ರೈತರ ಕೈ ಸೇರಲಿದೆ ಬರ ಪರಿಹಾರದ ಹಣ, ಯಾವಾಗ ಗೊತ್ತಾ?- ಸಿದ್ದರಾಮಯ್ಯ ಕೊಟ್ಟ ಮಹತ್ವದ ಹೇಳಿಕೆ ಇಲ್ಲಿದೆ.
ಬೆಳಗಾವಿ, ಡಿಸೆಂಬರ್ 07: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರೆಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿರುವ, ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ-ಅಂಶಗಳ ಸಹಿತ ಒದಗಿಸಬೇಕು. ನಿಗದಿತವಾಗಿ ತಮಗೆ ನಿಗಧಿ ಆಗಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.

ರೈತರಿಗೆ ಮೊದಲ ಹಂತದಲ್ಲಿ 2,000 ರೂ. ವರೆಗೆ ಪರಿಹಾರ ಘೋಷಿಸಲಾಗಿದ್ದು, ಈ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿ.ಬಿ.ಟಿ. ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರ ಸಮರ್ಪಕವಾಗಿ ನಡೆಯಲು ನಿಮ್ಮ ಪಾತ್ರ ಬಹುಮುಖ್ಯ. ನೀವು ಸರ್ಕಾರದ ಕಣ್ಣು, ಕಿವಿ ಇದ್ದ ಹಾಗೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ರಾಜಕಾರಣಿಗಳು, ಅಧಿಕಾರಿಗಳು- ನಾವೆಲ್ಲರೂ ಜನರಿಗೋಸ್ಕರ ಇರುವುದು. ಜನರ ಕೆಲಸವನ್ನು ವೇಗವಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಆಯವ್ಯಯ ಭಾಷಣದಲ್ಲಿ 143 ಘೋಷಣೆಗಳನ್ನು ಮಾಡಲಾಗಿದ್ದು, ಇದರಲ್ಲಿ ಈಗಾಗಲೇ 83 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಿ, ಕಾರ್ಯಗತಗೊಳಿಸಲಾಗಿದೆ. ಉಳಿದ ಘೋಷಣೆಗಳನ್ನೂ ಶೀಘ್ರವೇ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇನ್ನೂ ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಇನ್ನೂ ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀರ್ಘವೇ ನಿವಾರಿಸಬೇಕು ಎಂದು ತಿಳಿಸಿದರು.
ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಚಿವರಿಗೆ ಸೂಕ್ತ ಸಲಹೆ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿಯೂ ಬಾಕಿ ಕಡತಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ವಿವಿಧ ಇಲಾಖೆಗಳಲ್ಲಿ ನ್ಯಾಯಾಲಯ ಉಲ್ಲಂಘನೆಯ ಪ್ರಕರಣಗಳನ್ನು ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು . ಜಿಲ್ಲಾಧಿಕಾರಿಗಳು ಜನ ಸಂಪರ್ಕ ಸಭೆ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ನಿಮ್ಮ ಕಾರ್ಯವೈಖರಿಗೆ ಅನುಗುಣವಾಗಿ ಸರ್ಕಾರಕ್ಕೆ ಹೆಸರು ಬರುತ್ತದೆ, ಅನಿವಾರ್ಯ ಸಂದರ್ಭಗಳನ್ನು ಹೊರತು ಪಡಿಸಿ, ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ ಬರೆಯಬೇಕು. ಕನ್ನಡ ನಮ್ಮ ರಾಜ್ಯ ಭಾಷೆ, ಸಾರ್ವಭೌಮ ಭಾಷೆ ಎಂದು ತಿಳಿಸಿದರು.












Click it and Unblock the Notifications