KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿರುವುದು ಎಲ್ಲರಿಗೂ ತಿಳಿದೇ ಇದ. ಈ ಸಂಬಂಧ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮಂಗಳವಾರ ರಾಜ್ಯದಾದ್ಯಂತ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ.

ಕೆಪಿಎಸ್‌ಸಿಯಿಂದ ಅಮಾನತುಗೊಂಡಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಸೇರಿದಂತೆ ಹಲವು ಪ್ರಮುಖರ ಮನೆ, ಕಚೇರಿಗಳು ಹಾಗೂ ಗುಜರಾತ್‌ನ ಅಹಮದಾಬಾದ್ ಸೇರಿ ಒಟ್ಟು 21 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ED Raids

ಕೆಪಿಎಸ್‌ಸಿ ಅಧಿಕಾರಿಗಳ ಮನೆ ಮೇಲೆ ದಾಳಿ

ಈ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸುತ್ತಿದ್ದಾರೆ. ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಕಾರವಾರ, ಕಲಬುರಗಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಬಿರುಸಿನ ಶೋಧ ಕಾರ್ಯ ನಡೆಯುತ್ತಿದೆ. ಪ್ರಮುಖವಾಗಿ ಕೆಪಿಎಸ್‌ಸಿ ಕೇಂದ್ರ ಕಚೇರಿ, ಅಮಾನತುಗೊಂಡಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸ, ಆಯೋಗದ ಸದಸ್ಯೆ ಶಾಂತಾ ಹೊಸಮನಿ ಅವರ ಮನೆ ಹಾಗೂ ನೇಮಕಾತಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಹಲವು ಮಧ್ಯವರ್ತಿಗಳ ನಿವಾಸಗಳ ಮೇಲೆ ಕೂಡ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇದರ ಜೊತೆಗೆ, ಅಭ್ಯರ್ಥಿಗಳ ಉತ್ತರ ಪತ್ರಿಕೆಗಳ ಡಿಜಿಟಲ್ ಮೌಲ್ಯಮಾಪನದ ಜವಾಬ್ದಾರಿ ಹೊತ್ತಿದ್ದ ಗುಜರಾತ್‌ನ ಅಹಮದಾಬಾದ್ ಮೂಲದ 'ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್' ಕಚೇರಿಯ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ. ಪರೀಕ್ಷೆಯಲ್ಲಿ ಅಕ್ರಮವಾಗಿ ಆಯ್ಕೆಯಾಗಿದ್ದಾರೆ ಎನ್ನಲಾದ ಕೆಲ ಅಭ್ಯರ್ಥಿಗಳ ಮನೆಗಳ ಮೇಲೂ ರೇಡ್ ನಡೆದಿದ್ದು, ಅಕ್ರಮದ ಮೂಲವನ್ನ ಪತ್ತೆಹಚ್ಚಲಾಗುತ್ತಿದೆ.

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: 80 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್

ಈ ನೇಮಕಾತಿ ಪ್ರಕ್ರಿಯೆಯಲ್ಲಿ ದಲ್ಲಾಳಿಗಳು ಕೋಟ್ಯಂತರ ರೂಪಾಯಿ ಡೀಲ್ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ದೂರುದಾರರು ನೀಡಿರುವ ಮಾಹಿತಿಯ ಪ್ರಕಾರ, ಪ್ರಭಾವಿ ಮಧ್ಯವರ್ತಿಗಳು ಅಭ್ಯರ್ಥಿಗಳಿಗೆ ನೇರವಾಗಿ ಕರೆ ಮಾಡಿ, ಉದ್ಯೋಗ ಕೊಡಿಸಲು ತಲಾ 70 ಲಕ್ಷದಿಂದ 80 ಲಕ್ಷ ರೂಪಾಯಿಗಳವರೆಗೆ ಲಂಚದ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವು ಎಫ್‌ಐಆರ್‌ಗಳು (FIR) ದಾಖಲಾಗಿದ್ದವು. ರಾಜ್ಯ ಪೊಲೀಸರ ಬಳಿ ದಾಖಲಾಗಿದ್ದ ಎಫ್‌ಐಆರ್ ಮಾಹಿತಿಯನ್ನು ಆಧರಿಸಿ ಇದೀಗ ಕೇಂದ್ರ ತನಿಖಾ ಸಂಸ್ಥೆ ಇಡಿ ಅಖಾಡಕ್ಕೆ ಇಳಿದು ತನ್ನ ತನಿಖೆಯನ್ನು ಚುರುಕುಗೊಳಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ

ಕೇವಲ ಲಂಚದ ಬೇಡಿಕೆ ಮಾತ್ರವಲ್ಲದೆ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಸಾಲು ಸಾಲು ಅಕ್ರಮಗಳು ನಡೆದಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಬರೆದಿದ್ದ ಒಎಂಆರ್ ಉತ್ತರ ಪತ್ರಿಕೆಗಳನ್ನ ತಿದ್ದಿರುವುದು, ಪರೀಕ್ಷೆಗೂ ಮುನ್ನವೇ ರಹಸ್ಯವಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವುದು ಇಡಿ ತನಿಖೆ ವೇಳೆ ಬೆಳಕಿಗೆ ಬರುತ್ತಿದೆ.

ಇದರ ಜೊತೆಗೆ, ಕೆಪಿಎಸ್‌ಸಿ ಅಧಿಕಾರಿಗಳು ತಮ್ಮ ಪ್ರಭಾವ ಬಳಸಿ ತಮ್ಮ ಸಂಬಂಧಿಕರು ಹಾಗೂ ಆಪ್ತರಿಗೆ ಫೈನಲ್ ಲಿಸ್ಟ್‌ನಲ್ಲಿ ಉದ್ಯೋಗ ಸಿಗುವಂತೆ ಮಾಡಿದ್ದಾರೆ ಎಂಬ ಆರೋಪವೂ ಇದೆ. ಅರ್ಹ ಹಾಗೂ ಪ್ರಾಮಾಣಿಕ ಅಭ್ಯರ್ಥಿಗಳಿಗೆ ವಂಚಿಸಿ, ಹಣ ಕೊಟ್ಟವರಿಗೆ ಮಣೆ ಹಾಕಿರುವ ಈ ಹಗರಣದ ಬಗ್ಗೆ ಇಡಿ ಅಧಿಕಾರಿಗಳು ಸಮಗ್ರ ತನಿಖೆ ನಡೆಸುತ್ತಿದ್ದಾರೆ.

ಬಂಧನ ಭೀತಿಗೆ ಹೈಕೋರ್ಟ್‌ ಮೊರೆ ಹೋದ ಸಾಹುಕಾರ್

ಸಿಐಡಿ ಹಾಗೂ ಇಡಿ ತನಿಖೆಯ ಉರುಳು ಬಿಗಿಯಾಗುತ್ತಿದ್ದಂತೆ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರು ತಾವು ಬಂಧನಕ್ಕೊಳಗಾಗುವುದನ್ನು ತಪ್ಪಿಸಿಕೊಳ್ಳಲು ಮೊದಲಿಗೆ ಸಿಟಿ ಸಿವಿಲ್ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಆದರೆ, ಅವರ ಮೇಲಿರುವ ಆರೋಪಗಳ ಗಂಭೀರತೆಯನ್ನ ಪರಿಗಣಿಸಿದ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ, ಇದೀಗ ಅವರು ರಕ್ಷಣೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸಾಹುಕಾರ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಜೊತೆಗೆ, ಮುಂದಿನ ವಿಚಾರಣೆಯನ್ನು ಮುಂದೂಡಿದ್ದು, ಸಾಹುಕಾರ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಗಲಿದೆಯೇ ಅಥವಾ ಬಂಧನ ಖಚಿತವಾಗಲಿದೆಯೇ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+