ಸೆ.13ರೊಳಗೆ ಲಿಖಿತ ಹೇಳಿಕೆ ಸಲ್ಲಿಸಿ; ಸಿದ್ದರಾಮಯ್ಯಗೆ ಕೋರ್ಟ್ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 03; ಮುಖ್ಯಮಂತ್ರಿ ಸಿದ್ಧರಾಮಯ್ಯ ಮೈಸೂರಿನ ವರುಣಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 13ಕ್ಕೆ ಹೈಕೋರ್ಟ್ ಮುಂದೂಡಿದೆ.
ಅರ್ಜಿ ವಿಚಾರಣೆ ಮುಂದೂಡಿರುವ ಕೋರ್ಟ್ ಸೆಪ್ಟೆಂಬರ್ 13ರೊಳಗೆ ಲಿಖಿತ ಹೇಳಿಕೆಯನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿಗೆ ತಮ್ಮ ಉತ್ತರವನ್ನು ನೀಡಲೇಬೇಕಿದೆ. ಆ ಉತ್ತರ ಆಧರಿಸಿ ನ್ಯಾಯಾಲಯ ವಿಚಾರಣೆಯನ್ನು ಮುಂದುವರಿಸಲಿದೆ.

ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ. ಎಂ. ಶಂಕರ್ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ನೇತೃತ್ವದ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆಗ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಪ್ರತಿವಾದಿಗಳಿಗೆ ಆಗಸ್ಟ್ 14ರಂದೇ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ನಿಯಮದಂತೆ ಪ್ರತಿವಾದಿಗಳಿಗೆ ಲಿಖಿತ ಹೇಳಿಕೆ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಲು 30 ದಿನ ಕಾಲಾವಕಾಶ ನೀಡಬೇಕು ಎಂದು ಹೇಳಿತು.
ಅಲ್ಲದೆ, ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 13ಕ್ಕೆ ಮುಂದೂಡಲಾಗುವುದು. ಅಷ್ಟರಲ್ಲಿ ಪ್ರತಿವಾದಿಗಳು ಲಿಖಿತ ಹೇಳಿಕೆ ಸಲ್ಲಿಸಬೇಕು ಎಂದು ಸೂಚಿಸಿತು. ಕಳೆದ ಜುಲೈ 28ರಂದು ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಎಲ್ಲಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತ್ತು.
ಗ್ಯಾರೆಂಟಿ ಲಂಚಕ್ಕೆ ಸಮ: ಅರ್ಜಿದಾರರು, ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದ್ದು, ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್ 123(1) ಪ್ರಕಾರ ಮತ್ತು ಸೆಕ್ಷನ್ 123(2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ.
ಸೆಕ್ಷನ್ 123(4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಅಕ್ರಮ ಎಸಗುವ ಮೂಲಕ ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿದ್ದು, ಅವರನ್ನು ಅಸಿಂಧುಗೊಳಿಸಬೇಕು ಎಂದು ಕೋರಿದ್ದಾರೆ.
ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿ ಸಿದ್ದರಾಮಯ್ಯ ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ವರುಣಾ ಕ್ಷೇತ್ರದಲ್ಲಿಕಾಂಗ್ರೆಸ್ ಪಕ್ಷ ದ ಅಭ್ಯರ್ಥಿಗೆ ಮತ ಹಾಕಲು ಮತದಾರರನ್ನು ಪ್ರೇರೇಪಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಆ ಮೂಲಕ ಸಿದ್ದರಾಮಯ್ಯ ಚುನಾವಣೆಯಲ್ಲಿ ಅಕ್ರಮಗಳನ್ನು ಎಸಗಿದ್ದಾರೆ. ಮತದಾರರಿಗೆ ಆಮಿಷವೊಡ್ಡುವುದು ಲಂಚ ಮತ್ತು ಭ್ರಷ್ಟಚಾರಕ್ಕೆ ಸಮನವಾಗಿದೆ. ಅಲ್ಲದೆ, ಪ್ರಜಾಪ್ರತಿನಿಧಿ ಕಾಯ್ದೆಯ ಅನ್ವಯ ಅಪರಾಧವಾಗಿದ್ದು, ಚುನಾವಣಾ ಮಾದರಿ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯೂ ಆಗಿದೆ ಎಂದು ಅರ್ಜಿದಾರರು ಕೋರಿದ್ದಾರೆ.












Click it and Unblock the Notifications