ಕರ್ನಾಟಕದ ಶಾಲೆಗಳಲ್ಲಿ ಬಿಸಿಊಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ಫ್ರೀ!
ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿಗಳನ್ನು ನೀಡುವುದಕ್ಕೆ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯ ಶೈಕ್ಷಣಿಕ ಸಾಲಿನಲ್ಲಿ 45 ದಿನ ಮಧ್ಯಾಹ್ನದ ಊಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ಅನ್ನು ನೀಡಲಾಗುತ್ತದೆ. ಪ್ರಸ್ತುತ ಕರ್ನಾಟಕದ ಏಳು ಹಿಂದುಳಿದ ಜಿಲ್ಲೆಗಳಲ್ಲಿ ಮಾತ್ರ ಈ ಯೋಜನೆಯು ಚಾಲ್ತಿಯಲ್ಲಿದೆ.
ಅದನ್ನು ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೊಳಿಸುವುದಾಗಿ ಸರ್ಕಾರದ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಷ್ಟೇ ಅಲ್ಲದೇ ಪ್ರೌಢಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಈ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ.
ಕರ್ನಾಟಕದ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆಯನ್ನು ನೀಡುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು. ಇದರ ಮಧ್ಯೆ ಮೊಟ್ಟೆಯಷ್ಟೇ ಅಲ್ಲದೇ ಅದರ ಜೊತೆಗೆ ಮಕ್ಕಳ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಬಾಳೆಹಣ್ಣು ಮತ್ತು ಚಿಕ್ಕಿಯನ್ನು ನೀಡಲು ಸರ್ಕಾರ ನಿರ್ಧರಿಸಿದೆ.

ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿ ವಿತರಣೆ
ಕರ್ನಾಟಕದಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶಯುಕ್ತ ಆಹಾರವನ್ನು ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿಯನ್ನು ನೀಡುವ ಯೋಜನೆಗೆ ರಾಜ್ಯ ಸರ್ಕಾರವು ಹಣವನ್ನು ನೀಡುತ್ತದೆ. ಪ್ರಧಾನ ಮಂತ್ರಿ ಪೋಶನ್ ಶಕ್ತಿ ನಿರ್ಮಾಣ ಯೋಜನೆಯಡಿಯಲ್ಲಿ ಅನುಮತಿ ನೀಡಲಾಗುತ್ತಿದೆ.

ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖವಾಗಿದ್ದೇನು?
"ಕಳೆದ ಜುಲೈ 19ರಂದು ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶಯುಕ್ತ ಆಹಾರವನ್ನು ನೀಡುವ ನಿಟ್ಟಿನಲ್ಲಿ ಸರ್ಕಾರವು ಈ ಆದೇಶವನ್ನು ಹೊರಡಿಸಿದೆ. ಕಾನೂನು ನಿಯಮದ ಪ್ರಕಾರ, ಶಾಲೆಗಳು ಸದ್ಯಕ್ಕೆ ಅವುಗಳನ್ನು ಖರೀದಿ ಮಾಡಲಿ. ಅದರ ಹಣವನ್ನು ಈ ತಿಂಗಳಾಂತ್ಯದಲ್ಲಿ ಅಥವಾ ಮುಂದಿನ ತಿಂಗಳ ಆರಂಭದಲ್ಲಿ ಪಾವತಿ ಮಾಡಲಾಗುವುದು. ಸದ್ಯದ ಮಟ್ಟಿಗೆ ಈ ಯೋಜನೆಯನ್ನು 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ," ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮಧ್ಯಾಹ್ನದ ಹೊತ್ತಿನಲ್ಲಿ ಆರೋಗ್ಯಕರ ಆಹಾರ ಸೇವನೆ
ಸಾಮಾನ್ಯವಾಗಿ ಮಧ್ಯಾಹ್ನದ ಊಟದ ಸಮಯದಲ್ಲಿ ಅಧಿಕ ಕ್ಯಾಲೋರಿಗಳು ಮತ್ತು ಕೊಬ್ಬಿನಿಂದಾಗಿ ಸ್ಥೂಲಕಾಯತೆ ಮತ್ತು ಹಾರ್ಮೋನ್ ಅಸಮತೋಲನ ಉಂಟಾಗುತ್ತದೆ. ಇದನ್ನು ತಡೆಗಟ್ಟುವುದಕ್ಕಾಗಿ ಕೊಲೆಸ್ಟ್ರಾಲ್ ಮುಕ್ತ ಮೊಟ್ಟೆ, ಸುವಾಸನೆಯ ಹಾಲು, ಬಿಸ್ಕಟ್ ಸೇರಿದಂತೆ ಇತ್ಯಾದಿಗಳನ್ನು ಒಳಗೊಂಡಿರಬೇಕು ಎಂದು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್‌ನ ಮಕ್ಕಳ ಮತ್ತು ಹದಿಹರೆಯದವರ ಮನೋವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪೊಸಿಷನ್ ಪೇಪರ್‌ನಲ್ಲಿ ಆರೋಗ್ಯ ವಿಷಯ ಮುನ್ನಡೆಸುತ್ತಿರುವ ಡಾ. ಕೆ. ಜಾನ್ ವಿಜಯ್ ಸಾಗರ್ ತಿಳಿಸಿದ್ದಾರೆ.

ಪ್ರೌಢಶಾಲಾ ವಿದ್ಯಾರ್ಥಿಗಳಿಗೂ ಯೋಜನೆ ವಿಸ್ತರಣೆಗೆ ಕ್ರಮ
"ರಾಜ್ಯದಲ್ಲಿ ಸದ್ಯಕ್ಕೆ 1 ರಿಂದ 8ನೇ ತರಗತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಮಧ್ಯಾಹ್ನ ಊಟದ ಜೊತೆಗೆ ಪೌಷ್ಠಿಕಾಂಶಯುಕ್ತ ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿಯನ್ನು ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಮತ್ತಷ್ಟು ವಿಸ್ತರಿಸುವುದಕ್ಕೆ ಸರ್ಕಾರ ಚಿಂತನೆ ನಡೆಸಿದೆ. 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಯೋಜನೆಯನ್ನು ವಿಸ್ತರಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ," ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿಶಾಲ್ ಆರ್ ಮಾಹಿತಿ ನೀಡಿದ್ದಾರೆ.












Click it and Unblock the Notifications