ಆಸ್ತಿ ಮಾಲೀಕರಿಗೆ ಗುಡ್‌ನ್ಯೂಸ್: ಇ-ಖಾತಾ ಪಡೆಯಲು ಮತ್ತೆ 3 ದಿನಗಳ ಅವಕಾಶ!
ಮೈಸೂರು: ಮೈಸೂರು ನಗರದ ಆಸ್ತಿ ಮಾಲೀಕರಿಗೆ ಇ-ಖಾತಾ ಪಡೆಯಲು ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಅರ್ಹ ಎಲ್ಲ ಆಸ್ತಿ ಮಾಲೀಕರಿಗೂ ಇ-ಖಾತಾ ಸೌಲಭ್ಯ ತಲುಪಿಸುವ ಉದ್ದೇಶದಿಂದ ನವೆಂಬರ್ 5, 6 ಮತ್ತು 7ರಂದು ಮೈಸೂರಿನಲ್ಲಿ ಪ್ರಜಾಸೇವಾ ವಿಶೇಷ ಇ-ಖಾತಾ ವಿತರಣಾ ಆಂದೋಲನ ಮುಂದುವರಿಯಲಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ಪ್ರಜಾಸೇವಾ ವಿಶೇಷ ಇ-ಖಾತಾ ವಿತರಣಾ ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಆಸ್ತಿ ದಾಖಲೆಗಳನ್ನು ಸುಲಭವಾಗಿ ಒದಗಿಸುವುದು ಹಾಗೂ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

78,700ಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ವಿತರಣೆ
ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 2.10 ಲಕ್ಷಕ್ಕೂ ಅಧಿಕ ಆಸ್ತಿಗಳಿವೆ. ಈ ಪೈಕಿ ಇದುವರೆಗೆ 78,700ಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ವಿತರಿಸಲಾಗಿದೆ. ಉಳಿದ ಅರ್ಹ ಆಸ್ತಿಗಳಿಗೂ ಇ-ಖಾತಾ ಒದಗಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಅಕ್ಟೋಬರ್ 28ರಂದು ನಡೆದ ವಿಶೇಷ ಇ-ಖಾತಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಈ ಸಂದರ್ಭದಲ್ಲಿ ಒಟ್ಟು 730 ಅರ್ಜಿಗಳು ಸಲ್ಲಿಕೆಯಾಗಿದ್ದು, 590 ಅರ್ಹ ಫಲಾನುಭವಿಗಳಿಗೆ ಇ-ಖಾತಾ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.
ದಾಖಲೆಗಳ ಕೊರತೆಯಿದ್ದರೂ ಮತ್ತೊಂದು ಅವಕಾಶ
ದಾಖಲೆಗಳ ಕೊರತೆಯಿಂದ ಯಾವುದೇ ಅರ್ಹ ಆಸ್ತಿ ಮಾಲೀಕರು ಇ-ಖಾತಾ ಸೌಲಭ್ಯದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ದಾಖಲೆಗಳನ್ನು ಒದಗಿಸಲು ಸಾಧ್ಯವಾಗದವರು ಹಾಗೂ ಅಕ್ಟೋಬರ್ 28ರಂದು ನಡೆದ ಆಂದೋಲನದಲ್ಲಿ ಭಾಗವಹಿಸಲು ಸಾಧ್ಯವಾಗದ ನಾಗರಿಕರಿಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ.
ನವೆಂಬರ್ 5, 6 ಮತ್ತು 7ರಂದು ನಡೆಯಲಿರುವ ವಿಶೇಷ ಆಂದೋಲನದಲ್ಲಿ ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಹ ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ಇ-ಖಾತಾ ವಿತರಿಸಲು ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಸಚಿವರು ಸೂಚಿಸಿದರು.
ಫಲಾನುಭವಿಗಳಿಗೆ ಸಾಂಕೇತಿಕವಾಗಿ ಇ-ಖಾತಾ
ಆಸ್ತಿ ಮಾಲೀಕರಿಗೆ ಅನಗತ್ಯ ವಿಳಂಬವಾಗದಂತೆ ಕ್ರಮವಹಿಸುವುದರ ಜೊತೆಗೆ, ಇ-ಖಾತಾ ವಿತರಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಾಗರಿಕ ಸ್ನೇಹಿ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಇ-ಖಾತಾ ಪ್ರತಿಗಳನ್ನು ವಿತರಿಸಲಾಯಿತು.
ಡಿಜಿಟಲ್ ಯುಗದಲ್ಲಿ ಕನ್ನಡ ಭಾಷೆಯ ಬಳಕೆ ಹೆಚ್ಚಿಸಿ
ಡಿಜಿಟಲ್ ಯುಗದಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಹೆಚ್ಚಿಸಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಕನ್ನಡವನ್ನು ಬೆಳೆಸಬೇಕು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕನ್ನಡದಲ್ಲಿ ಗುಣಮಟ್ಟದ ಡಿಜಿಟಲ್ ಪುಸ್ತಕಗಳು, ಶೈಕ್ಷಣಿಕ ವಿಡಿಯೊಗಳು, ಆನ್‌ಲೈನ್ ಪಾಠಗಳು ಹಾಗೂ ತಂತ್ರಜ್ಞಾನ ಆಧಾರಿತ ಕಲಿಕಾ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ. ವಿಜ್ಞಾನ, ವೈದ್ಯಕೀಯ, ಕಾನೂನು ಮತ್ತು ಆಡಳಿತ ಕ್ಷೇತ್ರಗಳಿಗೆ ಸಂಬಂಧಿಸಿದ ಮಾಹಿತಿಯು ಕನ್ನಡದಲ್ಲಿ ಸುಲಭವಾಗಿ ಲಭ್ಯವಾಗಬೇಕು. ಯುವಜನರು ಕನ್ನಡ ಭಾಷೆಯ ಮೂಲಕ ಹೊಸ ಆವಿಷ್ಕಾರ, ಸಂಶೋಧನೆ ಹಾಗೂ ಉದ್ಯಮಶೀಲತೆಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.
ನವೆಂಬರ್ 1 ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಹಾಗೂ ಸಂತೋಷದ ದಿನವಾಗಿದೆ. ಕನ್ನಡ ನಾಡಿನ ಇತಿಹಾಸ, ಭಾಷೆಯ ಶ್ರೀಮಂತಿಕೆ, ಸಂಸ್ಕೃತಿ, ಪರಂಪರೆ ಮತ್ತು ಕನ್ನಡಿಗರ ಸ್ವಾಭಿಮಾನವನ್ನು ಸ್ಮರಿಸುವ ಈ ದಿನವು ಕೇವಲ ಹಬ್ಬವಲ್ಲ, ಕನ್ನಡದ ಏಕತೆ, ಸಮಗ್ರತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸುವ ಮಹತ್ವದ ದಿನವಾಗಿದೆ ಎಂದರು.
ಕನ್ನಡ ನಾಡಿನ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವುದು, ಭಾಷೆಯ ಗೌರವವನ್ನು ಹೆಚ್ಚಿಸುವುದು ಹಾಗೂ ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಪರಂಪರೆಯನ್ನು ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಮೈಸೂರು ಮಹಾನಗರ ಪಾಲಿಕೆ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಉಸ್ತುವಾರಿ ಸಮಿತಿಯ ಅಧ್ಯಕ್ಷೆ ಪುಷ್ಪವಲ್ಲಿ, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಆರೀಫ್ ಹುಸೇನ್, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


Click it and Unblock the Notifications
