಗಳಾಗಿ ಬಿಟ್ಟುಕೊಡದಿರುವುದು ಕುತೂಹಲ ಕೆರಳಿಸಿದೆ.
ದೇವರಾಜ ಅರಸು ನಂತರ ಎರಡನೇ ಬಾರಿಗೆ ಸಿದ್ದರಾಮಯ್ಯ ಅವರು ರಾಜ್ಯದ ಚುಕ್ಕಾಣಿ ಹಿಡಿದು ಮುಖ್ಯಮಂತ್ರಿ ಮಂತ್ರಿ ಸ್ಥಾನ ಅಲಂಕರಿಸುತ್ತಿದ್ದಾರೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರ ಹುಟ್ಟೂರಾದ ಸಿದ್ದರಾಮನಹುಂಡಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ಹಲವರು ಸಿದ್ದರಾಮಯ್ಯ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದ್ದಾರೆ.
ಸಿದ್ದರಾಮಯ್ಯ ಅವರು ಮೇ 20ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಗುರುವಾರ ಪ್ರಕಟವಾಗುತ್ತಿದ್ದಂತೆ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಸಿದ್ದರಾಮಯ್ಯ ಅವರಿಗೆ ಶುಭ ಕೋರಿದರು. ಸಿದ್ದರಾಮನಹುಂಡಿಯಲ್ಲಿ ಮೂರು ವರ್ಷಕ್ಕೊಮ್ಮೆ ಮಾಡುವ ಸಿದ್ದೇಶ್ವರಸ್ವಾಮಿ ಜಾತ್ರೆಯಲ್ಲಿ ಹೇಗಿರತ್ತದೆಯೋ ಹಬ್ಬದ ವಾತಾವರಣ, ಅದೇ ಉತ್ಸಾಹ ಗುರುವಾರ ಬೆಳಗ್ಗೆ ನಿರ್ಮಾಣ ಆಗಿತ್ತು.












Click it and Unblock the Notifications