2 ಕ್ಷೇತ್ರದ ಉಪ ಚುನಾವಣೆ; ಅಧಿಸೂಚನೆ ಪ್ರಕಟ
ಬೆಂಗಳೂರು, ಅಕ್ಟೋಬರ್ 09: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, 10ರಂದು ಮತ ಎಣಿಕೆ ನಡೆಯಲಿದೆ.
ಚುನಾವಣಾ ಆಯೋಗ ಶುಕ್ರವಾರ ಅಧಿಸೂಚನೆ ಪ್ರಕಟಿಸಲಿದ್ದು, ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಅಕ್ಟೋಬರ್ 16ರ ತನಕ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ.
ಅಕ್ಟೋಬರ್ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅಕ್ಟೋಬರ್ 19ರ ತನಕ ನಾಮಪತ್ರಗಳನ್ನು ವಾಪಸ್ ಪಡೆಯಬಹುದಾಗಿದೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, 10ರಂದು ಫಲಿತಾಂಶ ಘೋಷಣೆಯಾಗಲಿದೆ.
ಆರ್. ಆರ್. ನಗರ ಮತ್ತು ಶಿರಾದಲ್ಲಿ 2018ರ ಚುನಾವಣೆಯಲ್ಲಿ ಬಿಜೆಪಿ ಗೆದ್ದಿರಲಿಲ್ಲ. ಆದರೆ, ಈಗ ರಾಜ್ಯದಲ್ಲಿ ಬಿಜೆಪಿಯೇ ಆಡಳಿತದಲ್ಲಿ ಇರುವುದರಿಂದ ಉಪ ಚುನಾವಣೆ ಪಕ್ಷಕ್ಕೆ ಪ್ರತಿಷ್ಠೆಯಾಗಿದೆ.

ಅಭ್ಯರ್ಥಿಗಳ ಘೋಷಣೆಯಾಗಿದೆ
ಕಾಂಗ್ರೆಸ್ ಪಕ್ಷ ಆರ್. ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಜೆಡಿಎಸ್ ಪಕ್ಷ ಶಿರಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ.
ಬಿಜೆಪಿ ಆರ್. ಆರ್. ನಗರ ಮತ್ತು ಶಿರಾ ಎರಡೂ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಬೇಕು. ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗಿದೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ರಂಗೇರಲಿದೆ ಚುನಾವಣೆ ಅಖಾಡ
"ಪಕ್ಷದ ಅಭ್ಯರ್ಥಿಗಳು ರಾಜರಾಜೇಶ್ವರಿ ನಗರದಲ್ಲಿ ಅಕ್ಟೋಬರ್ 14ರಂದು ಮತ್ತು ಅಕ್ಟೋಬರ್ 15ರಂದು ಶಿರಾದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಚುನಾವಣಾ ಅಧಿಸೂಚನೆ ಪ್ರಕಟವಾಗುತ್ತಿದ್ದಂತೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಲಿದೆ. ಕೋವಿಡ್ ಭೀತಿಯ ನಡುವೆಯೇ ಉಪ ಚುನಾವಣೆ ನಡೆಯುತ್ತಿದ್ದು, ಪ್ರಚಾರಕ್ಕೂ ಹಲವಾರು ನಿಯಮಗಳನ್ನು ಹಾಕಲಾಗಿದೆ.

ರಾಜಕೀಯ ಪಕ್ಷಗಳ ಪ್ರತಿಷ್ಠೆ
ಆರ್. ಆರ್. ನಗರ ಮತ್ತು ಶಿರಾದಲ್ಲಿ 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿರಲಿಲ್ಲ. ಒಂದು ಜೆಡಿಎಸ್ ಇನ್ನೊಂದು ಕಾಂಗ್ರೆಸ್ ಗೆದ್ದಿತ್ತು. ಈಗ ರಾಜ್ಯದಲ್ಲಿ ಬಿಜೆಪಿಯೇ ಆಡಳಿತದಲ್ಲಿ ಇರುವುದರಿಂದ ಉಪ ಚುನಾವಣೆ ಪ್ರತಿಷ್ಠೆಯಾಗಿದೆ.
ಮತ್ತೊಂದು ಕಡೆ ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಆದ್ದರಿಂದ, ಅವರು ಸಹ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಅನುಕಂಪದ ಅಲೆ
ಶಿರಾ ಕ್ಷೇತ್ರದಲ್ಲಿ ಜೆಡಿಎಸ್‌ನ ಬಿ. ಸತ್ಯನಾರಾಯಣ ಅವರ ನಿಧನಿಂದಾಗಿ ಉಪ ಚುನಾವಣೆ ಎದುರಾಗಿದೆ. ಜೆಡಿಎಸ್ ಪಕ್ಷ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮಗೆ ಟಿಕೆಟ್ ನೀಡಿದೆ. ಅನುಕಂಪದ ಆಧಾರದ ಮತಗಳ ಮೇಲೆ ಕಣ್ಣಿಟ್ಟಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಸಹ ಕ್ಷೇತ್ರ ವಶಕ್ಕೆ ಪಡೆಯಲು ತಂತ್ರ ರೂಪಿಸುತ್ತಿವೆ.
Recommended Video

ಉಪ ಚುನಾವಣೆ
ಅಕ್ಟೋಬರ್ 9ರಂದು ಚುನಾವಣೆ ಅಧಿಸೂಚನೆ ಪ್ರಕಟ
ಅಕ್ಟೋಬರ್ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ
ಅಕ್ಟೋಬರ್ 17ರಂದು ನಾಮಪತ್ರಗಳ ಪರಿಶೀಲನೆ
ಅಕ್ಟೋಬರ್ 19 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
ನವೆಂಬರ್ 3ರಂದು ಮತದಾನ
ನವೆಂಬರ್ 10ರಂದು ಮತ ಎಣಿಕೆ












Click it and Unblock the Notifications