E-Khata: ಆಸ್ತಿದಾರರಿಗೆ ಇ-ಖಾತಾ ವಿಚಾರದಲ್ಲಿ ಬಿಗ್ ಅಪ್ಡೇಟ್ಸ್ ಕೊಟ್ಟ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
E-Khata: ಇ-ಖಾತಾ ವಿಚಾರದಲ್ಲಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬಿಗ್ ಅಪ್ಡೇಟ್ಸ್ ಕೊಟ್ಟಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (MUDA), ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಗರಾಭಿವೃದ್ಧಿ ಕಾಮಗಾರಿಗಳ ಪ್ರಗತಿ, ಕುಡಿಯುವ ನೀರು, ಒಳಚರಂಡಿ, ಬೀದಿ ದೀಪ, ಮಾರುಕಟ್ಟೆ, ಇ-ಖಾತಾ, ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯ ಮತ್ತು ಸಹಕಾರದೊಂದಿಗೆ ಕಾರ್ಯನಿರ್ವಹಿಸಿ, ಕೈಗೆತ್ತಿಕೊಂಡಿರುವ ಅಭಿವೃದ್ಧಿ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
E-Khata: ನಗರ ಸೇವೆಗಳ ಡಿಜಿಟಲೀಕರಣಕ್ಕೆ ಆದ್ಯತೆ
ರಾಜ್ಯದ 13 ಮಹಾನಗರ ಪಾಲಿಕೆಗಳನ್ನು ಡಿಜಿಟಲೀಕರಣಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಪಾಲಿಕೆಗಳ ಎಲ್ಲಾ ಸೇವೆಗಳು ಹಾಗೂ ಅಗತ್ಯ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಡಿಜಿಟಲ್ ರೂಪದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು. ಮುಂದಿನ 25 ವರ್ಷಗಳ ನಗರದ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ನೀರು ಸಂಗ್ರಹಣಾ ಘಟಕಗಳನ್ನು ಮೇಲ್ದರ್ಜೆಗೇರಿಸುವಂತೆ ಸೂಚಿಸಲಾಯಿತು. ಮಂಗಳೂರಿನಲ್ಲಿ ಒಟ್ಟು 96,300 ಮನೆಗಳ ನಳ ಸಂಪರ್ಕಗಳ ಪೈಕಿ 39,182 ಸಂಪರ್ಕಗಳು ಪೂರ್ಣಗೊಂಡಿದ್ದು, ಬಾಕಿ ಇರುವ 57,118 ಸಂಪರ್ಕ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಪ್ರಸ್ತುತ ನಗರದ ಶೇ.65ರಷ್ಟು ಪ್ರದೇಶದಲ್ಲಿ, ಅಂದರೆ 86.09 ಚದರ ಕಿಲೋಮೀಟರ್ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಲಭ್ಯವಿದ್ದು, ಉಳಿದ ಪ್ರದೇಶಗಳಿಗೂ ಒಳಚರಂಡಿ ವ್ಯವಸ್ಥೆಯನ್ನು ಹಂತ ಹಂತವಾಗಿ ವಿಸ್ತರಿಸಲು ಸೂಚಿಸಲಾಯಿತು. ನಗರದಲ್ಲಿ ಈಗಾಗಲೇ ಶೇ.55.6ರಷ್ಟು, ಅಂದರೆ 36,643 ಬೀದಿ ದೀಪಗಳನ್ನು ಅಳವಡಿಸಲಾಗಿದ್ದು, ಉಳಿದ ಪ್ರದೇಶಗಳಲ್ಲಿಯೂ ಬೀದಿ ದೀಪಗಳನ್ನು ಶೀಘ್ರವಾಗಿ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸೆಂಟ್ರಲ್ ಮಾರುಕಟ್ಟೆ ಕಾಮಗಾರಿ ಪರಿಶೀಲನೆ
ಸರ್ಕಾರಿ-ಖಾಸಗಿ ಸಹಭಾಗಿತ್ವದ (PPP) ಮಾದರಿಯಲ್ಲಿ ಸುಮಾರು ₹150 ಕೋಟಿ ವೆಚ್ಚದಲ್ಲಿ 586 ಮಳಿಗೆಗಳೊಂದಿಗೆ ನಿರ್ಮಾಣಗೊಳ್ಳುತ್ತಿರುವ ಸೆಂಟ್ರಲ್ ಮಾರುಕಟ್ಟೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಕುರಿತು ಸಭೆಯಲ್ಲಿ ಪರಿಶೀಲಿಸಲಾಯಿತು. ಇದಲ್ಲದೆ, ಕಂಕನಾಡಿ, ಕದ್ರಿ, ಉರ್ವ ಹಾಗೂ ಸುರತ್ಕಲ್ ಮಾರುಕಟ್ಟೆಗಳ ನಿರ್ಮಾಣ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಿ, ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು.
ನಗರದಲ್ಲಿ ಪ್ರತಿದಿನ ಉತ್ಪತ್ತಿಯಾಗುವ ಸುಮಾರು 120 ಟನ್ ಹಸಿಕಸ, 125 ಟನ್ ಮಿಶ್ರಿತ ಕಸ, 15 ಟನ್ ಎಳನೀರು/ತೆಂಗಿನಕಾಯಿ ತ್ಯಾಜ್ಯ ಹಾಗೂ 5 ಟನ್ ಸ್ಯಾನಿಟರಿ ತ್ಯಾಜ್ಯ, ಜೊತೆಗೆ ವಾರಕ್ಕೆ ಉತ್ಪತ್ತಿಯಾಗುವ ಸುಮಾರು 250 ಟನ್ ಒಣಕಸವನ್ನು ಶೇ.100ರಷ್ಟು ಮೂಲದಲ್ಲಿಯೇ ವಿಂಗಡಿಸುವಂತೆ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ತ್ಯಾಜ್ಯ ವಿಂಗಡಣೆ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
E-Khata: ಇ-ಖಾತಾ ವಿತರಣೆ ಚುರುಕುಗೊಳಿಸಲು ಸೂಚನೆ
ಮಂಗಳೂರು ನಗರದಲ್ಲಿ ಒಟ್ಟು 2,22,256 ಇ-ಖಾತಾಗಳ ಪೈಕಿ 68,603 ಇ-ಖಾತಾಗಳನ್ನು ವಿತರಿಸಲಾಗಿದ್ದು, ಬಾಕಿ ಇರುವ ಇ-ಖಾತಾಗಳ ವಿತರಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸೂಚಿಸಲಾಯಿತು. ಅರ್ಹ ಸಾರ್ವಜನಿಕರಿಗೆ ಖಾತೆಗಳು ಹಾಗೂ ನಿವೇಶನ ಸಂಬಂಧಿತ ಸೇವೆಗಳು ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶಿಸಿದರು.
ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛವಾಗಿ ಹಾಗೂ ಸುಸ್ಥಿತಿಯಲ್ಲಿಡಬೇಕು. ನಗರದ ಸಮಗ್ರ ನಿರ್ವಹಣೆ ಹಾಗೂ ಸಾರ್ವಜನಿಕ ಸೇವೆಗಳ ಮೇಲ್ವಿಚಾರಣೆಗೆ ಸ್ಮಾರ್ಟ್ ಸಿಟಿ ಯೋಜನೆಯ 'ಕಮಾಂಡ್ ಸೆಂಟರ್' ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.


Click it and Unblock the Notifications
