ಶೀಘ್ರದಲ್ಲೇ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಜನವರಿ 14: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯು ಇ-ಸ್ವತ್ತು ಕಡ್ಡಾಯಗೊಳಿಸಿರುವ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡದಂತೆ ಮತ್ತು ಹೊಸ ಬಡಾವಣೆಗಳ ನಿರ್ಮಾಣವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದ್ದಾರೆ.
ಖಾತಾ ಇಲ್ಲದ ಬಹಳಷ್ಟು ಆಸ್ತಿಗಳ ಸಂಬಂಧ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಾಗೂ ಮನೆಗಳನ್ನು ನೋಂದಣಿ ಮಾಡುವ ಬಗ್ಗೆ ವರದಿಗಳು ಬರುತ್ತಿದ್ದು, ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಇಂತಹ ಪ್ರಕರಣಗಳನ್ನು ತಡೆಯಬೇಕು ಎಂದು ಸಲಹೆ ನೀಡಿದರು.
ಮುಖ್ಯಮಂತ್ರಿಯವರು ಇ-ಸ್ವತ್ತು ವಿತರಣೆಗೆ ಸಂಬಂಧಿಸಿದಂತೆ ಜನವರಿ 06ರಂದು ನೋಂದಣಿ ಮತ್ತು ಮುದ್ರಾಂಕ ವಿಷಯಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಪೌರಾಡಳಿತ ಇಲಾಖೆಗಳ ಸಭೆ ನಡೆಸಿದ್ದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿಯಾನದ ರೂಪದಲ್ಲಿ ನಿಯಮ ಬದ್ಧವಾದ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವ ಮೂಲಕ ತೆರಿಗೆ ಸಂಗ್ರಹವನ್ನು ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿಯವರ ಸೂಚನೆಗಳನ್ನು ಅನುಷ್ಠಾನಗೊಳಿಸುವಂತೆ ಹಾಗೂ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಮತ್ತು ಆಸ್ತಿ ತೆರಿಗೆ ಸಂಗ್ರಹಣೆ ಅಭಿಯಾನ ನಡೆಸಲು ಎಲ್ಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸಚಿವರು ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.












Click it and Unblock the Notifications